ಮಡಿಕೇರಿ: ಬಾಲಕಾರ್ಮಿಕರ ಕುರಿತ ಮಾಹಿತಿಯನ್ನು 1098 ಗೆ ನೀಡುವ ಮೂಲಕ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಮನವಿ ಮಾಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಮಕ್ಕಳ ವಿಶೇಷ ಪೊಲೀಸ್ ಘಟಕ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಮಕ್ಕಳ ರಕ್ಷಣಾ ಘಟಕ, ಮಡಿಕೇರಿ ವಕೀಲರ ಸಂಘದ ವತಿಯಿಂದ ಇಲ್ಲಿನ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಗುರುವಾರ ನಡೆದ ‘ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ’ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬಾಲಕಾರ್ಮಿಕ ಪದ್ಧತಿ ವಿರುದ್ಧ ಗ್ರಾಮ ಹಾಗೂ ಹಾಡಿಗಳಲ್ಲಿ ಪ್ರತೀ ನಿತ್ಯವೂ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ, ‘ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ನೀಡುವ ಮೂಲಕ ಅವರು ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳದಂತೆ ನೋಡಿಕೊಳ್ಳಬಹುದು’ ಎಂದು ಅಭಿಪ್ರಾಯಪಟ್ಟರು.
‘ಮಕ್ಕಳು ಸಮಾಜದಲ್ಲಿ ಉತ್ತಮ ಹಾದಿಯಲ್ಲಿ ಸಾಗುವಂತಾಗಲು ನೈತಿಕ ಹಾಗೂ ಮೌಲ್ಯಯುತ ಶಿಕ್ಷಣ ಹಿಂದಿಗಿಂತ ಇಂದು ಹೆಚ್ಚು ಅತ್ಯಗತ್ಯ. ಈ ನಿಟ್ಟಿನಲ್ಲಿ ಪೊಷಕರು ಗಮನಹರಿಸಬೇಕು’ ಎಂದು ಕಿವಿಮಾತು ಹೇಳಿದರು.
‘ನೈತಿಕತೆ ಹಾಗೂ ಮೌಲ್ಯ ಕುಸಿಯದಂತೆ ಪ್ರತಿಯೊಬ್ಬರೂ ಎಚ್ಚರ ವಹಿಸಬೇಕು. ಬಾಲ ಕಾರ್ಮಿಕ ಪದ್ಧತಿ ಕಂಡು ಬಂದಲ್ಲಿ ನಿರ್ದಾಕ್ಷಿಣ್ಯವಾಗಿ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು’ ಎಂದು ತಿಳಿಸಿದರು.
ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕ ಕಾಯ್ದೆ ಕುರಿತು ವಕೀಲರಾದ ಯಾಲದಾಳು ಮನೋಜ್ ಬೋಪಯ್ಯ ಮಾತನಾಡಿದರು.
‘14 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದು ಹಾಗೂ 18 ವರ್ಷದೊಳಗಿನ ಹದಿಹರೆಯದ ಕಾರ್ಮಿಕರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ’ ಎಂದು ತಿಳಿಸಿದರು.
ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಬೇಕು. ಸರ್ಕಾರವು ಸಹ ಉಚಿತ ಶಿಕ್ಷಣವನ್ನು ನೀಡುತ್ತಿದ್ದು, ಈ ಸೌಲಭ್ಯ ಪಡೆದುಕೊಳ್ಳಬೇಕು ಎಂದರು.
ಮಕ್ಕಳ ಪ್ರತಿಭೆ ಪ್ರದರ್ಶನಕ್ಕೂ ಅವಕಾಶ ಮಾಡಬೇಕು. ಪ್ರತಿಭೆ ಪ್ರದರ್ಶನ ಹಾಗೂ ಕೌಶಲ್ಯ ಪ್ರದರ್ಶನಕ್ಕೆ ಬಾಲ ಕಾರ್ಮಿಕ ಪದ್ಧತಿ ಎಂದು ಹೇಳಲು ಬರುವುದಿಲ್ಲ ಎಂದರು.
ಹಿಂದೆ ಬಾಲ ಕಾರ್ಮಿಕರಾಗಿ ದುಡಿಯುತ್ತಿದ್ದು, ನಂತರ ಶಾಲೆಗೆ ಸೇರಿ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿಯಲ್ಲಿ ಶೇ 75ಕ್ಕೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಇದೇ ವೇಳೆ ಸನ್ಮಾನಿಸಲಾಯಿತು. ಜೊತೆಗೆ ₹ 2 ಸಾವಿರ ಪ್ರೋತ್ಸಾಹಧನ ಬಹುಮಾನವನ್ನು ನೀಡಲಾಯಿತು.
ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಹೊಸಮನಿ ಪುಂಡಲಿಕ ಉದ್ಘಾಟಿಸಿದರು.
ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ.ರಂಗಧಾಮಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ತಿಪ್ಪಣ್ಣ ಪಿ.ಸಿರಸಗಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಬಿ.ಈರಸ್ವಾಮಿ, ಹಿರಿಯ ಕಾರ್ಮಿಕ ನಿರೀಕ್ಷಕ ಎಸ್.ಶಶಿಧರ್, ನಿಖಿಲ್ ಚಂದ್ರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕ ಜಯಪ್ಪ, ಜಿಲ್ಲಾ ಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕರಾದ ಆರ್.ಶೀರಾಝ್ ಅಹ್ಮದ್, ಭಾಗವಹಿಸಿದ್ದರು.
ಬಾಲ ಕಾರ್ಮಿಕ ಪದ್ಧತಿಯ ದುಷ್ಪರಿಣಾಮ ಹಾಗೂ ಮಕ್ಕಳ ಹಕ್ಕುಗಳ ಬಗ್ಗೆ ಯಕ್ಷಗಾನವನ್ನು ಪ್ರದರ್ಶಿಸಲಾಯಿತು.
ಬಾಲಕಾರ್ಮಿಕ ಮುಕ್ತ ಜಿಲ್ಲೆಯತ್ತ ಕೊಡಗು ದಾಪುಗಾಲು:
ಜಿಲ್ಲಾ ಕಾರ್ಮಿಕ ಅಧಿಕಾರಿ ಟಿ.ಕಾವೇರಿ ಅವರು ಮಾತನಾಡಿ ‘ಕೊಡಗು ಬಾಲಕಾರ್ಮಿಕ ಮುಕ್ತ ಜಿಲ್ಲೆಯತ್ತ ದಾಪುಗಾಲು ಹಾಕುವತ್ತಾ ಮಹತ್ವಾಕಾಂಕ್ಷೆ ಹೊಂದಿದೆ’ ಎಂದು ತಿಳಿಸಿದರು. ‘2017 ರಿಂದ ಇಲ್ಲಿಯವರೆಗೆ ಪತ್ತೆಯಾದ 22 ಬಾಲ ಕಾರ್ಮಿಕರು ಹಾಗೂ 50 ಕಿಶೋರ ಕಾರ್ಮಿಕರ ಪೈಕಿ 32 ಮಕ್ಕಳಿಗೆ ಪುನರ್ ವಸತಿ ಕಲ್ಪಿಸಲಾಗಿದ್ದು ಉಳಿದ 40 ಮಕ್ಕಳನ್ನು ಪೋಷಕರ ವಶಕ್ಕೆ ಒಪ್ಪಿಸಲಾಗಿದೆ’ ಎಂದು ಮಾಹಿತಿ ನೀಡಿದರು.
ಎಸ್‍ಸಿಎಸ್‍ಪಿ ಮತ್ತು ಟಿಎಸ್‍ಪಿ ಯೋಜನೆಯಡಿ 27 ಮಕ್ಕಳಿಗೆ ಕಲಿಕಾ ಸಾಮಗ್ರಿ ಹಾಗೂ ಆಹಾರ ಸಾಮಗ್ರಿಗಳ ಕಿಟ್ ಒದಗಿಸಲಾಗಿದೆ. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ವಿಶೇಷ ಕಾರ್ಯಪಡೆ ರಚಿಸಲಾಗಿದೆ ಎಂದು ಹೇಳಿದರು. ಅಂಗಡಿ ಹೋಟೆಲ್ ಗ್ಯಾರೇಜ್ ಕಲ್ಲುಕೋರೆ ಕೈಗಾರಿಕೆ ತೋಟಗಳು ಮನೆ ಹಾಗೂ ವಿವಿಧ ವಾಣಿಜ್ಯ ಸಂಸ್ಥೆಗಳಲ್ಲಿ ತಪಾಸಣೆ ಕೈಗೊಳ್ಳಲಾಗುತ್ತಿದೆ. ಜೊತೆಗೆ ವಿಶೇಷ ಅಭಿಯಾನ ಕಾರ್ಯಕ್ರಮಗಳು ನಡೆಯುತ್ತಿವೆ ಎಂದರು.
18ಕ್ಕೂ ಪ್ರಕರಣ ದಾಖಲು
ಮಡಿಕೇರಿ ತಾಲ್ಲೂಕು ಹಿರಿಯ ಕಾರ್ಮಿಕ ನಿರೀಕ್ಷಕ ಎಂ.ಎಂ.ಯತ್ನಟ್ಟಿ ಮಾತನಾಡಿ ‘ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಯಲ್ಲಿ 18ಕ್ಕೂ ಹೆಚ್ಚು ಮೊಕದ್ದಮೆಗಳನ್ನು ದಾಖಲಿಸಲಾಗಿದೆ.
ಶಾಲೆಯಿಂದ ಹೊರಗುಳಿದ 7 ಮಕ್ಕಳನ್ನು ಶಾಲೆಗೆ ಸೇರ್ಪಡೆ ಮಾಡಲಾಗಿದೆ’ ಎಂದು ತಿಳಿಸಿದರು. ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶ್ರಮಿಸುತ್ತಿರುವ ಹಿನ್ನೆಲೆಯಲ್ಲಿ ಅವರನ್ನು ಸನ್ಮಾನಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.