ADVERTISEMENT

ತಮ್ಮ ಹಕ್ಕನ್ನಲ್ಲದೇ ಇತರರ ಹಕ್ಕನ್ನೂ ಗೌರವಿಸಿ: ಶುಭ

ಜಿಲ್ಲಾಡಳಿತದಿಂದ ಮಾನವ ಹಕ್ಕುಗಳ ದಿನಾಚರಣೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರ ಕರೆ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2025, 3:09 IST
Last Updated 11 ಡಿಸೆಂಬರ್ 2025, 3:09 IST
ಮಡಿಕೇರಿಯಲ್ಲಿ ಬುಧವಾರ ನಡೆದ ಮಾನವ ಹಕ್ಕುಗಳ ದಿನಾಚರಣೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶುಭ ಮಾತನಾಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪವಿಭಾಗಾಧಿಕಾರಿ ನಿತಿನ್ ಚಕ್ಕಿ ಭಾಗವಹಿಸಿದ್ದರು
ಮಡಿಕೇರಿಯಲ್ಲಿ ಬುಧವಾರ ನಡೆದ ಮಾನವ ಹಕ್ಕುಗಳ ದಿನಾಚರಣೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶುಭ ಮಾತನಾಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪವಿಭಾಗಾಧಿಕಾರಿ ನಿತಿನ್ ಚಕ್ಕಿ ಭಾಗವಹಿಸಿದ್ದರು   

ಮಡಿಕೇರಿ: ‘ಪ್ರತಿಯೊಬ್ಬರೂ ಮಾನವ ಹಕ್ಕುಗಳ ಸಂರಕ್ಷಣೆಯತ್ತ ಗಮನ ಹರಿಸಬೇಕು, ಇತರರ ಹಕ್ಕುಗಳನ್ನೂ ಸಂರಕ್ಷಿಸಬೇಕು, ಮಾನವ ಹಕ್ಕಗಳು ಉಲ್ಲಂಘನೆಯಾಗದಂತೆ ಎಚ್ಚರ ವಹಿಸಬೇಕು’ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶುಭ ಹೇಳಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಬುಧವಾರ ನಡೆದ ‘ಮಾನವ ಹಕ್ಕುಗಳ ದಿನಾಚರಣೆ’ಯಲ್ಲಿ ಅವರು ಮಾತನಾಡಿದರು.

‘ಇಂದಿನ ಸಾಮಾಜಿಕ ಜಾಲತಾಣ ಯುಗದಲ್ಲಿ ಪ್ರತಿಯೊಬ್ಬರಿಗೂ ಕಾನೂನಿನ ರಕ್ಷಣೆ ಪರಿಣಾಮಕಾರಿಯಾಗಿ ದೊರೆಯುತ್ತದೆ ಎಂಬುದು ಒಂದೆಡೆಯಾದರೆ, ಇದನ್ನು ದುರುಪಯೋಗಪಡಿಸಿಕೊಳ್ಳುವುದು ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ ಪ್ರತಿಯೊಬ್ಬರೂ ಮಾನವ ಹಕ್ಕುಗಳ ಸಂರಕ್ಷಣೆಯತ್ತ ಒತ್ತು ನೀಡುವುದು ಅಗತ್ಯ’ ಎಂದು ಅವರು ಅಭಿಪ್ರಾಯಪಟ್ಟರು.

