ADVERTISEMENT

ಕೊಡಗು: ಹೋಂ ಸ್ಟೇ ನೋಂದಣಿ ಮಾಡಿಕೊಳ್ಳದಿದ್ದರೆ ಕ್ರಮ

ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕಿ ಅನಿತಾ ಭಾಸ್ಕರ್ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2025, 14:27 IST
Last Updated 23 ಮಾರ್ಚ್ 2025, 14:27 IST
ಅನಿತಾ ಭಾಸ್ಕರ್, ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕಿ.
ಅನಿತಾ ಭಾಸ್ಕರ್, ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕಿ.   

ಮಡಿಕೇರಿ: ಸರ್ಕಾರದ ಆದೇಶದನ್ವಯ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಹೋಂ-ಸ್ಟೇಗಳು ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿದ್ದು, ಈ ಸಂಬಂಧ ಹೋಂ-ಸ್ಟೇ ಮಾಲೀಕರಿಗೆ ಸಾಕಷ್ಟು ಕಾಲಾವಕಾಶ ನೀಡಿದರೂ ಬಹಳಷ್ಟು ಹೋಂ-ಸ್ಟೇಗಳು ನೋಂದಣಿಯಾಗಿರುವುದಿಲ್ಲ. ಇದನ್ನು ಜಿಲ್ಲಾಡಳಿತವು ಗಂಭೀರವಾಗಿ ಪರಿಗಣಿಸಿದ್ದು, ನೋಂದಣಿಯಾಗದ ಹೋಂ-ಸ್ಟೇಗಳು ಕಡ್ಡಾಯವಾಗಿ ನೋಂದಾಯಿಸಿಕೊಳ್ಳಲು ಸೂಚಿಸಲಾಗಿದೆ. ಹಾಗೆಯೇ ಪ್ರವಾಸೋದ್ಯಮ ಇಲಾಖೆಯಡಿಯಲ್ಲಿ ನೋಂದಣಿಗೊಳ್ಳದೆ ನಿಯಮ ಬಾಹಿರವಾಗಿ ಕಾರ್ಯ ನಿರ್ವಹಿಸುತ್ತಿರುವ ಹೋಂ-ಸ್ಟೇಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದೂ ಎಚ್ಚರಿಕೆ ನೀಡಿದೆ.

ಪ್ರವಾಸೋದ್ಯಮ ಇಲಾಖೆಯಿಂದ ಈಗಾಗಲೇ ಪರವಾನಗಿ ಪಡೆದು ಕಾರ್ಯ ನಿರ್ವಹಿಸುತ್ತಿರುವ ಮತ್ತು ಪರವಾನಗಿ ಅವಧಿಯು 5 ವರ್ಷಗಳಿಗೆ ಮುಕ್ತಾಯಗೊಳ್ಳುತ್ತಿರುವ ಹೋಂ-ಸ್ಟೇಗಳು ಪರವಾನಿಗೆಯನ್ನು ನವೀಕರಿಸುವಂತೆಯೂ ಸೂಚಿಸಲಾಗಿದೆ.

ಹೋಂ-ಸ್ಟೇಗಳ ನೋಂದಣಿಗಾಗಿ ಪ್ರವಾಸೋದ್ಯಮ ಇಲಾಖೆಯು ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಅಂತರ್ಜಾಲ ತಾಣ https://kttf.karnatakatourism.org/login ಮುಖಾಂತರ ಆನ್‍ಲೈನ್‍ನಲ್ಲಿ ನೋಂದಣಿ ಮಾಡಿಕೊಳ್ಳಬೇಕಿದೆ.

ADVERTISEMENT

ಹೋಂ-ಸ್ಟೇ ಪರಿವೀಕ್ಷಣೆಗಾಗಿ ಅಧಿಕಾರಿಗಳು ಭೇಟಿ ನೀಡಿದಾಗ ಹೋಂ-ಸ್ಟೇ ಪ್ರಮಾಣಪತ್ರ ಅಥವಾ ಹೋಂ-ಸ್ಟೇ ನೋಂದಣಿಗಾಗಿ ಅರ್ಜಿ ಸಲ್ಲಿಸಿರುವ ದಾಖಲಾತಿಯನ್ನು ಹಾಜರುಪಡಿಸಬೇಕು. ಇಲ್ಲವಾದಲ್ಲಿ ಹೋಂ-ಸ್ಟೇ ಜಾಗದ ಮಾಲೀಕರ ಮೇಲೆ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು.

ಮಾಹಿತಿ ಇಲ್ಲದೆ ಅನಧೀಕೃತವಾಗಿ ನಡೆಸುತ್ತಿರುವಂತಹ ಹೋಂ-ಸ್ಟೇಗಳ ಬಗ್ಗೆ ಸಾರ್ವಜನಿಕರು ದೂರು, ಮಾಹಿತಿ ಇದ್ದಲ್ಲಿ ಅವುಗಳ ವಿವರಗಳನ್ನು ಪತ್ರ ಮುಖೇನ ಉಪ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಸ್ಟುವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ 571201 ದೂರವಾಣಿ ಸಂಖ್ಯೆ:08272-200519 ಅಥವಾ ಈ-ಮೇಲ್ : ddkodagutourism@gmail.com ಗೆ ತಿಳಿಸಬಹುದು.

ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೋಟೆಲ್, ರೆಸ್ಟೋರೆಂಟ್, ರೆಸಾರ್ಟ್, ಟೂರ್ಸ್ ಅಂಡ್ ಟ್ರಾವೆಲ್ ಏಜೆನ್ಸಿ ಹಾಗೂ ಮನರಂಜನಾ ಪಾರ್ಕ್‍ಗಳ ಉದ್ದಿಮೆದಾರರುಗಳು ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ವೆಬ್‍ಸೈಟ್ http://kttf.karnatakatourism.org/ನಲ್ಲಿ ತಮ್ಮ ಸಂಸ್ಥೆಯನ್ನು ನೊಂದಣಿ ಮಾಡಿಕೊಳ್ಳಬೇಕು ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕಿ ಅನಿತಾ ಭಾಸ್ಕರ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.