ADVERTISEMENT

ಕಾಂಕ್ರಿಟ್ ರಸ್ತೆ ಅಭಿವೃದ್ದಿ ಕಾಮಗಾರಿಗೆ ಭೂಮಿಪೂಜೆ

ಹಿಪ್ಪಲಿ-ಆಲೂರು ಸಿದ್ದಾಪುರ ರಸ್ತೆ ಅಭಿವೃದ್ಧಿಗೆ ₹ 1 ಕೋಟಿ

​ಪ್ರಜಾವಾಣಿ ವಾರ್ತೆ
Published 13 ಜೂನ್ 2025, 16:18 IST
Last Updated 13 ಜೂನ್ 2025, 16:18 IST
ಕಾಂಕ್ರೀಟ್ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಮಂತರ್‌ಗೌಡ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು 
ಕಾಂಕ್ರೀಟ್ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಮಂತರ್‌ಗೌಡ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು    

ಶನಿವಾರಸಂತೆ: ‘ಸರ್ಕಾರ ಚುನಾವಣೆ ಸಂದರ್ಭದಲ್ಲಿ ನೀಡಿದ ಆಶ್ವಾಸನೆಯಂತೆ ಗ್ಯಾರಂಟಿ ಯೋಜನೆಯನ್ನು ಜನರಿಗೆ ತಲುಪಿಸುತ್ತಿರುವ ಜೊತೆಯಲ್ಲಿಯೇ ಗ್ರಾಮೀಣ ಪ್ರದೇಶದಲ್ಲಿ ರಸ್ತೆ ಅಭಿವೃದ್ಧಿಯ ಹಾಗೂ ಸಮಗ್ರ ಅಭಿವೃದ್ಧಿ ಕಾರ್ಯವನ್ನು ಮಾಡುತ್ತಿದೆ’ ಎಂದು ಮಡಿಕೇರಿ ಶಾಸಕ ಡಾ.ಮಂತರ್‌ಗೌಡ ಹೇಳಿದರು.

ಹಂಡ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿಪ್ಪಲಿ-ಆಲೂರು–ಸಿದ್ದಾಪುರ ರಸ್ತೆಯನ್ನು ₹1 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಅವರು ಮಾತನಾಡಿದರು.

ಸರ್ಕಾರ ಗ್ರಾಮೀಣ ರಸ್ತೆ ಅಭಿವೃದ್ಧಿ, ಕಾಂಕ್ರಿಟ್ ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಹಂಡ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ₹ 1 ಕೋಟಿ ವೆಚ್ಚದಲ್ಲಿ ಹಿಪ್ಪಲಿ-ಆಲೂರು–ಸಿದ್ದಾಪುರ ಕಾಂಕ್ರಿಟ್ ರಸ್ತೆ ಅಭಿವೃದ್ಧಿ ಸೇರಿದಂತೆ ಗ್ರಾಮೀಣ ಪ್ರದೇಶದ ಕಾಂಕ್ರಿಟ್ ರಸ್ತೆ ಅಭಿವೃದ್ಧಿಗಾಗಿ ಒಟ್ಟು ₹2.5 ಕೋಟಿ ಅನುದಾನ ನೀಡಿದೆ ಎಂದರು.

ADVERTISEMENT

ಲೋಕೋಪಯೋಗಿ ಇಲಾಖೆ ಅಧಿಕಾರಿಗಳು, ಗುಣಮಟ್ಟದ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುವಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಗ್ರಾಮಸ್ಥರು ಸಹ ಕಳಪೆ ಕಾಮಗಾರಿ ನಡೆಯದಂತೆ ಮತ್ತು ಗುಣಮಟ್ಟದ ಕಾಮಗಾರಿ ನಡೆಯುವಂತೆ ಗಮನಹರಿಸಬೇಕು. ರಸ್ತೆ ವಿಸ್ತರಣೆ ಕಾಮಗಾರಿ ವೇಳೆ ರಸ್ತೆ ಬದಿಯ ತೋಟದ ಮಾಲೀಕರು ತಮ್ಮ ತೋಟದ ಬೇಲಿಯಲ್ಲಿರುವ ಮರದ ಕೊಂಬೆಗಳನ್ನು ತೆರವುಗೊಳಿಸುವ ಮೂಲಕ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಧಾ ಈರೇಶ್ ಮಾತನಾಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಕೆ.ಸತೀಶ್, ಅಕ್ರಮ ಸಕ್ರಮ ಕಾರ್ಯದರ್ಶಿ ಜನಾರ್ಧನ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಲೋಕೇಶ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಜಿ.ಎಂ.ಕಾಂತರಾಜ್, ಹಿರಿಯ ಕಾಂಗ್ರೆಸ್ ಮುಖಂಡ ಎಸ್.ಕೆ.ವೀರಪ್ಪ, ಕೆಡಿಪಿ ಸದಸ್ಯ ಎಸ್.ಸಿ.ಶರತ್ ಶೇಖರ್, ಹಂಡ್ಲಿ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ವೀರೇಂದ್ರಕುಮಾರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.