ADVERTISEMENT

ಬಿಜೆಪಿ SC ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ: ಸಾವಿರಕ್ಕೂ ಅಧಿಕ ಮಂದಿ ನೋಂದಣಿ ಗುರಿ

​ಪ್ರಜಾವಾಣಿ ವಾರ್ತೆ
Published 31 ಆಗಸ್ಟ್ 2024, 6:38 IST
Last Updated 31 ಆಗಸ್ಟ್ 2024, 6:38 IST
ಬಿಜೆಪಿ ಮುಖಂಡರಾದ ಕೆ.ಜಿ.ಬೋಪಯ್ಯ ಹಾಗೂ ಎಂ.ಪಿ.ಅಪ್ಪಚ್ಚುರಂಜನ್ ಅವರು ಭಾರತಾಂಬೆಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ರವಿ ಕಾಳಪ್ಪ ಭಾಗವಹಿಸಿದ್ದರು
ಬಿಜೆಪಿ ಮುಖಂಡರಾದ ಕೆ.ಜಿ.ಬೋಪಯ್ಯ ಹಾಗೂ ಎಂ.ಪಿ.ಅಪ್ಪಚ್ಚುರಂಜನ್ ಅವರು ಭಾರತಾಂಬೆಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ರವಿ ಕಾಳಪ್ಪ ಭಾಗವಹಿಸಿದ್ದರು   

ಮಡಿಕೇರಿ: ‘ಬಿಜೆಪಿ ಕೊಡಗು ಜಿಲ್ಲಾ ಎಸ್.ಸಿ ಮೋರ್ಚಾದಲ್ಲಿ ಸಾವಿರಕ್ಕೂ ಅಧಿಕ ಕಾರ್ಯಕರ್ತರನ್ನು ನೋಂದಣಿ ಮಾಡುವ ಗುರಿ ಹೊಂದಲಾಗಿದೆ’ ಎಂದು ಮೋರ್ಚಾದ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಎಂ.ರವಿ ಮೊಗೇರ ತಿಳಿಸಿದರು.

ಇಲ್ಲಿನ ಪಕ್ಷದ ಕಚೇರಿಯಲ್ಲಿ ಶುಕ್ರವಾರ ನಡೆದ ಬಿಜೆಪಿ ಎಸ್.ಸಿ ಮೋರ್ಚಾದ ಜಿಲ್ಲಾ ಕಾರ್ಯಕಾರಣಿಯಲ್ಲಿ ಅವರು ಮಾತನಾಡಿದರು.

‘ಪ್ರಗತಿ ಬಯಸದ ಪ್ರಗತಿಪರರು, ವಿಚಾರ ಇಲ್ಲದ ವಿಚಾರವಾದಿಗಳು, ಬುದ್ಧಿ ಇಲ್ಲದ ಬುದ್ಧಿಜೀವಿಗಳು ಪರಿಶಿಷ್ಟ ಜಾತಿಯ ಜನರನ್ನು ಕಾಂಗ್ರೆಸ್‌ಗೆ ಬೆಂಬಲ ನೀಡುವಂತೆ ಹೇಳುತ್ತಿದ್ದಾರೆ. ಮಾತ್ರವಲ್ಲ, ಬಿಜೆಪಿಯನ್ನು ದಲಿತ ವಿರೋಧಿ ಎಂದು ಕಾಂಗ್ರೆಸ್ ಬಿಂಬಿಸುತ್ತಿದೆ. ಆದರೆ, ದಲಿತರಿಗೆ ಬಿಜೆಪಿ ಉನ್ನತ ಸ್ಥಾನಮಾನ ನೀಡಿದೆ’ ಎಂದು ಪ್ರತಿಪಾದಿಸಿದರು.

ADVERTISEMENT

‘‌ಹಿಂದಿನ ರಾಷ್ಟ್ರಪತಿ, ಈಗಿನ ರಾಷ್ಟ್ರಪತಿ ಮಾತ್ರವಲ್ಲ ಇನ್ನೂ ಅನೇಕ ಉನ್ನತ ಸ್ಥಾನಗಳಿಗೆ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡದವರನ್ನು ಬಿಜೆಪಿ ನೇಮಕ ಮಾಡಿದೆ. ಆದರೆ, ಕೇವಲ ಮತಬ್ಯಾಂಕ್ ರಾಜಕಾರಣಕ್ಕಾಗಿ ದಲಿತರ ಪರವಾಗಿ ಮಾತನಾಡುವ ಕಾಂಗ್ರೆಸ್ ಪಕ್ಷವು ಬಿಜೆಪಿ ಕೊಟ್ಟಷ್ಟು ಸ್ಥಾನಮಾನ ನೀಡಿಲ್ಲ’ ಎಂದು ಹೇಳಿದರು.

