ಮಡಿಕೇರಿ: ಸೋಮವಾರಪೇಟೆ ತಾಲ್ಲೂಕಿನ ತಹಶೀಲ್ದಾರರ ಕಚೇರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಗುರುವಾರ ದಿಢೀರ್ ಭೇಟಿ ನೀಡಿ ಭೂಸುರಕ್ಷತೆ ಮತ್ತು ಕಂದಾಯ ದಾಖಲೆ ಡಿಜಿಟಲೀಕರಣ ಪ್ರಕ್ರಿಯೆಯನ್ನು ಪರಿಶೀಲಿಸಿದರು.
ಭೂ ಸುರಕ್ಷತಾ ಯೋಜನೆಯಡಿ ಸಾರ್ವಜನಿಕರಿಗೆ ಕಂದಾಯ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿ ವಿತರಿಸಬೇಕು. ಕಂದಾಯ ಇಲಾಖೆಯಲ್ಲಿ ಭೂದಾಖಲೆಗಳಿಗೆ ಸಂಬಂಧಿಸಿದಂತೆ ಸರ್ಕಾರ ತಂದಿರುವ ಸುಧಾರಣೆ ಮತ್ತು ಬದಲಾವಣೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ಸೂಚಿಸಿದರು.
ಸಕಾಲ ಯೋಜನೆ, ಪಿಂಚಣಿ ಯೋಜನೆ ಸಂಬಂಧಿಸಿದಂತೆ ಇದೇ ವೇಳೆ ಜಿಲ್ಲಾಧಿಕಾರಿ ಮಾಹಿತಿ ಪಡೆದರು. ಈ ವೇಳೆ ತಹಶೀಲ್ದಾರ್ ಕೃಷ್ಣಮೂರ್ತಿ ಇದ್ದರು.
ಸಮನ್ವಯತೆಯಿಂದ ಕಾರ್ಯನಿರ್ವಹಿಸಿ: ಸೋಮವಾರಪೇಟೆ ತಾಲ್ಲೂಕಿಗೆ ಸಂಬಂಧಿಸಿದಂತೆ ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧ ತಾಲ್ಲೂಕು ಮಟ್ಟದ ಅಧಿಕಾರಿಗಳ ಜೊತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸಭೆ ನಡೆಸಿದರು.
ಈ ಬಾರಿ ಮುಂಗಾರು ಬೇಗ ಆರಂಭವಾಗಿದ್ದು, ಮೇ ಮತ್ತು ಜೂನ್ ತಿಂಗಳಲ್ಲಿಯೇ ಹೆಚ್ಚಿನ ಮಳೆಯಾಗಿದೆ. ಆದ್ದರಿಂದ ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಎಲ್ಲಾ ಹಂತದ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.
ಅಂಗನವಾಡಿ, ಶಾಲಾ ಮತ್ತು ಕಾಲೇಜು ಕಟ್ಟಡಗಳ ಸ್ಥಿತಿಗತಿ ಬಗ್ಗೆ ಕೂಡಲೇ ವರದಿ ನೀಡಬೇಕು. ಸುಸ್ಥಿತಿಯಲ್ಲಿ ಇರದ ಶಾಲಾ, ಕಾಲೇಜು, ಅಂಗನವಾಡಿ ಕಟ್ಟಡ ಸಂಬಂಧ ಅಂದಾಜುಪಟ್ಟಿ ಸಲ್ಲಿಸುವಂತೆಯೂ ಅವರು ಸೂಚಿಸಿದರು.
ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದಂತೆ ಕಾಲ ಕಾಲಕ್ಕೆ ಹವಾಮಾನ ಇಲಾಖೆ ಹೊರಡಿಸುವ ಮಾಹಿತಿ ಹಂಚಿಕೊಳ್ಳಬೇಕು. ಅತಿವೃಷ್ಟಿಯಿಂದ ಮನೆ, ಮತ್ತಿತರ ಹಾನಿ ಸಂಭವಿಸಿದಲ್ಲಿ ಕೂಡಲೇ ಪರಿಹಾರ ವಿತರಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಅಬ್ದುಲ್ ನಬಿ, ತಹಶೀಲ್ದಾರ್ ಕೃಷ್ಣಮೂರ್ತಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪರಮೇಶ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.