ADVERTISEMENT

ಮಡಿಕೇರಿ: ಮೊಳಗಿದ ರಾಷ್ಟ್ರಭಕ್ತಿ ಘೋಷಣೆ

‘ಪ್ರತಿ ಮನೆಯಲ್ಲೂ ರಾಷ್ಟ್ರಧ್ವಜ’ ಅಭಿಯಾನದ ಸಾವಿರಕ್ಕೂ ಹೆಚ್ಚು ಮಂದಿ ಭಾಗಿ; ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2022, 2:56 IST
Last Updated 13 ಆಗಸ್ಟ್ 2022, 2:56 IST
ಮಡಿಕೇರಿ ನಗರದಲ್ಲಿ ನಡೆದ ಜಾಥಾದಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದರು
ಮಡಿಕೇರಿ ನಗರದಲ್ಲಿ ನಡೆದ ಜಾಥಾದಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದರು   

ಮಡಿಕೇರಿ: ‘ನಮ್ಮ ತಾಯಿ ಭಾರತಿ, ನಮ್ಮ ನಾಡು ಭಾರತ, ವಂದೇ ಮಾತರಂ, ಭಾರತ ಮಾತಾ ಕೀ ಜೈ... ಹೀಗೆ ದೇಶಭಕ್ತಿಯ ನಾನಾ ಘೋಷಣೆ ಗಳನ್ನು ಶಾಲಾ ಮಕ್ಕಳೂ ಸೇರಿದಂತೆ ಅಧಿಕಾರಿಗಳೂ ಕೂಗಿ ದೇಶಭಕ್ತಿ ಮೆರೆದರು.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ‘ಪ್ರತಿ ಮನೆಯಲ್ಲೂ ರಾಷ್ಟ್ರಧ್ವಜ’ ಅಭಿಯಾನದ ಅಂಗವಾಗಿ ಜಿಲ್ಲಾಡಳಿತ ಶುಕ್ರವಾರ ನಗರದಲ್ಲಿ ಏರ್ಪಡಿಸಿದ್ದ ಜಾಥಾದಲ್ಲಿ ಈ ದೃಶ್ಯಗಳು ಕಂಡು ಬಂದವು. ಎಲ್ಲರೂ ರಾಷ್ಟ್ರಧ್ವಜ ಹಿಡಿದು ಹೆಜ್ಜೆ ಹಾಕಿದರು.

ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಎಂ.ಭೃಂಗೇಶ್ ಹಾಗೂಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ನಗರದ ಕೋಟೆ ಆವರಣದಲ್ಲಿ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದರು.

ADVERTISEMENT

ಪೊಲೀಸ್ ಮತ್ತು ಭಾರತೀಯ ವಿದ್ಯಾಭವನದವಿದ್ಯಾರ್ಥಿಗಳ ವಾದ್ಯ ಸಂಗೀತದ ಹಿನ್ನೆಲೆಯಲ್ಲಿ ಸಾವಿರಕ್ಕೂ ಅಧಿಕ ಮಂದಿ ನಗರದ ಪ್ರಮುಖ ರಸ್ತೆಗಳಲ್ಲಿ ನಡೆದ ಮೆರವಣಿಗೆಯಲ್ಲಿ ಪಾಲ್ಗೊಂಡರು.

ಜಾಥಾವು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತದ ಮೂಲಕ ಇಂದಿರಾ ಗಾಂಧಿ ವೃತ್ತ ತಲುಪಿ ನಂತರ ಸ್ಕ್ವಾಡ್ರನ್ ಲೀಡರ್ ದೇವಯ್ಯ ವೃತ್ತ– ಮಂಗೆರೀರ ಮುತ್ತಣ್ಣ ವೃತ್ತ– ಜನರಲ್ ತಿಮ್ಮಯ್ಯ ವೃತ್ತದ ಮುಖಾಂತರ ಕೋಟೆ ಆವರಣಕ್ಕೆ ತಲುಪಿತು.

ನಗರದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು, ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿದ್ಯಾರ್ಥಿಗಳು, ಭಾರತೀಯ ವಿದ್ಯಾಭವನ, ಸಂತ ಜೋಸೆಫರ, ಸಂತ ಮೈಕಲರ ಶಾಲೆಯ ವಿದ್ಯಾರ್ಥಿಗಳು, ರಾಜರಾಜೇಶ್ವರಿ ಶಾಲೆ, ಜನರಲ್ ತಿಮ್ಮಯ್ಯ ಶಾಲೆ, ಬ್ಲಾಸಂ ಶಾಲೆ, ಲಿಟ್ಲ್ ಫ್ಲವರ್ ಶಾಲೆ ವಿದ್ಯಾರ್ಥಿಗಳು, ಎನ್‍ಡಿಆರ್‌ಎಫ್, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು, ಅಧಿಕಾರಿಗಳು, ಸಿಬ್ಬಂದಿ, ಹೊರಗುತ್ತಿಗೆ ಸಿಬ್ಬಂದಿ ಸೇರಿದಂತೆ ಒಂದು ಸಾವಿರಕ್ಕೂ ಹೆಚ್ಚು ಮಂದಿ ಜಾಥಾದಲ್ಲಿ ಪಾಲ್ಗೊಂಡಿದ್ದರು.

ಜಿಲ್ಲಾಡಳಿತದ ಜತೆಗೆ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ, ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಸಂಘ, ಭಾರತೀಯ ಸ್ಕೌಟ್ಸ್ ಮತ್ತು ಗೈಡ್ಸ್ ಸಹಯೋಗ ನೀಡಿದ್ದವು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭಂವರ್ ಸಿಂಗ್ ಮೀನಾ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ತಹಶೀಲ್ದಾರ್ ಮಹೇಶ್, ಸೌಟ್ಸ್ ಮತ್ತು ಗೈಡ್ಸ್‌ನ ಪ್ರಧಾನ ಆಯುಕ್ತರಾದ ಬೇಬಿ ಮ್ಯಾಥ್ಯೂ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಪೊನ್ನಚ್ಚನ ಶ್ರೀನಿವಾಸ್ ಇದ್ದರು.

ಜಾಥಾ ನಂತರ ನಗರದ ಕೋಟೆ ಆವರಣದಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು. ಸ್ವಚ್ಛತಾ ಅಭಿಯಾನದಲ್ಲಿ ಜಿಲ್ಲಾಧಿಕಾರಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.