ಮಡಿಕೇರಿ: ಅಕ್ರಮ ಬಾಂಗ್ಲಾ ವಲಸಿಗರ ಸಂಖ್ಯೆ ಕೊಡಗು ಜಿಲ್ಲೆಯಲ್ಲಿ ಇತ್ತೀಚೆಗೆ ಹೆಚ್ಚಾಗುತ್ತಿದೆ ಎಂಬ ಆತಂಕದ ಕುರಿತು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಲ್ಲಿ ಪ್ರಸ್ತಾಪಿಸಿದರು.
ನವದೆಹಲಿಯಲ್ಲಿ ಸೋಮವಾರ ಅಮಿತ್ ಶಾ ಅವರನ್ನು ಭೇಟಿಯಾದ ಸಂಸದ ಯದುವೀರ್ ಈ ವಿಷಯದ ಕುರಿತು ಗೃಹ ಸಚಿವಾಲಯದಿಂದ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಮನವಿ ಸಲ್ಲಿಸಿದರು.
ಇದರೊಂದಿಗೆ ಅವರು, ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿ ಹಾಗೂ ಇತರೆ ಪ್ರಮುಖ ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಿದರು.
ಈ ವೇಳೆ ಅವರು, ಕೊಡಗಿನಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದಾಗಿ ಆಸ್ತಿಪಾಸ್ತಿ ನಷ್ಟವಾಗಿದೆ. ಇವುಗಳಿಗೆ ಎನ್‌ಡಿಆರ್‌ಎಫ್ ಮೂಲಕ ಪರಿಹಾರ ಒದಗಿಸಲು ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿದರು.
ಹೆಚ್ಚುವರಿ ಅನುದಾನ ಬಿಡುಗಡೆ ಮಾಡಿದರೆ, ತಡೆಗೋಡೆಗಳನ್ನು, ರಸ್ತೆಗಳನ್ನು ದುರಸ್ತಿ ಮಾಡಿಸಲು ಸಾಧ್ಯವಾಗಲಿದೆ ಎಂದು ತಿಳಿಸಿದರು.
ಕೊಡಗು ಜಿಲ್ಲೆಯಾದ್ಯಂತ ಈ ಬಾರಿ ಅತಿ ಹೆಚ್ಚು ಮಳೆಯಾಗಿದೆ. ಇದಕ್ಕಾಗಿ ಹೆಚ್ಚುವರಿ ಪರಿಹಾರ ಬಿಡುಗಡೆ ಮಾಡಬೇಕು ಎಂದೂ ಅವರು ಮನವಿ ಮಾಡಿದರು.
ತಂಬಾಕು ಮತ್ತು ಕಾಫಿ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಹಾಗೂ ಮಳೆಯಿಂದ ಆಗಿರುವ ನಷ್ಟಕ್ಕೆ ಪರಿಹಾರ ದೊರಕಿಸಿಕೊಡಬೇಕು ಎಂದು ಕೋರಿದರು.
ಎಲ್ಲ ವಿಷಯಗಳನ್ನು ಕೂಲಂಕಷವಾಗಿ ಆಲಿಸಿದ ಗೃಹ ಸಚಿವ ಅಮಿತ್ ಶಾ, ಕಾಲಮಿತಿಯಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವ ಭರವಸೆ ನೀಡಿದರು ಎಂದು ಯದುವೀರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.