ಮಡಿಕೇರಿ: ‘ಬೂಕರ್ ಪ್ರಶಸ್ತಿ’ ಪುರಸ್ಕೃತರಾದ ದೀಪಾ ಭಾಸ್ತಿ ಅವರ ಅಭಿನಂದನಾ ಸಮಾರಂಭ ಜೂನ್ 9ರಂದು ಬೆಳಿಗ್ಗೆ 11 ಗಂಟೆಗೆ ಇಲ್ಲಿನ ಹೋಟೆಲ್ ರೆಡ್‍ಬ್ರಿಕ್ಸ್‌ನ ಸತ್ಕಾರ್ ಸಭಾಂಗಣದಲ್ಲಿ ನಡೆಯಲಿದೆ.
‘ಕನ್ನಡ ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾ, ಮಡಿಕೇರಿ ತಾಲ್ಲೂಕು ಘಟಕ ಮತ್ತು ಕೊಡಗು ಜಿಲ್ಲಾ ಮಹಿಳಾ ಬರಹಗಾರರ ಸಂಘದ ವತಿಯಿಂದ ನಡೆಯುವ ಈ ಕಾರ್ಯಕ್ರಮವನ್ನು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಪದ್ಮಾಶೇಖರ್ ಉದ್ಘಾಟಿಸಲಿದ್ದು, ಹಾಸನದ ಲೇಖಕಿ ಜ.ನಾ.ತೇಜಶ್ರೀ ಅವರು ಅಭಿನಂದಿಸಲಿದ್ದಾರೆ’ ಎಂದು ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಇಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
‘ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಅಧ್ಯಕ್ಷತೆ ವಹಿಸಲಿದ್ದು, ನಾನೂ ಸೇರಿದಂತೆ ಪತ್ರಿಕೋದ್ಯಮಿ ಜಿ.ಚಿದ್ವಿಲಾಸ್, ಕೊಡಗು ಜಿಲ್ಲಾ ಮಹಿಳಾ ಬರಹಗಾರರ ಸಂಘದ ಅಧ್ಯಕ್ಷೆ ಪುದಿಯನೆರವನ ರೇವತಿ ರಮೇಶ್, ಪರಿಷತ್ತಿನ ಮಡಿಕೇರಿ ತಾಲ್ಲೂಕು ಘಟಕದ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್ ಭಾಗಿಯಾಗಲಿದ್ದಾರೆ’ ಎಂದರು.
ನಾಡಿಗೆ ಮಾತ್ರವಲ್ಲ ದೇಶಕ್ಕೆ ಗೌರವ ತಂದುಕೊಟ್ಟ ದೀಪಾ ಭಾಸ್ತಿ ಅವರನ್ನು ಅಭಿನಂದಿಸುವ ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲ ಸಾಹಿತ್ಯಾಸಕ್ತರು, ಶಿಕ್ಷಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಅವರು ಮನವಿ ಮಾಡಿದರು.
ಲೇಖಕಿ ಭಾನು ಮುಷ್ತಾಕ್ ಅವರಿಗೂ ಅಭಿನಂದನೆ ಸಲ್ಲಿಸುವ ಉದ್ದೇಶದಿಂದ ಅವರನ್ನೂ ಆಹ್ವಾನಿಸಲಾಗಿತ್ತು. ಆದರೆ, ಅವರು ಬಿಡುವಿರದ ಕಾರ್ಯಕ್ರಮಗಳಿರುವುದಾಗಿ ಹೇಳಿ, ಮುಂದಿನ ತಿಂಗಳು ಬರುವುದಾಗಿ ಹೇಳಿದ್ದಾರೆ. ಹಾಗಾಗಿ, ಸದ್ಯ ದೀಪಾ ಭಾಸ್ತಿ ಅವರನ್ನು ಅಭಿನಂದಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಪರಿಷತ್ತಿನ ಗೌರವ ಕಾರ್ಯದರ್ಶಿ ಎಸ್.ಐ.ಮುನೀರ್ ಅಹಮ್ಮದ್, ನಿರ್ದೇಶಕ ಶ್ರೀಧರ ಹೂವಲ್ಲಿ, ಪರಿಷತ್ತಿನ ಮಡಿಕೇರಿ ತಾಲ್ಲೂಕು ಘಟಕದ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್, ಕೊಡಗು ಜಿಲ್ಲಾ ಮಹಿಳಾ ಬರಹಗಾರರ ಸಂಘದ ಅಧ್ಯಕ್ಷೆ ಪುದಿಯನೆರವನ ರೇವತಿ ರಮೇಶ್, ಪ್ರಧಾನ ಕಾರ್ಯದರ್ಶಿ ಡಾ.ಕಾವೇರಿ ಪ್ರಕಾಶ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.