ADVERTISEMENT

ಕೊಡಗು: ಜಿಲ್ಲೆಯ ರೈತರ ಸಮಸ್ಯೆಗೆ ಸ್ಪಂದಿಸಿ ಎಂದು ರೈತ ಸಂಘದ ಒತ್ತಾಯ

ಜನರ ಸಂಕಷ್ಟ ನಿವಾರಿಸಲು ಸರ್ಕಾರಗಳು ವಿಫಲ: ಆರೋಪ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2018, 20:12 IST
Last Updated 1 ಅಕ್ಟೋಬರ್ 2018, 20:12 IST
ಸೋಮವಾರಪೇಟೆ ಜೇಸಿ ವೇದಿಕೆಯಲ್ಲಿ ಸೋಮವಾರ ನಡೆದ ತಾಲ್ಲೂಕು ರೈತ ಸಂಘದ ವತಿಯಿಂದ ನಡೆದ ಪ್ರತಿಭಟನಾ ಸಭೆಯಲ್ಲಿ ರಾಜ್ಯ ರೈತ ಸಂಘದ ಹಾಸನ ಜಿಲ್ಲಾ ಉಪಾಧ್ಯಕ್ಷ ಜಗದೀಶ್ ಮಾತನಾಡಿದರು
ಸೋಮವಾರಪೇಟೆ ಜೇಸಿ ವೇದಿಕೆಯಲ್ಲಿ ಸೋಮವಾರ ನಡೆದ ತಾಲ್ಲೂಕು ರೈತ ಸಂಘದ ವತಿಯಿಂದ ನಡೆದ ಪ್ರತಿಭಟನಾ ಸಭೆಯಲ್ಲಿ ರಾಜ್ಯ ರೈತ ಸಂಘದ ಹಾಸನ ಜಿಲ್ಲಾ ಉಪಾಧ್ಯಕ್ಷ ಜಗದೀಶ್ ಮಾತನಾಡಿದರು   

ಸೋಮವಾರಪೇಟೆ: ಮಳೆ ಹಾನಿಯಿಂದ ತತ್ತರಿಸಿರುವ ಜಿಲ್ಲೆಯ ರೈತರು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ನೀಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮುಂದಾಗಬೇಕು ಎಂದು ರಾಜ್ಯ ರೈತ ಸಂಘದ ಹಾಸನ ಜಿಲ್ಲಾ ಉಪಾಧ್ಯಕ್ಷ ಜಗದೀಶ್ ಒತ್ತಾಯಿಸಿದರು.

ಇಲ್ಲಿನ ಜೇಸಿ ವೇದಿಕೆಯಲ್ಲಿ ಸೋಮವಾರ ತಾಲ್ಲೂಕು ರೈತ ಸಂಘದ ವತಿಯಿಂದ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ ಸಂಭವಿಸಿ ನೂರಾರು ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಆದರೆ, ಸರ್ಕಾರಗಳೂ ಮಾತ್ರ ನಿರೀಕ್ಷಿತವಾಗಿ ಸ್ಪಂದಿಸುತ್ತಿಲ್ಲ ಎಂದು ದೂರಿದರು.

ರೈತರು ಸಂಘಟಿತರಾಗಿ ಹೋರಾಡದಿದ್ದಲ್ಲಿ ಸರ್ಕಾರದ ಯಾವುದೇ ಯೋಜನೆಗಳನ್ನು ಪಡೆಯಲು ಸಾಧ್ಯವಿಲ್ಲ. ಕೂಡಲೇ ಅಧಿಕಾರಿಗಳು ಮತ್ತು ರಾಜಕಾರಣಿಗಳು ರೈತರ ನೆರವಿಗೆ ಧಾವಿಸಬೇಕು ಎಂದು ಆಗ್ರಹಿಸಿದರು.

ADVERTISEMENT

ರೈತ ಸಂಘದ ರಾಜ್ಯ ಕಾರ್ಯದರ್ಶಿ ನಿರ್ವಾಣಪ್ಪ ಮಾತನಾಡಿ, ಜಿಲ್ಲೆಯನ್ನು ಪುನರ್ ನಿರ್ಮಾಣ ಮಾಡಿ ರೈತರ ಹಿತ ಕಾಯಬೇಕಾಗಿದ್ದ ರಾಜ್ಯ ಸರ್ಕಾರ ಅಧಿಕಾರ ಉಳಿಸಿಕೊಳ್ಳಲು ಪರದಾಡುತ್ತಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಗ್ರಾಮಗಳಲ್ಲಿ ಸುತ್ತಿ ರೈತರ ಕಷ್ಟಗಳನ್ನು ಆಲಿಸುವುದರೊಂದಿಗೆ, ಜಿಲ್ಲೆಗೆ ಹೆಚ್ಚಿನ ಅನುದಾನ ನೀಡಬೇಕೆಂದರು.

ಸಭೆಯಲ್ಲಿದ್ದ ಕರ್ನಾಟಕ ಪರಿಶಿಷ್ಟ ಜಾತಿ, ವರ್ಗಗಳ ಸಂಘಟನಾ ಸಮಿತಿ ಅಧ್ಯಕ್ಷ ಎಂ.ಪಿ. ಹೊನ್ನಪ್ಪ ಮಾತನಾಡಿ, ಸಂತ್ರಸ್ತರಿಗೆ ಶಾಶ್ವತ ಪರಿಹಾರ ನೀಡುವ ಮೂಲಕ, ಹೊಸ ಬದುಕು ಕಟ್ಟಿಕೊಳ್ಳುವ ನಿಟ್ಟಿನಲ್ಲಿ ಸರ್ಕಾರಗಳು ಯೋಜನೆ ರೂಪಿಸಬೇಕು ಎಂದರು.

ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಚಂದ್ರಪ್ಪ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.