ADVERTISEMENT

ಮಡಿಕೇರಿ: ಪೌರಕಾರ್ಮಿಕರಿಗೆ ನಿವೇಶನ ಒದಗಿಸಲು ಸೂಚನೆ

ಗೋಣಿಕೊಪ್ಪಲಿನಲ್ಲಿ ತೀರಾ ಸಂಕಷ್ಟಮಯದಲ್ಲಿ ಬದುಕುತ್ತಿರುವ ಪೌರಕಾರ್ಮಿಕರು

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2025, 4:09 IST
Last Updated 5 ಅಕ್ಟೋಬರ್ 2025, 4:09 IST
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಹಾಗೂ ಜಿಲ್ಲಾಧಿಕಾರಿ ವೆಂಕಟ್ ರಾಜಾ ಭಾಗವಹಿಸಿದ್ದರು
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಹಾಗೂ ಜಿಲ್ಲಾಧಿಕಾರಿ ವೆಂಕಟ್ ರಾಜಾ ಭಾಗವಹಿಸಿದ್ದರು   

ಮಡಿಕೇರಿ: ಗೋಣಿಕೊಪ್ಪಲಿನಲ್ಲಿ ತೀರ ಸಂಕಷ್ಟಮಯ ವಾತಾವರಣದಲ್ಲಿ ವಾಸಿಸುತ್ತಿರುವ ಪೌರಕಾರ್ಮಿಕರಿಗೆ ನಿವೇಶನಕ್ಕಾಗಿ ಜಾಗ ಗುರುತಿಸಬೇಕು ಹಾಗೂ ಕೊಳೆಗೇರಿ ನಿರ್ಮೂಲನಾ ಮಂಡಳಿ ವತಿಯಿಂದ ಮನೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಪೊನ್ನಂಪೇಟೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗೆ ಸೂಚಿಸಿದರು.

ಇಲ್ಲಿ ಶನಿವಾರ ನಡೆದ ಸಫಾಯಿ ಕರ್ಮಚಾರಿಗಳ, ಮ್ಯಾನ್ಯುವೆಲ್ ಸ್ಕ್ಯಾವೆಂಜರ್‌ ಜಿಲ್ಲಾ ಜಾಗೃತಿ ಸಮಿತಿ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು.

ಇದಕ್ಕೂ ಮುನ್ನ ಸಭೆಯಲ್ಲಿ ಮಾತನಾಡಿದ ಸಮಿತಿ ಸದಸ್ಯ ಡಿ.ಆರ್.ರಾಜು, ‘ಗೋಣಿಕೊಪ್ಪಲುವಿನಲ್ಲಿ ಪೌರಕಾರ್ಮಿಕರು ಎರಡು ಬದಿ ಚರಂಡಿ ನೀರು ಹರಿಯುವ ಮಧ್ಯದಲ್ಲಿ ಪ್ರಾಣಿಗಳಂತೆ ವಾಸ ಮಾಡುತ್ತಿದ್ದಾರೆ. ಈ ಕುಟುಂಬಗಳಿಗೆ ನಿವೇಶನ ಒದಗಿಸಿ ಗೃಹಭಾಗ್ಯ ಯೋಜನೆಯಡಿ ಮನೆ ನಿರ್ಮಿಸಿಕೊಡಬೇಕು’ ಎಂದು ಮನವಿ ಮಾಡಿದರು.

ADVERTISEMENT

ಪೌರಕಾರ್ಮಿಕರು ಎರಡು ತಲೆಮಾರುಗಳಿಂದ ಅದೇ ಸ್ಥಳದಲ್ಲಿಯೇ ವಾಸ ಮಾಡುತ್ತಿದ್ದು, ಇವರಿಗೆ ಇದುವರೆಗೆ ನಿವೇಶನ ಒದಗಿಸಿಲ್ಲ. ಆದ್ದರಿಂದ ಮಾನವೀಯ ದೃಷ್ಟಿಯಿಂದ ಜಿಲ್ಲೆಯಲ್ಲಿನ ನಿವೇಶನ ರಹಿತ ಪೌರಕಾರ್ಮಿಕರಿಗೆ ವಸತಿ ಹಾಗೂ ಮನೆ ನಿರ್ಮಿಸಿಕೊಡಬೇಕು ಎಂದು ಅವರು ಕೋರಿದರು.

