ವಿರಾಜಪೇಟೆ: ಸಮೀಪದ ಬೇಟೋಳಿ ಗ್ರಾಮದ ರಾಮನಗರದಲ್ಲಿರುವ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಗಣಪತಿ ಗುಡಿಯಲ್ಲಿ ಪ್ರತಿಷ್ಠಾಪಿಸಿದ್ದ ಗೌರಿ ಗಣೇಶ ಮೂರ್ತಿಗಳ ವಿಸರ್ಜನೋತ್ಸವ ಶ್ರದ್ದಾ ಭಕ್ತಿಯಿಂದ ಮಂಗಳವಾರ ನೆರವೇರಿತು.
ದೇವಸ್ಥಾನವು 43ನೇ ವರ್ಷದ ಗಣೇಶೋತ್ಸವವನ್ನು ಆಚರಿಸುತ್ತಿದ್ದು, ಉತ್ಸವದ ಸಂದರ್ಭ ಧಾರ್ಮಿಕ ಕಾರ್ಯಕ್ರಮಗಳನ್ನು ಶಾಸ್ತ್ರೋಕ್ತವಾಗಿ ನೆರವೇರಿಸಲಾಯಿತು. ಗಣೇಶ ಚತುರ್ಥಿಯಂದು ಪ್ರತಿಷ್ಠಾಪಿಸಿದ್ದ ಉತ್ಸವ ಮೂರ್ತಿಗಳನ್ನು ಒಟ್ಟು 7 ದಿನ ದೇವಸ್ಥಾನದಲ್ಲಿ ವಿಶೇಷ ಪೂಜೆಗಳೊಂದಿಗೆ ಆರಾಧಿಸಲಾಯಿತು.
ಮಂಗಳವಾರ ಮಧ್ಯಾಹ್ನ ಮಹಾಪೂಜೆ ಬಳಿಕ ಭಕ್ತಾದಿಗಳಿಗೆ ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ಮಾಡಲಾಯಿತು. ನಂತರ ವಿಶೇಷ ಪ್ರಾರ್ಥನೆ, ಪೂಜೆ ಸಲ್ಲಿಸುವ ಮೂಲಕ ಹೂವಿನ ಅಲಂಕೃತ ಮಂಟಪದಲ್ಲಿ ಮೂರ್ತಿಗಳನ್ನಿರಿಸಲಾಯಿತು. ಭಕ್ತಾದಿಗಳು ಹಾಗೂ ಗ್ರಾಮಸ್ಥರು ವಿಶೇಷ ಪೂಜೆಯನ್ನು ಮಹಾಗಣಪತಿಗೆ ಸಲ್ಲಿಸಿದರು.
ಮೆರವಣಿಗೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕುಣಿತ ಭಜನೆಯ ತಂಡ ಹಾಗೂ ಸ್ಥಳೀಯ ಮಕ್ಕಳ ಕುಣಿತ ಆಕರ್ಷಿಸಿತು. ಗೊಂಬೆ ವೇಷ ಧರಿಸಿದ ಕಲಾವಿದರ ತಂಡ, ರುದ್ರಂ ಚಂಡೆ ಬಳಗದವರಿಂದ ಚಂಡೆ ಸೇವೆ ಹಾಗೂ ಮಹಿಳಾ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ನಡೆಯಿತು.
ಮೆರವಣಿಗೆಯಲ್ಲಿ ಬೇಟೋಳಿಯ ಮೂಲೆ ಅಂಗಡಿ ಸಮೀಪದ ಹೊಳೆಯಲ್ಲಿ ವಿಸರ್ಜನೆ ಮಾಡಲಾಯಿತು. ನಂತರ ಭಕ್ತಾದಿಗಳು ದೇವಸ್ಥಾನಕ್ಕೆ ತೆರಳಿ ಮಹಾಗಣಪತಿಗೆ ಪೂಜೆ ಸಲ್ಲಿಸಿದರು. ದೇವಸ್ಥಾನದ ಆಡಳಿತ ಮಂಡಳಿಯವರು, ಗ್ರಾಮಸ್ಥರು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.