‘ಇಂದು ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಎಸ್‌.ಸಿ ಎಸ್‌.ಟಿ ಅನುದಾನವನ್ನು ಸರ್ಕಾರ ಅನ್ಯ ಉದ್ದೇಶಕ್ಕೆ ಬಳಕೆ ಮಾಡಿಕೊಂಡಿದೆ’ ಎಂದು ಆರೋಪಿಸಿದರು.

ಬಿಜೆಪಿ ನಾಯಕ ಎಂ.ಪಿ.ಅಪ್ಪಚ್ಚುರಂಜನ್ ಮಾತನಾಡಿ, ‘ಕಾಂಗ್ರೆಸ್ ದಲಿತರ ಮತ ಪಡೆದು ಅವರ ಅಭಿವೃದ್ಧಿಗೆ ಯಾವುದೇ ಕ್ರಮಗಳನ್ನೂ ಕೈಗೊಳ್ಳುತ್ತಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಬಿಜೆಪಿ ಕೇವಲ ಮೇಲ್ವರ್ಗದವರ ಪಕ್ಷ ಎಂಬ ತಪ್ಪು ಅಭಿಪ್ರಾಯವನ್ನು ಕಾಂಗ್ರೆಸ್ ಮೂಡಿಸುತ್ತಿದೆ. ಇದಕ್ಕೆ ಪ್ರತಿಯಾಗಿ ಬಿಜೆಪಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ನೀಡಿರುವ ಉನ್ನತ ಸ್ಥಾನಮಾನಗಳನ್ನು ಕುರಿತು ಪಕ್ಷದ ಕಾರ್ಯಕರ್ತರು ಹೆಚ್ಚು ಪ್ರಚಾರ ಮಾಡಬೇಕು. ಕೊಡಗು ಜಿಲ್ಲೆಯಲ್ಲಿರುವ 40 ಸಾವಿರ ಪರಿಶಿಷ್ಟ ಜಾತಿಯ ಮತದಾರರಿಗೆ ಮನವರಿಕೆ ಮಾಡಿಕೊಡಬೇಕು’ ಎಂದು ಕರೆ ನೀಡಿದರು.

‘ಹಿಂದೆ ನಾನು ಮತ್ತು ಕೆ.ಜಿ.ಬೋಪಯ್ಯ ಅವರು ಶಾಸಕರಾಗಿದ್ದಾಗ ವಾರಕ್ಕೆ ಇಬ್ಬರೂ ಮಡಿಕೇರಿಯಲ್ಲಿ ಸಿಗುತ್ತಿದ್ದೆವು. ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದೆವು. ಈಗಿನ ಶಾಸಕರು ವಾರಕ್ಕೆ ಎಷ್ಟು ದಿನ ಸಿಗುತ್ತಾರೆ, ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದಾರೆ ಎನ್ನುವುದನ್ನು ಮನವರಿಕೆ ಮಾಡಿಕೊಳ್ಳಬೇಕು’ ಎಂದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರವಿಕಾಳಪ್ಪ ಮಾತನಾಡಿ, ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಬಿಜೆಪಿಯಲ್ಲಿ ಉನ್ನತ ಸ್ಥಾನ ಕೊಡಲಾಗುತ್ತದೆ. ಎಲ್ಲರೂ ಪಕ್ಷಕ್ಕೆ ಸೇರ್ಪಡೆಯಾಗಿ ಗೆಲುವಿಗಾಗಿ ಶ್ರಮಿಸಬೇಕು. ಈ ಬಾರಿ ನಡೆಯುವ ಸದಸ್ಯತ್ವ ಅಭಿಯಾನದಲ್ಲಿ ಹೆಚ್ಚು ಹೆಚ್ಚು ಸದಸ್ಯರನ್ನು ನೋಂದಾಯಿಸಬೇಕು’ ಎಂದು ಹೇಳಿದರು.

ಜೊತೆಗೆ, ಜಿಲ್ಲಾ ಬಿಜೆಪಿ ಎಸ್.ಸಿ.ಮೋರ್ಚಾ ಮಾಡಿರುವ ಕಾರ್ಯಗಳನ್ನೂ ಶ್ಲಾಘಿಸಿದರು.

ಮುಖಂಡರಾದ ಕೆ.ಜಿ.ಬೋಪಯ್ಯ, ಪರಮೇಶ್, ಅಭಿಜಿತ್, ನಾಗೇಶ್ ಕುಂದಲ್ಪಾಡಿ ಭಾಗವಹಿಸಿದ್ದರು.

ಬಿಜೆಪಿ ಎಸ್.ಸಿ ಮೋರ್ಚಾದ ಜಿಲ್ಲಾ ಕಾರ್ಯಕಾರಣಿಯಲ್ಲಿ ಭಾಗವಹಿಸಿದ್ದ ಕಾರ್ಯಕರ್ತರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.