ADVERTISEMENT

ಕೊಡಗು: 8 ತಿಂಗಳಿನಲ್ಲಿ 6 ಬಾಲ್ಯವಿವಾಹಕ್ಕೆ ತಡೆ

ಅತಿ ಹೆಚ್ಚು ಬಾಲ್ಯವಿವಾಹ, ಪೊಕ್ಸೊ ಪ್ರಕರಣ ನಡೆಯುವ ಪ್ರದೇಶ ಗುರುತಿಸಲು ಜಿಲ್ಲಾಧಿಕಾರಿ ಸೂಚನೆ

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2025, 5:25 IST
Last Updated 5 ನವೆಂಬರ್ 2025, 5:25 IST
ಸಭೆಯಲ್ಲಿ ಬಾಲ್ಯವಿವಾಹ ಮುಕ್ತ ಕೊಡಗು ಅಭಿಯಾನದ ಭಿತ್ತಿಪತ್ರವನ್ನು ಬಿಡುಗಡೆ ಮಾಡಲಾಯಿತು
ಸಭೆಯಲ್ಲಿ ಬಾಲ್ಯವಿವಾಹ ಮುಕ್ತ ಕೊಡಗು ಅಭಿಯಾನದ ಭಿತ್ತಿಪತ್ರವನ್ನು ಬಿಡುಗಡೆ ಮಾಡಲಾಯಿತು   

ಮಡಿಕೇರಿ: ಕಳೆದ 8 ತಿಂಗಳಿನಲ್ಲಿ 6 ಬಾಲ್ಯವಿವಾಹವನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ತಡೆದಿದೆ.

ಏಪ್ರಿಲ್‌ನಿಂದ ಇಲ್ಲಿಯವರೆಗೆ ಒಟ್ಟು ಬಾಲ್ಯವಿವಾಹ ಕುರಿತ 12 ದೂರುಗಳು ಬಂದಿದ್ದವು. ಅವುಗಳಲ್ಲಿ 6ನ್ನು ತಡೆಯಲಾಗಿತ್ತು. ಉಳಿದ 6 ದೂರುಗಳು ಮದುವೆಯಾದ ನಂತರ ಬಂದಿದ್ದರಿಂದ ಪ್ರಕರಣ ದಾಖಲಿಸಲಾಗಿದೆ ಎಂಬ ವಿಷಯ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಜಿಲ್ಲಾಮಟ್ಟದ ಜಿಲ್ಲಾ ಮಕ್ಕಳ ಕಲ್ಯಾಣ ಹಾಗೂ ರಕ್ಷಣಾ ಸಮಿತಿಯ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪ್ರಸ್ತಾಪವಾಯಿತು.

ಜಿಲ್ಲಾಧಿಕಾರಿ ವೆಂಕಟ್ ರಾಜಾ ಪ್ರತಿಕ್ರಿಯಿಸಿ, ಅತಿ ಹೆಚ್ಚು ಬಾಲ್ಯವಿವಾಹ ಮತ್ತು ಪೊಕ್ಸೊ ಪ್ರಕರಣಗಳು ನಡೆಯುವ ಪ್ರದೇಶಗಳನ್ನು ಗುರುತಿಸಿ ಅಂತಹ ಪ್ರದೇಶದಲ್ಲಿ ಹೆಚ್ಚಿನ ಅರಿವು ಹಾಗೂ ಕಾನೂನುಗಳ ಕುರಿತು ಪ್ರಚಾರ ನಡೆಸುವಂತೆ ನಿರ್ದೇಶನ ನೀಡಿದರು.

ADVERTISEMENT

ಜಿಲ್ಲೆಯಲ್ಲಿ ಬಾಲ್ಯ ವಿವಾಹ ಹಾಗೂ ಪೊಕ್ಸೊ ಪ್ರಕರಣಗಳನ್ನು ತಡೆಗಟ್ಟಲು ಎಲ್ಲಾ ಇಲಾಖೆಗಳೂ ಆದ್ಯತೆಯ ಮೇರೆಗೆ ಕ್ರಮ ವಹಿಸಿ ಕಳೆದ 5 ವರ್ಷಗಳ ಪ್ರಕರಣಗಳ ಅವಲೋಕನ ನಡೆಸಿ ಅತೀ ಹೆಚ್ಚು ಪ್ರಕರಣಗಳು ನಡೆಯುವ ಪ್ರದೇಶಗಳನ್ನು ಗುರುತಿಸಿ ಅಂತಹ ಪ್ರದೇಶದಲ್ಲಿ ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದರು.