ADVERTISEMENT

‘ಸಾಮಾಜಿಕ ಮಾಧ್ಯಮಗಳ ಯುಗದಲ್ಲಿ ಸಿಸಿಟಿವಿ, ವಾಯ್ಸ್ ರೆಕಾರ್ಡ್, ವಿಡಿಯೊ ರೆಕಾರ್ಡ್, ಕಾಲ್ ರೆಕಾರ್ಡ್, ಹೀಗೆ ಹಲವನ್ನು ಸಾಕ್ಷಿಯಾಗಿ ಪರಿಗಣಿಸಿ ಮಾನವ ಹಕ್ಕುಗಳನ್ನು ಸಂರಕ್ಷಣೆ ಮಾಡುವುದು ಒಂದೆಡೆಯಾದರೆ, ತಿಳಿದೋ ತಿಳಿಯದೆಯೋ ಘಟನೆಗಳು ಆದಾಗ ಅದನ್ನೇ ನೆಪವಾಗಿ ಇಟ್ಟುಕೊಂಡು ಮಾನವರನ್ನು ಪೀಡಿಸುವುದು ಅಥವಾ ಸತಾಯಿಸುವುದು ಸಹ ಕಂಡು ಬರುತ್ತಿದೆ. ಕಾನೂನಿನಲ್ಲಿ ಎಲ್ಲರಿಗೂ ಸಮಾನವಾಗಿ ಬದುಕುವ ಅವಕಾಶವಿದ್ದು, ಇತರರನ್ನು ಗೌರವಿಸುವಂತಾಗಬೇಕು’ ಎಂದರು.

‘ಪ್ರಾಧಿಕಾರವು ಪ್ರತಿಯೊಬ್ಬರಿಗೂ ನ್ಯಾಯ ಒದಗಿಸಲು ಶ್ರಮಿಸುತ್ತಿದೆ. ವಕೀಲರನ್ನು ನಿಯೋಜಿಸಿ ಅವಕಾಶ ವಂಚಿತರಿಗೆ ನ್ಯಾಯ ಕಲ್ಪಿಸಲಾಗುತ್ತಿದೆ’ ಎಂದರು.

ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ಪ್ರತಿಜ್ಞಾ ವಿಧಿ ಬೋಧಿಸಿದರು. ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಿ.ಬಸಪ್ಪ, ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಚಿದಾನಂದ ಕುಮಾರ್, ಜಿಲ್ಲಾ ಖಜಾನಾಧಿಕಾರಿ ರಘುನಾಥ್, ಜಿಲ್ಲಾ ಪಂಚಾಯಿತಿ ಎಂಜಿನಿಯರ್ ನಾಯಕ, ಕಂದಾಯ ಇಲಾಖೆಯ ಸಾಮಾಜಿಕ ಭದ್ರತಾ ಯೋಜನೆಯ ಸಹಾಯಕ ನಿರ್ದೇಶಕಿ ಮಮತಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ, ಪ್ರಾಧಿಕಾರದ ಆಡಳಿತ ಸಹಾಯಕರಾದ ಜಯಪ್ಪ, ಮಧುಕರ, ಮಹೇಶ್ ಭಾಗವಹಿಸಿದ್ದರು.

ದಿನಾಚರಣೆಯಲ್ಲಿ ಭಾಗವಹಿಸಿದ್ದ ಅಧಿಕಾರಿಗಳು

ಧಮನಿತರಿಗೆ ಧ್ವನಿ ನೀಡಿ– ಆರ್.ಐಶ್ವರ್ಯ

ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಮಾತನಾಡಿ ‘ಸಮಾಜದಲ್ಲಿ ಧಮನಿತರಿಗೆ ಧ್ವನಿ ನೀಡಬೇಕು. ಮಾನವ ಹಕ್ಕುಗಳನ್ನು ಅವರಿಗೆ ಕಲ್ಪಿಸಬೇಕು’ ಎಂದರು. ಮಾನವ ಸಮಾಜ ಜೀವಿಯಾಗಿದ್ದು ಒಬ್ಬರು ಮತ್ತೊಬ್ಬರನ್ನು ಅವಲಂಬಿಸಿರುತ್ತಾರೆ. ಆದ್ದರಿಂದ ಮಹಿಳೆಯರು ಮಕ್ಕಳು ವಿಶೇಷಚೇತನರು ಸೇರಿದಂತೆ ಎಲ್ಲರನ್ನು ಗೌರವಿಸಬೇಕು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.