ADVERTISEMENT

4ರಂದು ಸಂತ್ರಸ್ತರಿಗೆ ಮನೆ ಹಸ್ತಾಂತರ

​ಪ್ರಜಾವಾಣಿ ವಾರ್ತೆ
Published 29 ಮೇ 2020, 15:04 IST
Last Updated 29 ಮೇ 2020, 15:04 IST
ಸೋಮವಾರಪೇಟೆ ತಾಲ್ಲೂಕಿನ ಜಂಬೂರಿನಲ್ಲಿ ನಿರ್ಮಿಸಿರುವ ಮನೆಗಳು
ಸೋಮವಾರಪೇಟೆ ತಾಲ್ಲೂಕಿನ ಜಂಬೂರಿನಲ್ಲಿ ನಿರ್ಮಿಸಿರುವ ಮನೆಗಳು   

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ 2018ರಲ್ಲಿ ಉಂಟಾಗಿದ್ದ ಪ್ರಾಕೃತಿಕ ವಿಕೋಪದಿಂದ ಮನೆ ಕಳೆದುಕೊಂಡಿದ್ದ ಸಂತ್ರಸ್ತರಿಗೆ ಜೂನ್‌ 4ರಂದು ಮನೆ ಹಸ್ತಾಂತರ ಕಾರ್ಯಕ್ರಮ ನಿಗದಿಯಾಗಿದೆ.

ಅಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಬೆಳಿಗ್ಗೆ 11 ಗಂಟೆಗೆ ಜಂಬೂರು ಗ್ರಾಮದಲ್ಲಿ ಪ್ರವಾಹ ಸಂತ್ರಸ್ತರಿಗೆ ನಿರ್ಮಿಸಿದ ಮನೆಗಳ ಹಸ್ತಾಂತರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ, ಮಧ್ಯಾಹ್ನ 12.30 ಗಂಟೆಗೆ ಮದೆ ಗ್ರಾಮದಲ್ಲಿ ಪ್ರವಾಹ ಸಂತ್ರಸ್ತರಿಗೆ ನಿರ್ಮಿಸಿದ ಮನೆಗಳ ಹಸ್ತಾಂತರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಎಸ್.ಬಿ.ನರೇಂದ್ರ ಅವರು ತಿಳಿಸಿದ್ದಾರೆ.

ಸಂತ್ರಸ್ತರಿಗಾಗಿ ಕರ್ಣಂಗೇರಿ, ಮದೆ, ಗಾಳಿಬೀಡು, ಜಂಬೂರು, ಕೆ.ನಿಡುಗಣಿ ಗ್ರಾಮಗಳಲ್ಲಿ ಮನೆ ನಿರ್ಮಿಸಲಾಗುತ್ತಿತ್ತು. ಅದರಲ್ಲಿ ಕರ್ಣಂಗೇರಿ ಗ್ರಾಮದಲ್ಲಿ ಮಾತ್ರ 35 ಮಂದಿ ಸಂತ್ರಸ್ತರಿಗಷ್ಟೇ ಜಿಲ್ಲಾಡಳಿತವು ಕಳೆದ ವರ್ಷ ಮನೆ ಹಸ್ತಾಂತರಿಸಿತ್ತು. ಉಳಿದವರು ಮನೆಗಾಗಿ ಚಾತಕ ಪಕ್ಷಿಯಂತೆ ಕಾದಿದ್ದರು.

ADVERTISEMENT

ಇದೀಗ ಮದೆ ಹಾಗೂ ಜಂಬೂರಿನ 463 ಮಂದಿಗೆ ಸೂರು ದೊರೆಯಲಿದ್ದು, ಮುಂಗಾರು ಮಳೆ ಆರಂಭಕ್ಕೂ ಮೊದಲೇ ಮನೆ ಹಸ್ತಾಂತರಿಸಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ.

ಡಬಲ್‌ ಬೆಡ್‌ರೂಂ ಮನೆ: ಸರ್ಕಾರವು ಪ್ರತಿ ಮನೆಗೆ ₹ 9.85 ಲಕ್ಷ ವೆಚ್ಚ ಮಾಡಿದೆ. ಎರಡು ಮಲಗುವ ಕೋಣೆಯುಳ್ಳ ಮನೆ ನಿರ್ಮಿಸಲಾಗಿದ್ದು, ಅಗತ್ಯವುಳ್ಳವರು ಹೆಚ್ಚುವರಿ ಕೊಠಡಿ ನಿರ್ಮಿಸಿಕೊಳ್ಳಲು ಅವಕಾಶವಿದೆ.

ರಾಜೀವ್‌ ಗಾಂಧಿ ವಸತಿ ನಿಗಮದ ಅಡಿ ಮನೆಗಳನ್ನು ನಿರ್ಮಿಸಲಾಗಿದೆ. ಆಧುನಿಕ ತಂತ್ರಜ್ಞಾನ ಬಳಸಿ ಮನೆ ನಿರ್ಮಿಸಲಾಗಿದೆ. ಜಂಬೂರಿನಲ್ಲಿ ಇನ್ಫೊಸಿಸ್‌ ವತಿಯಿಂದ 200 ಮನೆಗಳು ನಿರ್ಮಾಣ ಹಂತದಲ್ಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.