ಮಡಿಕೇರಿ: ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯನ್ನು ಪ್ರಾರಂಭಿಸಲು ನಿರ್ಧರಿಸಿದೆ. ವಿವಿಧ ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟರನ್ನು ನೇಮಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದರು.
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಹಾಗೂ ಇತರೆ ಚುನಾವಣೆ ವಿಷಯಗಳ ಕುರಿತು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಇಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಗುರುವಾರ ಸಭೆ ನಡೆಸಿ ಮಾತನಾಡಿದರು.
ಕೇಂದ್ರ ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯನ್ನು ಪ್ರಾರಂಭಿಸಲು ನಿರ್ಧರಿಸಿದೆ. ಈ ಹಿನ್ನೆಲೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕುರಿತಂತೆ ಜಿಲ್ಲೆಯಲ್ಲಿಯೂ ಸಹ ಪೂರ್ವ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಹೇಳಿದರು.
2002ರಲ್ಲಿ ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ನಡೆಸಲಾಗಿತ್ತು. ಆನಂತರ ಈಗ ಪ್ರಕ್ರಿಯೆ ಆರಂಭವಾಗುತ್ತಿದೆ. ಆ ದಿಸೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟರನ್ನು ನೇಮಿಸಿಕೊಳ್ಳಬೇಕು ಎಂದು ಕೋರಿದರು.
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧಿಸಿದಂತೆ ನಮೂನೆ-6 ರಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ನಮೂನೆ-7 ಮತದಾರರ ಪಟ್ಟಿಯಿಂದ ಹೆಸರು ತೆಗೆಯುವುದು, ನಮೂನೆ-8 ರಲ್ಲಿ ತಿದ್ದುಪಡಿ, ಸ್ಥಳಾಂತರ, ಎಪಿಕ್ ಕಾರ್ಡ್ ಬದಲಾವಣೆ, ಪಿಡಬ್ಲ್ಯುಡಿ ಮಾರ್ಕಿಂಗ್ (ವಿಕಲಚೇತನರನ್ನು ಗುರುತಿಸುವುದು) ಈ ಕೆಲಸವನ್ನು ಬೂತ್ ಮಟ್ಟದ ಏಜೆಂಟರು ಮಾಡಿದ್ದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣಾ ಕಾರ್ಯ ಸಮರ್ಪಕವಾಗಲಿದೆ ಎಂದರು.
ಬೂತ್ ಮಟ್ಟದಲ್ಲಿ ಮತದಾರರ ವಿವರ, ನಮೂನೆ-6, 7 ಮತ್ತು 8ರ ಬಗ್ಗೆ ಸ್ಥಳೀಯರಿಗೆ ಮಾಹಿತಿ ನೀಡಬೇಕು ಎಂದು ಅವರು ಸಲಹೆ ನೀಡಿದರು.
ವಿವಿಧ ರಾಜಕೀಯ ಪಕ್ಷಗಳು ತಾವು ನೇಮಕ ಮಾಡುವ ಬೂತ್ ಮಟ್ಟದ ಏಜೆನ್ಸಿಗಳ ಪಟ್ಟಿಯನ್ನು ಜಿಲ್ಲಾ ಚುನಾವಣಾ ಕಚೇರಿಗೆ ಒದಗಿಸಬೇಕು. ಆ ನಿಟ್ಟಿನಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧ ಎಲ್ಲೆಡೆ ಜಾಗೃತಿ ಮೂಡಿಸಬೇಕು ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ವಿವಿಧ ಪಕ್ಷದ ಪ್ರಮುಖರಾದ ತೆನ್ನಿರಾ ಮೈನಾ(ಕಾಂಗ್ರೆಸ್), ಸಜ್ಜಿಲ್ ಕೃಷ್ಣ(ಬಿಜೆಪಿ), ಗುಲಾಬಿ ಜನಾರ್ದನ(ಜೆಡಿಎಸ್), ರಮೇಶ್(ಸಿಪಿಐಎಂ), ಸೋಮಪ್ಪ(ಸಿಪಿಐ), ಪೃಥ್ವಿ(ಎಎಪಿ) ಅವರು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಹಾಗೂ ಬೂತ್ ಮಟ್ಟದ ಏಜೆಂಟರ ನೇಮಕ ಸಂಬಂಧಿಸಿದಂತೆ ಹಲವು ಮಾಹಿತಿ ನೀಡಿದರು.
2002ರಲ್ಲಿ ರಾಜ್ಯದಲ್ಲಿ ನಡೆದಿತ್ತು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಇದೀಗ ಆರಂಭವಾಗುತ್ತಿದೆ ಪ್ರಕ್ರಿಯೆ ಪೂರ್ವಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.