
ಕುಶಾಲನಗರ: ಶಿಕ್ಷಣ ಅಂದರೆ ಕೇವಲ ಓದು, ಬರಹ, ಪರೀಕ್ಷೆ ,ಅಂಕ, ತೇರ್ಗಡೆ ಇಷ್ಟಕ್ಕೆ ಸೀಮಿತವಾಗದೆ ಮಕ್ಕಳ ಪ್ರತಿಭೆಯನ್ನು ಗುರುತಿಸಿ ಹೊರತರಬೇಕಾಗಿದೆ ಎಂದು ಕೂಡಿಗೆ ಡಯಟ್ ಪ್ರಾಂಶುಪಾಲ ರಾಮಚಂದ್ರರಾಜೇ ಅರಸ್
ಹೇಳಿದರು.
ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ಸೋಮವಾರಪೇಟೆ ಹಾಗೂ ಕುಶಾಲನಗರ ಕ್ಲಸ್ಟರ್ ಕೇಂದ್ರದ ಆಶ್ರಯದಲ್ಲಿ ಬುಧವಾರ ಇಲ್ಲಿನ ಪಿಎಂಶ್ರೀ ಶಾಲಾ ಸಭಾಂಗಣದಲ್ಲಿ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ, ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು.
ಬೇರೆ ಶಾಲೆಯವರೊಂದಿಗೆ ಬೆರತು, ಒಡನಾಟ ಹೊಂದಿ ಹೇಗೆ ಶಾಲೆಯ ಅಭಿವೃದ್ಧಿ ಮಾಡಬೇಕು. ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೇಗೆ ಒತ್ತು ನೀಡಬೇಕು ಎಂಬುದರ ಬಗ್ಗೆ ಚರ್ಚೆ ಮಾಡಲು ಇಂತಹ ಕಾರ್ಯಕ್ರಮಗಳು ಸುವರ್ಣ ಅವಕಾಶಗಳಾಗಿವೆ ಎಂದರು.
ಪ್ರತಿಭಾ ಕಾರಂಜಿ ಸ್ಪರ್ಧೆಯು ಮಕ್ಕಳಲ್ಲಿ ಶಿಕ್ಷಣ, ಮನರಂಜನೆ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಉತ್ತಮ ವೇದಿಕೆಯಾಗಿದೆ ಎಂದರು. ಮಕ್ಕಳಲ್ಲಿನ ಸುಪ್ತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ವಿದ್ಯಾರ್ಥಿಗಳ ಕಲಿಕೆಗೆ ಹಾಗೂ ಹೊಸದಾದ ಜೀವನ ಕೌಶಲವನ್ನು ಹೊಂದಲು ವೇದಿಕೆಯಾಗಿದೆ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೃಷ್ಣಪ್ಪ ಮಾತನಾಡಿ, ಮಕ್ಕಳಲ್ಲಿ ಉತ್ತಮ ಪ್ರತಿಭೆಯನ್ನು ಅನಾವರಣಗೊಳಿಸಲು ಶಿಕ್ಷಕರೊಂದಿಗೆ ಪೋಷಕರು ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಪ್ರತಿಭಾ ಕಾರಂಜಿ ಸಾಂಸ್ಕೃತಿಕ ಸ್ಪರ್ಧೆಗಳು ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಗುರುತಿಸಿ ಹೊರತರಲು ಉತ್ತಮ ಅವಕಾಶವನ್ನು ನೀಡುತ್ತದೆ. ಇದರೊಂದಿಗೆ ಭಾರತದ ಸಂಸ್ಕೃತಿ ಪರಂಪರೆ ಅನಾವರಣಗೊಳ್ಳುತ್ತದೆ ಎಂದರು.
