ಗೋಣಿಕೊಪ್ಪಲು: ಇಲ್ಲಿನ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಈಚೆಗೆ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ಅಕ್ಷಯ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಕೆ.ಕೆ. ಸೋಮಯ್ಯ ಮಾತನಾಡಿ, ಗೋಣಿಕೊಪ್ಪಲಿನ ಅಕ್ಷಯ ಚಾರಿಟಬಲ್ ಟ್ರಸ್ಟ್ ಮತ್ತು ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಗೋಣಿಕೊಪ್ಪಲು ಘಟಕದ ಸಂಯುಕ್ತ ಆಶ್ರಯದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಒಟ್ಟು 36 ಯೂನಿಟ್ ರಕ್ತ ಸಂಗ್ರಹವಾಗಿದೆ. ಕೊಡಗು ಜಿಲ್ಲೆಯಾದ್ಯಂತ ಸರಣಿ ರಕ್ತದಾನ ಶಿಬಿರವನ್ನು ಹಂತ ಹಂತವಾಗಿ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಯತಿರಾಜ್ ಮಾತನಾಡಿ, ಕೊಡಗಿನಲ್ಲಿ ತಿಂಗಳಿಗೆ 500 ಯೂನಿಟ್ ರಕ್ತದ ಅಗತ್ಯವಿದ್ದು, ರೋಗಿಗಳಿಗೆ ಜೀವದಾನ ನೀಡಲು ರಕ್ತ ದಾಸ್ತಾನು ಅಗತ್ಯವಿದೆ. ಪ್ರತಿ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡುವುದರಿಂದ ರಕ್ತದಲ್ಲಿ ಶೇಖರಣೆಗೊಳ್ಳುವ ಕೊಬ್ಬಿನ ಅಂಶದಿಂದ ಮುಕ್ತಿದೊರೆಯುತ್ತದೆ ಎಂದರು.
ರಾಜ್ಯ ವನ್ಯ ಜೀವಿ ಮಂಡಳಿ ಸದಸ್ಯ ಹಾಗೂ ಅರಣ್ಯ ಇಲಾಖೆ ವನ್ಯಜೀವಿ ವಿಭಾಗದ ಹೊರಗುತ್ತಿಗೆ ನೌಕರರ ಸಂಘದ ಅಧ್ಯಕ್ಷ ಸಂಕೇತ್ ಪೂವಯ್ಯ, ಗೋಣಿಕೊಪ್ಪಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ, ಜಿಲ್ಲಾ ಆಸ್ಪತ್ರೆ ರಕ್ತ ನಿಧಿ ಘಟಕದ ವೈದ್ಯಾಧಿಕಾರಿ ಡಾ. ಕರುಂಬಯ್ಯ, ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ಗೋಣಿಕೊಪ್ಪಲು ಘಟಕದ ಅಧ್ಯಕ್ಷ ಬಿ.ಎನ್. ಪ್ರಕಾಶ್, ಸಂಯೋಜಕ ಎಂ.ಎನ್. ಉತ್ತಪ್ಪ, ಮುಖ್ಯ ಶಿಕ್ಷಕ ಎಚ್.ಕೆ.ಕುಮಾರ್, ಅಕ್ಷಯ ಚಾರಿಟಬಲ್ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಪಡಿಕಲ್ ಕುಸುಮಾವತಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.