ಸಿದ್ದಾಪುರ: ಸಿದ್ದಾಪುರದಿಂದ ಗುಹ್ಯ– ಕಣ್ಣಂಗಾಲ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎ.ಎಸ್ ಪೊನ್ನಣ್ಣ ಸೋಮವಾರ ಭೂಮಿಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ‘ಈಗಾಗಲೇ ಮುಖ್ಯಮಂತ್ರಿ ಹಾಗೂ ಗ್ರಾಮೀಣಾಭಿವೃದ್ಧಿ ಯೋಜನೆಯ ಸಚಿವರು ವಿರಾಜಪೇಟೆ ಕ್ಷೇತ್ರದ ಅಭಿವೃದ್ಧಿಗಾಗಿ ಮುಖ್ಯಮಂತ್ರಿಯ ವಿಶೇಷ ಅನುದಾನ ಸೇರಿದಂತೆ ₹120 ಕೋಟಿ ವೆಚ್ಚದಲ್ಲಿ ರಸ್ತೆ ಕಾಮಗಾರಿಗಳ ಕ್ರಿಯಾಯೋಜನೆಯನ್ನು ತಯಾರಿಸಲಾಗಿದ್ದು, ಈ ಪೈಕಿ ₹10 ಕೋಟಿ ವೆಚ್ಚದ ರಸ್ತೆ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಮುಕ್ತಾಯವಾಗಿದೆ. ಸಾಕಷ್ಟು ರಸ್ತೆಗಳು ಹಾಗೂ ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಕಾರ್ಯಗಳು ಪ್ರಗತಿಯಲ್ಲಿದ್ದು, ಸರ್ಕಾರವು ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಆಸಕ್ತಿ ವಹಿಸಿದೆ’ ಎಂದರು.
‘ರಸ್ತೆಗಳ ಅಭಿವೃದ್ಧಿ ಮಾತ್ರವಲ್ಲದೇ ಕ್ಷೇತ್ರದ ವಿವಿಧ ಭಾಗಗಳಲ್ಲಿ ವಿದ್ಯುತ್‌ಶಕ್ತಿಯ ಕಾಮಗಾರಿಗಳು ಹಾಗೂ ಪೊನ್ನಂಪೇಟೆ ತಾಲ್ಲೂಕಿನ ಹೊಸ ತಾಲ್ಲೂಕು ಕಟ್ಟಡ ನಿರ್ಮಾಣ, ಪುರಸಭೆ ಅಭಿವೃದ್ಧಿ ಸೇರಿದಂತೆ ಇನ್ನಿತರ ಅಭಿವೃದ್ಧಿ ಕಾರ್ಯಗಳು ಪ್ರಗತಿಯಲ್ಲಿದೆ’ ಎಂದರು.
ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ, ವಲಯ ಕಾಂಗ್ರೆಸ್ ಅಧ್ಯಕ್ಷ ಎಸ್.ಬಿ ಪ್ರತೀಶ್, ಗ್ರಾಮ ಪಂಚಾಯಿತಿ ಸದಸ್ಯರು, ಗ್ರಾಮಸ್ಥರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.