ಪೌರಕಾರ್ಮಿಕರಲ್ಲಿ ಕೆಲವರಿಗೆ ಕಾಯಂ ಆಗಿದ್ದು, ಇನ್ನು ಹಲವರಿಗೆ ಕಾಯಂ ಮಾಡಿಲ್ಲ. ಆ ನಿಟ್ಟಿನಲ್ಲಿ ಪೌರಕಾರ್ಮಿಕರಿಗೆ ಸೂಕ್ತ ಸೇವಾ ಭದ್ರತೆ ಒದಗಿಸಬೇಕು ಎಂದರು.

ಈ ವೇಳೆ ಮಾತನಾಡಿದ ಸಮಿತಿ ಸದಸ್ಯ ರಂಗಸ್ವಾಮಿ, ‘ಪೌರಕಾರ್ಮಿಕರಿಗೆ ಸೇವಾ ಭದ್ರತೆ ಒದಗಿಸುವುದರ ಜೊತೆಗೆ ನೇಮಕಾತಿ ಆದೇಶ ಪತ್ರ ನೀಡಬೇಕು’ ಎಂದು ಮನವಿ ಮಾಡಿದರು.

ಜಿಲ್ಲೆಯ ಸ್ಥಳೀಯ ಸಂಸ್ಥೆ ವ್ಯಾಪ್ತಿಗಳಲ್ಲಿ ಪೌರಕಾರ್ಮಿಕರು ಕರ್ತವ್ಯ ನಿರ್ವಹಿಸುತ್ತಿದ್ದು, ನಿವೇಶನ ರಹಿತ ಪೌರಕಾರ್ಮಿಕ ಕುಟುಂಬಗಳಿಗೆ ನಿವೇಶನ ಒದಗಿಸಬೇಕಿದೆ. ಪೌರಕಾರ್ಮಿಕ ವೃತ್ತಿಯನ್ನೇ ನಂಬಿಕೊಂಡು ಬದುಕುತ್ತಿದ್ದು, ಇಂತಹ ಕುಟುಂಬಗಳಿಗೆ ನಿವೇಶನ ಜೊತೆಗೆ ಗೃಹಭಾಗ್ಯ ಯೋಜನೆಯಡಿ ಮನೆ ನಿರ್ಮಿಸಬೇಕು ಎಂದು ಸಮಿತಿ ಸದಸ್ಯರೊಬ್ಬರು ಹೇಳಿದರು.

ಗೋಣಿಕೊಪ್ಪಲುವಿನಲ್ಲಿ ಈಚೆಗೆ ಒಬ್ಬ ಪೌರಕಾರ್ಮಿಕರು ಮೃತಪಟ್ಟಿದ್ದು, ಇವರ ಕುಟುಂಬಕ್ಕೆ ಯಾವುದೇ ರೀತಿಯ ಸೌಲಭ್ಯ ಕಲ್ಪಿಸಿಲ್ಲ. ಜೊತೆಗೆ, ಮನೆ ಖಾಲಿ ಮಾಡಿ ಎಂದು ಒತ್ತಾಯಿಸುತ್ತಿದ್ದಾರೆ. ಈ ಸಂಬಂಧ ಅಧಿಕಾರಿಗಳು ಪೌರಕಾರ್ಮಿಕರ ಭದ್ರತೆಗೆ ಮುಂದಾಗಬೇಕು ಎಂದು ಅವರು ಕೋರಿದರು.

ಜಿಲ್ಲೆಯ ಬಸ್‌ನಿಲ್ದಾಣ ಹಾಗೂ ಇತರೆ ಕಡೆಗಳಲ್ಲಿ ಶೌಚಾಲಯ ನಿರ್ವಹಣೆಗೆ ಪೌರಕಾರ್ಮಿಕರಿಗೆ ಅವಕಾಶ ಮಾಡಬೇಕು ಎಂದು ಇದೇ ವೇಳೆ ಮನವಿ ಮಾಡಲಾಯಿತು.

ಈ ವೇಳೆ ಮಾತನಾಡಿದ ವಿರಾಜಪೇಟೆ ಪುರಸಭೆ ಮುಖ್ಯಾಧಿಕಾರಿ ನಾಚಪ್ಪ, ವಿರಾಜಪೇಟೆಯಲ್ಲಿ 15 ಮಂದಿ ಕಾಯಂ ಪೌರಕಾರ್ಮಿಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದರು.

