ADVERTISEMENT

ಕೊಡಗು: 20 ದಿನಗಳಲ್ಲಿ 13 ಮಂದಿಯಲ್ಲಿ ಕೋವಿಡ್‌ ಪತ್ತೆ!

ಈಗ ಸಕ್ರಿಯ ಪ್ರಕರಣಗಳ ಸಂಖ್ಯೆ 9; ಎಲ್ಲರ ಆರೋಗ್ಯ ಸ್ಥಿರ

​ಪ್ರಜಾವಾಣಿ ವಾರ್ತೆ
Published 11 ಜನವರಿ 2024, 6:24 IST
Last Updated 11 ಜನವರಿ 2024, 6:24 IST
ಕೋವಿಡ್‌ ಪತ್ತೆ ಪರೀಕ್ಷೆಯ ಪ್ರಾತಿನಿಧಿಕ ಚಿತ್ರ
ಕೋವಿಡ್‌ ಪತ್ತೆ ಪರೀಕ್ಷೆಯ ಪ್ರಾತಿನಿಧಿಕ ಚಿತ್ರ    

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಡಿ. 20ರಿಂದ ಇಲ್ಲಿಯವರೆಗೆ ಒಟ್ಟು 13 ಮಂದಿಯಲ್ಲಿ ಕೋವಿಡ್ ಪತ್ತೆಯಾಗಿದೆ. ಸದ್ಯ, 9 ಸಕ್ರಿಯ ಪ್ರಕರಣಗಳಷ್ಟೇ ಇವೆ. ಎಲ್ಲರ ಆರೋಗ್ಯವೂ ಉತ್ತಮವಾಗಿದೆ.

ಇಲ್ಲಿ ಬುಧವಾರ ಜಿಲ್ಲಾಧಿಕಾರಿ ವೆಂಕಟ್‌ರಾಜಾ ಅವರು ಈ ಕುರಿತು ಅಧಿಕಾರಿಗಳೊಂದಿಗೆ ವಿಡಿಯೊ ಸಂವಾದ ನಡೆಸಿ, ಅಗತ್ಯ ಮಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಎಂ.ಸತೀಶ್‌ಕುಮಾರ್ ಪ್ರತಿಕ್ರಿಯಿಸಿ, ‘ಕೊಡಗು ಜಿಲ್ಲೆಯಲ್ಲಿ ಕೋವಿಡ್ ಸ್ಥಿತಿ ನಿಯಂತ್ರಣದಲ್ಲಿದೆ. ಉಸಿರಾಟಕ್ಕೆ ತೊಂದರೆಯುಂಟಾದ ಒಬ್ಬರ ಗಂಟಲು ದ್ರವದ ಮಾದರಿಯನ್ನು ಮಾತ್ರ ಜಿನೊಂ ಸೀಕ್ವೆನ್ಸಿಂಗ್ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ’ ಎಂದು ಹೇಳಿದರು.

ADVERTISEMENT

ಪ್ರಾಥಮಿಕ, ಸಮುದಾಯ, ತಾಲ್ಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿ ದಾಸ್ತಾನು ಮಾಡಿಕೊಳ್ಳಲಾಗಿದೆ. ಕೋವಿಡ್ ಕುರಿತು ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಈ ವೇಳೆ ಅವರು ಕೋವಿಡ್ 19 ಸಂಬಂಧ ತಾಂತ್ರಿಕ ಸಲಹಾ ಸಮಿತಿ ಮಾಡಿರುವ ಶಿಫಾರಸ್ಸುಗಳನ್ನು ಸಭೆಯ ಗಮನಕ್ಕೆ ತಂದರು.