ಶಾಲೆಯಿಂದ ಹೊರಗುಳಿದ ಮಕ್ಕಳು ಹೆಚ್ಚಾಗಿ ಬಾಲ್ಯವಿವಾಹ ಹಾಗೂ ಪೋಕ್ಸೋ ಸಂತ್ರಸ್ಥರಾಗಿ ಕಂಡುಬರುತ್ತಿದ್ದು, ಇದನ್ನು ತಡೆಗಟ್ಟಲು ಶಾಲೆಯಿಂದ ಮಕ್ಕಳು ಹೊರಗುಳಿದ ತಕ್ಷಣ ಶಿಕ್ಷಣ ಇಲಾಖೆ ಅಧಿಕಾರಿಗಳು ನಿಯಮಾನುಸಾರ ಕ್ರಮವಹಿಸುವಂತೆ ನಿರ್ದೇಶನ ನೀಡಿದರು.

ಪೊಕ್ಸೊ ಸಂತ್ರಸ್ತ ಮಕ್ಕಳಿಗೆ ಪ್ರಕರಣ ದಾಖಲಾದ ತಕ್ಷಣ ಪರಿಹಾರ ಒದಗಿಸಲು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಕ್ರಮವಹಿಸಬೇಕು ಎಂದರು.

ಅವರು ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳಾದ ವಿಶೇಷ ಪಾಲನಾ ಯೋಜನೆ, ಪ್ರಾಯೋಜಕತ್ವ ಕಾರ್ಯಕ್ರಮ, ದತ್ತು ಕಾರ್ಯಕ್ರಮ, ಉಪಕಾರ ಯೋಜನೆ, ಮುಖ್ಯಮಂತ್ರಿ ಬಾಲಸೇವಾ ಯೋಜನೆ, ಮತ್ತಿತರ ಯೋಜನೆಗಳ ಪ್ರಗತಿಯ ಕುರಿತು ಪ್ರಗತಿ ಪರಿಶೀಲನೆ ನಡೆಸಿದರು.

ಬಾಲ್ಯವಿವಾಹ ಮುಕ್ತ ಕೊಡಗಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ವಿವಿಧ ಕಾರ್ಯಕ್ರಮಗಳನ್ನು ನಡೆಸಲು ಉದ್ದೇಶಿಸಲಾಗಿದೆ. ಇದರ ಅಂಗವಾಗಿ ಪ್ರಾಥಮಿಕ ಹಂತವಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ತಯಾರಿಸಲಾಗಿರುವ ಭಿತ್ತಿ ಪತ್ರವನ್ನು ಜಿಲ್ಲಾಧಿಕಾರಿ ವೆಂಕಟ್ ರಾಜಾ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್ ಅವರು ಇದೇ ವೇಳೆ ಬಿಡುಗಡೆ ಮಾಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಪ್ರಸನ್ನ ಕುಮಾರ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಬಸವರಾಜ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ದೀಪಕ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ರೇಖಾ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ವಿ.ಟಿ.ವಿಸ್ಮಯಿ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ಶೀರಾಜ್ ಅಹಮದ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ  ಆರ್.ಕೃಷ್ಣಮೂರ್ತಿ ಭಾಗವಹಿಸಿದ್ದರು.

ಮಡಿಕೇರಿಯಲ್ಲಿ ಜಿಲ್ಲಾಧಿಕಾರಿ ವೆಂಕಟ್‌ರಾಜಾ ಅವರು ಮಂಗಳವಾರ ಜಿಲ್ಲಾ ಮಕ್ಕಳ ಕಲ್ಯಾಣ ಹಾಗೂ ರಕ್ಷಣಾ ಸಮಿತಿಯ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.