ಮಡಿಕೇರಿ: ಪ್ರಸಕ್ತ ಸಾಲಿನ ಖಾರೀಫ್ ಬೆಳೆಗಳಿಗೆ ಕಟ್ಟುಪದ್ಧತಿ ಆಧಾರದಲ್ಲಿ ಕಾಲುವೆಗಳಿಗೆ ನೀರು ಹರಿಸಲು ಬೆಂಗಳೂರಿನಲ್ಲಿ ಗುರುವಾರ ನಡೆದ ಹಾರಂಗಿ ನೀರಾವರಿ ಸಲಹಾ ಸಮಿತಿ ನಿರ್ಧರಿಸಿತು. ಜುಲೈ 17ರಿಂದ ಡಿಸೆಂಬರ್ 14ರವರೆಗೂ ನೀರು ಹರಿಸಲು ತೀರ್ಮಾನಿಸಲಾಯಿತು.
ಶಾಸಕ ಡಾ.ಮಂತರ್‌ಗೌಡ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಕಾವೇರಿ ನೀರಾವರಿ ನಿಗಮದ ಕೇಂದ್ರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಹಾರಂಗಿ ಅಚ್ಚುಕಟ್ಟು ಪ್ರದೇಶಗಳ ಸ್ಥಿತಿಗತಿ, ಜಲಾಶಯದ ಪ್ರಸ್ತುತ ನೀರಿನ ಮಟ್ಟದ ಬಗ್ಗೆ ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆಯಲಾಯಿತು. ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆ ಆಗುತ್ತಿರುವುದರಿಂದ ಯೋಜಿತವಾಗಿ ನಾಲೆಗಳಿಗೆ ನೀರು ಹರಿಸುವ ಮೂಲಕ, ಸಮಪರ್ಕವಾಗಿ ನೀರಿನ ನಿರ್ವಹಣೆಯನ್ನು ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.
ಮುಂದೆ ಹಾರಂಗಿಯಲ್ಲಿ ಸಭೆ ನಡೆಸುವಂತೆ ಹಾಗೂ ಸಲಹಾ ಸಮಿತಿ ಸದಸ್ಯರು, ಆಯಾ ಕ್ಷೇತ್ರದ ಶಾಸಕರು ಸೇರಿ ನಾಲೆಗಳ ವ್ಯಾಪ್ತಿಯಲ್ಲಿನ ರೈತರ ಸಮಸ್ಯೆಗಳನ್ನು ಆಲಿಸುವಂತೆಯೂ ತೀರ್ಮಾನಿಸಲಾಯಿತು ಎಂದು ಮೂಲಗಳು ತಿಳಿಸಿವೆ
ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಶಾಸಕರಾದ ಎ.ಮಂಜು, ಡಿ.ರವಿಶಂಕರ್, ಕಾವೇರಿ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮರೀಗೌಡ, ಹಾರಂಗಿ ನೀರು ಬಳಕೆದಾರರ ಮಹಾಮಂಡಳಿಯ ಅಧ್ಯಕ್ಷ ಎಚ್.ಸಿ.ಚೌಡೇಗೌಡ, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ, ಹಾರಂಗಿ ಯೋಜನಾ ವೃತ್ತದ ಅಧೀಕ್ಷಕ ಎಂಜಿನಿಯರ್ ಸತೀಶ, ಹಾರಂಗಿ ಪುನರ್ವಸತಿ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಐ.ಕೆ. ಪುಟ್ಟಸ್ವಾಮಿ, ಹಾರಂಗಿ ಬಲದಂಡೆ ನಾಲಾ ವಿಭಾಗದ ಬಿ. ಮಂಜುನಾಥ್, ಹಾರಂಗಿ ನಾಲಾ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಎಸ್. ಕುಶಕುಮಾರ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.