
ನಾಪೋಕ್ಲು: ‘ಶೈಕ್ಷಣಿಕವಾಗಿ ಹಿಂದುಳಿದಿದ್ದ ನಾಪೋಕ್ಲು ಪಟ್ಟಣದಲ್ಲಿ ಇದೀಗ ವಿವಿಧ ಶಿಕ್ಷಣ ಸಂಸ್ಥೆಗಳು ನೀಡುತ್ತಿರುವ ಗುಣಮಟ್ಟದ ಶಿಕ್ಷಣದಿಂದ ಈಗ ಮುಂದುವರೆಯುತ್ತಿದೆ’ ಎಂದು ಗೋಣಿಕೊಪ್ಪಲಿನ ಲಯನ್ಸ್ ವಿದ್ಯಾಸಂಸ್ಥೆಯ ಅಧ್ಯಕ್ಷ ಪಟ್ಟಡ ಧನು ಉತ್ತಯ್ಯ ಹೇಳಿದರು.
ಇಲ್ಲಿನ ಎಕ್ಸೆಲ್ ಸ್ಕೂಲ್ ಆಫ್ ಎಜುಕೇಶನ್ ವತಿಯಿಂದ ಭಾನುವಾರ ಆಯೋಜಿಸಿದ್ದ ವಾರ್ಷಿಕೋತ್ಸವದಲ್ಲಿ ಅವರು ಮಾತನಾಡಿದರು.
‘ಗ್ರಾಮೀಣ ಪ್ರದೇಶದಲ್ಲಿ ಈ ಹಿಂದೆ ವಿದ್ಯಾರ್ಥಿಗಳಿಗೆ ಅವಕಾಶವಿರಲಿಲ್ಲ. ಈಗ ಶಿಕ್ಷಣಕ್ಕೆ ವಿಫುಲ ಅವಕಾಶವಿದ್ದು, ವಿದ್ಯಾರ್ಥಿಗಳು ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕರ ಜೊತೆ ಕೈಜೋಡಿಸಿ ಶಿಕ್ಷಣದಲ್ಲಿ ಮುಂದುವರಿಯಬೇಕು. ವೇದಿಕೆಗಳನ್ನು ಸೂಕ್ತವಾಗಿ ಬಳಸಿಕೊಳ್ಳುವುದರಿಂದ ಧೈರ್ಯ ಹಾಗೂ ಆತ್ಮವಿಶ್ವಾಸ ಗಳಿಸಿಕೊಳ್ಳಲು ಸಾಧ್ಯ’ ಎಂದರು.
ನೇತಾಜಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಸಿ.ಎಸ್. ಸುರೇಶ್ ಮಾತನಾಡಿ, ‘ಎಕ್ಸೆಲ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಪಠ್ಯ ಹಾಗೂ ಸಹಪಠ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಲು ಸಾಧ್ಯ’ ಎಂದರು.
ನಿರ್ದೇಶಕಿ ಭವ್ಯ ಶಾಲಾ ವಾರ್ಷಿಕ ವರದಿ ವಾಚಿಸಿದರು. ಶಾಲೆಯ ಸ್ಥಾಪಕ ಅಧ್ಯಕ್ಷ ಕುಟ್ಟಂಜೆಟ್ಟಿರ ಮಾದಪ್ಪ ಅಧ್ಯಕ್ಷತೆ ವಹಿಸಿದ್ದರು. ನಿರ್ದೇಶಕರಾದ ಕುಟ್ಟಂಜೆಟ್ಟಿರ ಶರತ್, ವಿದ್ಯಾ ಸುರೇಶ್, ಮುಖ್ಯ ಶಿಕ್ಷಕರು ಚೋಕಿರ ತಮ್ಮಯ್ಯ ಉಪಸ್ಥಿತರಿದ್ದರು.
ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮ ಪ್ರೇಕ್ಷಕರ ಮನಸೂರೆಗೊಂಡಿತು. ಪೌರಾಣಿಕ ಕಥಾ ಹಿನ್ನೆಲೆಯ ನೃತ್ಯರೂಪಕ, ಮೊಬೈಲ್ ಬಳಕೆಯ ದುಷ್ಪರಿಣಾಮಗಳು ನಾಟಕ ಸೇರಿದಂತೆ ಹತ್ತು ಹಲವು ನೃತ್ಯಗಳು ಗಮನ ಸೆಳೆದವು.
ವಿದ್ಯಾರ್ಥಿನಿಯರಾದ ದುಂಧುಬಿ, ದರ್ಶ ದೇಚಮ್ಮ ಕಾರ್ಯಕ್ರಮ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.