ಸೋಮವಾರಪೇಟೆ: ಈಚೆಗೆ ಬೆಂಗಳೂರಿನಲ್ಲಿ ಆರ್‌ಸಿಬಿ ವಿಜಯೋತ್ಸವ ಸಂದರ್ಭ 11 ಮಂದಿ ಮೃತಪಟ್ಟಿರುವ ಘಟನೆ ಖಂಡಿಸಿ ಪಟ್ಟಣದಲ್ಲಿ ಸೋಮವಾರ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿತು.
ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.
ಇದು ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ. ಇದರ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಪರಮೇಶ್ವರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿತು.
ಈ ಸಂದರ್ಭ ಮಾತನಾಡಿದ ಮಾಜಿ ಶಾಸಕ ಎಂ.ಪಿ.ಅಪ್ಪಚ್ಚುರಂಜನ್, ‘ರಾಜಕೀಯ ಲಾಭ ಪಡೆಯುವ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರ ವಿಜಯೋತ್ಸವ ಆಯೋಜಿಸಿತ್ತು. ಹಿರಿಯ ಪೊಲೀಸ್ ಅಧಿಕಾರಿಗಳು ಕಾನೂನು ಸುವ್ಯವಸ್ಥೆಯ ಬಗ್ಗೆ ಸರ್ಕಾರಕ್ಕೆ ಮೊದಲೇ ಮಾಹಿತಿ ನೀಡಿದ್ದರೂ, ಅವರ ಮಾತು ಲೆಕ್ಕಿಸದೆ ವಿಜಯೋತ್ಸವ ಆಚರಿಸಿ ಅಮಾಯಕರ ಸಾವಿಗೆ ಸರ್ಕಾರ ಕಾರಣವಾಗಿದೆ’ ಎಂದು ಆರೋಪಿಸಿದರು.
‘ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳಲು ನಿಷ್ಠಾವಂತ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ ಅವರ ಮನೋಸ್ಥೈರ್ಯ ಕುಗ್ಗಿಸಲು ಕಾರಣವಾಗಿದೆ. ಇಂತಹ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಅಧಿಕಾರದಲ್ಲಿ ಮುಂದುವರೆಯಲು ಅರ್ಹರಲ್ಲ’ ಎಂದು ಕಿಡಿಕಾರಿದರು.
‘ಐಪಿಎಲ್ ವಿಜಯೋತ್ಸವಕ್ಕೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಎಂ.ಎಲ್.ಸಿ ಗೋವಿಂದರಾಜು ಅವರು ಆಹ್ವಾನ ನೀಡಿದ್ದರು. ಆದರೆ ಅಮಾಯಕರನ್ನು ರಕ್ಷಿಸಲು ವಿಫಲರಾಗಿದ್ದಾರೆ. ಪೊಲೀಸ್ ಅಧಿಕಾರಿಗಳು ಅಮಾನತ್ತಿನ ಶಿಕ್ಷೆಗೆ ಒಳಗಾಗಿದ್ದಾರೆ. ಮೊದಲು ಈ ಮೂವರ ವಿರುದ್ಧ ಕ್ರಮಕೈಗೊಳ್ಳಬೇಕು. ಇವರು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು’ ಒತ್ತಾಯಿಸಿದರು.
ಮಾಜಿ ಎಂ.ಎಲ್.ಸಿ ಎಸ್.ಜಿ.ಮೇದಪ್ಪ, ಬಿಜೆಪಿ ಮಂಡಲ ಅಧ್ಯಕ್ಷ ಗೌತಮ್ ಗೌಡ, ಜಿಲ್ಲಾ ಕಾರ್ಯದರ್ಶಿ ಮಹೇಶ್ ಜೈನಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.