ಎಲ್ಲಾ ಹಿರಿಯ ನಾಗರಿಕರು ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು, ವಿಶೇಷವಾಗಿ ಹೃದಯ, ಲಿವರ್ ಸಮಸ್ಯೆ, ಗರ್ಭಿಣಿಯರು, ಎದೆ ಹಾಲುಣಿಸುವ ತಾಯಂದಿರು, ಹೊರಾಂಗಣ ಪ್ರದೇಶಗಳಿಗೆ ತೆರಳಿದಾಗ ಮಾಸ್ಕ್ ಧರಿಸಬೇಕು. ಅಗತ್ಯ ಗಾಳಿ, ಬೆಳಕಿನ ವ್ಯವಸ್ಥೆ ಇಲ್ಲದ ಮತ್ತು ಹೆಚ್ಚು ಜನಸಂದಣಿ ಇರುವ ಪ್ರದೇಶಗಳಿಗೆ ತೆರಳಬಾರದು ಎಂದರು.

ಜ್ವರ, ಕೆಮ್ಮು, ನೆಗಡಿ ಉಸಿರಾಟದ ಸೋಂಕಿನ ಲಕ್ಷಣ ಹೊಂದಿದವರು ತಕ್ಷಣವೇ ಅಗತ್ಯ ವೈದ್ಯಕೀಯ ಸಲಹೆ ಪಡೆಯಬೇಕು. ಮೂಗು ಹಾಗೂ ಬಾಯಿ ಮುಚ್ಚುವಂತೆ ಮಾಸ್ಕ್ ಧರಿಸಬೇಕು. ವೈಯಕ್ತಿಕ ಸ್ವಚ್ಛತೆ, ಆಗಾಗ್ಗೆ ಕೈಗಳನ್ನು ಸೋಪು ಹಾಗೂ ನೀರಿನಿಂದ ತೊಳೆಯಬೇಕು ಎಂದು ಹೇಳಿದರು.

ಅಂತರರಾಷ್ಟ್ರೀಯ ಪ್ರಯಾಣದ ಸಂದರ್ಭದಲ್ಲಿ ಎಚ್ಚರಿಕೆಯಿಂದಿದ್ದು, ವಿಮಾನ ನಿಲ್ದಾಣದಲ್ಲಿ ಹಾಗೂ ವಿಮಾನದ ಒಳಗೆ ಮಾಸ್ಕ್ ಧರಿಸಬೇಕು ಎಂದರು.

ಎಲ್ಲಾ ಐಎಲ್‍ಐ ಅಥವಾ ಎಸ್‍ಎಆರ್‌ಐ ಸಮಸ್ಯೆ ಹೊಂದಿರುವವರಿಗೆ ಕೋವಿಡ್-19 ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಲಾಗುತ್ತಿದೆ ಎಂದು ಹೇಳಿದರು.

ಸೋಂಕಿನ ಲಕ್ಷಣ ಹೊಂದಿರುವವರನ್ನು ಪರೀಕ್ಷೆಗೆ ಒಳಪಡಿಸಲು ಅಗತ್ಯ ಸಂಖ್ಯೆಯ ತಂಡಗಳನ್ನು ಜಿಲ್ಲೆ ಮತ್ತು ತಾಲ್ಲೂಕುಗಳಲ್ಲಿ ಕಾರ್ಯೋನ್ಮುಖಗೊಳಿಸಲಾಗಿದೆ. ಪಟ್ಟಣ ಹಾಗೂ ಗ್ರಾಮಗಳಲ್ಲಿ ವರದಿಯಾಗುವ ಜ್ವರ ಪ್ರಕರಣಗಳ ವರದಿಯ ಬಗ್ಗೆ ದೈನಂದಿನ ಪರಿಶೀಲನೆ ನಡೆಸಲಾಗುತ್ತಿದೆ. ಜ್ವರ ಪ್ರಕರಣಗಳು ಒಂದು ವೇಳೆ ಏರಿಕೆಯಾದಲ್ಲಿ ಸಮರೋಪಾದಿಯಲ್ಲಿ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಶ್ರೀನಿವಾಸ್, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ವರ್ಚ್ಯೂವೆಲ್ ಸಭೆಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.