ಪಿಎಂಶ್ರೀ ಸರ್ಕಾರಿ ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಚಂದನ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭ ಪಿಎಂಶ್ರೀ ಸರ್ಕಾರಿ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಸಣ್ಣಸ್ವಾಮಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಪ್ರಸನ್ನ ಕುಮಾರ್, ತಾಲ್ಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರತ್ನಕುಮಾರ್, ಕಾರ್ಯದರ್ಶಿ ಟಿ.ವಿ.ಶೈಲಾ, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಟಿ.ಕೆ.ಬಸವರಾಜು, ನಿರ್ದೇಶಕರಾದ ಎಸ್.ಕೆ.ಸೌಭಾಗ್ಯ, ಉಮಾದೇವಿ, ಕವಿತಾ, ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕಿ ಸುಕುಮಾರಿ, ಇಸಿಒ ಯಾದಕುಮಾರಿ, ಬಿ.ಆರ್.ಸಿ ಎಂ.ವಿ.ಮಂಜೇಶ್, ಸರ್ಕಾರಿ ಮಹಿಳಾ ಪ್ರೌಢಶಾಲೆ ಮುಖ್ಯ ಶಿಕ್ಷಕ ಎಸ್.ಕೆ.ನವೀನ್ ಕುಮಾರ್, ಮೌಲಾನಾ ಆಜಾದ್ ಶಾಲೆಯ ಮುಖ್ಯ ಶಿಕ್ಷಕಿ ಶ್ವೇತಾ, ಗುಡ್ಡೆಹೊಸೂರು ಪ್ರಾಥಮಿಕ ಶಾಲಾಭಿದ್ಧಿ ಸಮಿತಿ ಅಧ್ಯಕ್ಷ ನಾಗೇಂದ್ರ, ಸರ್ಕಾರಿ ನೌಕರರ ಸಂಘದ ನಿರ್ದೇಶಕ ಯಶವಂತ, ಶಶಿಕುಮಾರ್, ಅನುದಾನಿತ ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾ ಕಾರ್ಯದರ್ಶಿ ನಾಗರಾಜು, ಸಮೂಹ ಸಂಪನ್ಮೂಲ ವ್ಯಕ್ತಿ ಟಿ.ಇ. ವಿಶ್ವನಾಥ್, ಮುಖಂಡರಾದ ಸುರೇಶ್, ಸುಜಾತಾ, ಮಹೇಂದ್ರ, ಶಿವಕುಮಾರ್ ಪಾಲ್ಗೊಂಡಿದ್ದರು.
ಕ್ಷೇತ್ರ ಸಮನ್ವಯಾಧಿಕಾರಿ ಮಂಜೇಶ್ ಸ್ವಾಗತಿಸಿದರು. ಸಿಆರ್‌ಪಿ ವಿಶ್ವನಾಥ್ ನಿರೂಪಿಸಿದರು. ಸಿಆರ್‌ಪಿ ಶಾಂತ ಕುಮಾರ್ ವಂದಿಸಿದರು. ಇದೇ ಸಂದರ್ಭ ಕೂಡಿಗೆ ಡಯಟ್ ಸಂಸ್ಥೆಯ ನೂತನ ಪ್ರಾಂಶುಪಾಲರಾಗಿ ಅಧಿಕಾರ ವಹಿಸಿಕೊಂಡ ರಾಮಚಂದ್ರರಾಜೇ ಅರಸ್ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ ಸನ್ಮಾನಿಸಿದರು.
ವಿದ್ಯಾರ್ಥಿಗಳ ಪ್ರತಿಭೆ ಅನಾವರಣ
ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳ ವಿವಿಧ ವೈಯಕ್ತಿಕ ಹಾಗೂ ಗುಂಪು ಸ್ಪರ್ಧೆಗಳಲ್ಲಿ ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿ ಎಲ್ಲರ ಗಮನ ಸೆಳೆದರು. ಮಕ್ಕಳು ಕಂಠಪಾಠ ಧಾರ್ಮಿಕ ಪಠಣ ಛದ್ಮವೇಷ ಸ್ಪರ್ಧೆ ರಸಪ್ರಶ್ನೆ ರಂಗೋಲಿ ಜಾನಪದ ಗೀತೆ ಕವ್ವಾಲಿ ಕ್ಲೇ ಮಾಡಲಿಂಗ್ ಭಾಷಣ ಮತ್ತು ಪ್ರಬಂಧ ಸ್ಪರ್ಧೆ ಸೇರಿದಂತೆ ಮುಂತಾದ ಸ್ಪರ್ಧೆಗಳಲ್ಲಿ ಮಕ್ಕಳ ಪ್ರತಿಭಾ ಪ್ರದರ್ಶನ ಪ್ರೇಕ್ಷಕರ ಮನರಂಜಿಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.