ಕುಶಾಲನಗರ: ವಿದ್ಯಾರ್ಥಿಗಳು ಪಠ್ಯದ ಜೊತೆಯಲ್ಲೇ ಉತ್ತಮ ಸಂಸ್ಕಾರ, ವಿನಯವಂತಿಕೆಯನ್ನು ಮೈಗೂಡಿಸಿಕೊಂಡಾಗ ಮಾತ್ರ ಕಲಿತ ವಿದ್ಯೆ ಸಾರ್ಥಕವಾಗಿ ಸಮಾಜದಲ್ಲಿ ಅತ್ಯುತ್ತಮ ಪ್ರಜೆಯಾಗಲು ಸಾಧ್ಯವಾಗುತ್ತದೆ ಎಂದು ಕೂಡಿಗೆ ಸದ್ಗುರು ಅಪ್ಪಯ್ಯ ಸ್ವಾಮಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಎನ್. ಪುಷ್ಪಾ ಹೇಳಿದರು.
ಬುಧವಾರ ಇಲ್ಲಿ ಏರ್ಪಡಿಸಿದ್ದ ಅನುಗ್ರಹ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವದಲ್ಲಿ ಅವರು ಮಾತನಾಡಿದರು. ಪೋಷಕರು ಮಕ್ಕಳ ಅಂಕ ಗಳಿಕೆಗೆ ಪ್ರಾಮುಖ್ಯತೆ ನೀಡುತ್ತಿದ್ದು, ಶಿಕ್ಷಣವು ಅಂಕ ಆಧಾರಿತವಾಗುವುದು ಆತಂಕ ಉಂಟುಮಾಡಿದೆ ಎಂದರು. ಅನುಗ್ರಹ ಕಾಲೇಜಿನ ವಿದ್ಯಾರ್ಥಿಗಳು ಕ್ರೀಡೆ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿರುವುದು ಸಂತಸ ತಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಅನುಗ್ರಹ ಸಂಸ್ಥೆಯ ಅಧ್ಯಕ್ಷ ಎಸ್.ಕೆ. ಸತೀಶ್ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಆತ್ಮವಿಶ್ವಾಸ ಬೆಳೆಸಿಕೊಂಡಾಗ ಮಾತ್ರ ಸಮಾಜದಲ್ಲಿ ಸ್ಥಾನಮಾನಗಳನ್ನು ಅಲಂಕರಿಸಲು ಸಾಧ್ಯಗುತ್ತದೆ. ಅಂಕ ಪಡೆಯುವ ಯಂತ್ರಗಳಾಗದೆ ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು. ಪ್ರಾಂಶುಪಾಲ ಪ್ರೊ.ಎಚ್.ಬಿ.ಲಿಂಗಮೂರ್ತಿ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಗುರುಹಿರಿಯರನ್ನು ಗೌರವಿಸಬೇಕು ಎಂದರು.
ಸ್ಪರ್ಧೆಗಳಲ್ಲಿ ವಿಜೇತರಿಗೆ ಅತಿಥಿಗಳು ಬಹುಮಾನ ವಿತರಿಸಿದರು. ವರ್ಷದ ಅತ್ಯುತ್ತಮ ವಿದ್ಯಾರ್ಥಿಗಳೆಂದು ಆಯ್ಕೆಯಾದ ಅಪೂರ್ವ, ಸುಜಿತ್, ದೃಶ್ಯ ಅವರನ್ನು ಗೌರವಿಸಲಾಯಿತು.
ಕಾಲೇಜಿನ ಉಪ ಪ್ರಾಂಶುಪಾಲೆ ಹರ್ಷಿತಾ, ಪದವಿ ಪೂರ್ವ ವಿಭಾಗದ ಉಪ ಪ್ರಾಂಶುಪಾಲೆ ಶ್ವೇತಾ, ಸಾಂಸ್ಕೃತಿಕ ಸಮಿತಿಯ ಸಂಚಾಲಕಿ ಸೀಮಾ, ವಿದ್ಯಾರ್ಥಿ ಸಮಿತಿಯ ಸಂಚಾಲಕಿ ಸೌಮ್ಯ, ಉಪನ್ಯಾಸಕರಾದ ಪೃಥ್ವಿ , ಪ್ರವೀಣ, ಅಭಿಷೇಕ್, ಶ್ವೇತಾ, ರೇಷ್ಮ, ರಕ್ಷಾಪ್ರಿಯ ಭಾಗವಹಿಸಿದ್ದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.