ಪ್ರತಿಕ್ರಿಯಿಸಿದ ಡಿ.ಆರ್.ರಾಜು, ‘ಪೌರಕಾರ್ಮಿಕರನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳುವಂತಿಲ್ಲ. ಪೌರಕಾರ್ಮಿಕರಿಗೆ ಸ್ಥಳೀಯ ಸಂಸ್ಥೆಗಳಿಂದ ನೇರವಾಗಿ ವೇತನ ಪಾವತಿಸಬೇಕು’ ಎಂದರು.

ಮತ್ತೊಬ್ಬ ಸದಸ್ಯ ವಿಜಯಕುಮಾರ್ ಮಾತನಾಡಿ, ‘ಪೌರಕಾರ್ಮಿಕರು ಬಾಡಿಗೆ ಮನೆಯಲ್ಲಿ ವಾಸ ಮಾಡಿಕೊಂಡು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರಿಗೆ ನೀಡುವ ಕನಿಷ್ಠ ವೇತನ ಸಾಲುತ್ತಿಲ್ಲ. ಈ ಬಗ್ಗೆ ಸಂಬಂಧಪಟ್ಟವರು ಗಮನಹರಿಸಬೇಕು’ ಎಂದು ಒತ್ತಾಯಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶೇಖರ್, ಸಮಿತಿ ಸದಸ್ಯರಾದ ರೂಪಾ, ತೇಜಾವತಿ, ರಾಜೇಶ್ವರಿ, ಎಚ್.ಎಸ್.ಮುತ್ತಪ್ಪ, ಜಾಯ್ಸ್ ಮೆನೇಜಸ್, ಪಿ.ಪಿ.ಸುಕುಮಾರ, ಜೆ.ಎಲ್.ಜನಾರ್ಧನ, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಿ.ಬಸಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಪುರಸಭೆ ಮುಖ್ಯಾಧಿಕಾರಿಗಳಾದ ಕೃಷ್ಣಪ್ರಸಾದ್, ನಾಚಪ್ಪ, ಗಿರೀಶ್, ಗೋಪಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಪರಮೇಶ್, ಅಪ್ಪಣ್ಣ, ತಹಶೀಲ್ದಾರ್ ಕಿರಣ್ ಗೌರಯ್ಯ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಭಾಗವಹಿಸಿದ್ದರು.

ಸಭೆಯಲ್ಲಿ ಭಾಗವಹಿಸಿದ್ದ ಅಧಿಕಾರಿಗಳು ಹಾಗೂ ಸಮಿತಿ ಸದಸ್ಯರು
700 ಜನಸಂಖ್ಯೆಗೆ ಒಬ್ಬ ಪೌರಕಾರ್ಮಿಕರನ್ನು ನಿಯೋಜಿಸಬೇಕಿದ್ದು ಆ ನಿಟ್ಟಿನಲ್ಲಿ ಪೌರಕಾರ್ಮಿಕರ ನೇಮಕಾತಿ ನಡೆಯಬೇಕು
ಡಿ.ಆರ್.ರಾಜು ಸಮಿತಿ ಸದಸ್ಯ
ಗರಗಂದೂರು ಬಳಿಯ ಮಲ್ಲಿಕಾರ್ಜುನ ಕಾಲೊನಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು ಕೊಳವೆ ಬಾವಿ ಕೊರೆಸಬೇಕು
ಮುತ್ತಪ್ಪ ಸಮಿತಿ ಸದಸ್ಯ

ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕೆ ಮನವಿ

ಮಡಿಕೇರಿ ನಗರದಲ್ಲಿ ಇದುವರೆಗೆ ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಆಗಿಲ್ಲ. ಈ ಬಗ್ಗೆ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಹಲವು ಸಮಿತಿ ಸದಸ್ಯರು ಒತ್ತಾಯಿಸಿದರು. ಈ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ವೆಂಕಟ್‌ರಾಜಾ ‘ಈ ಸಂಬಂಧ ಜಾಗ ಗುರುತಿಸಲಾಗಿದ್ದು ನಗರಸಭೆ ಪೌರಾಯುಕ್ತರ ಗಮನ ಸೆಳೆಯಿರಿ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.