ADVERTISEMENT

ಶಾಸಕರಿಂದ ವಿವೇಕ ನಿರ್ಮಿತ ಶಾಲಾ ಕೊಠಡಿಗಳ ಉದ್ಘಾಟನೆ

ಶನಿವಾರಸಂತೆಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2024, 4:17 IST
Last Updated 27 ಫೆಬ್ರುವರಿ 2024, 4:17 IST
ಶನಿವಾರಸಂತೆಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶಾಸಕ ಡಾ.ಮಂತರ್‌ಗೌಡ ಅವರು ಸೋಮವಾರ ‘ವಿವೇಕ’ ಶಾಲಾ ಕೊಠಡಿಗಳನ್ನು ಉದ್ಘಾಟಿಸಿದರು
ಶನಿವಾರಸಂತೆಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶಾಸಕ ಡಾ.ಮಂತರ್‌ಗೌಡ ಅವರು ಸೋಮವಾರ ‘ವಿವೇಕ’ ಶಾಲಾ ಕೊಠಡಿಗಳನ್ನು ಉದ್ಘಾಟಿಸಿದರು   

ಶನಿವಾರಸಂತೆ: ‘ಸರ್ಕಾರಿ ಶಾಲೆಗಳ ಬೆಳವಣಿಗೆಯಲ್ಲಿ ಪೋಷಕರು ಮತ್ತು ಶಿಕ್ಷಕರ ಪಾತ್ರ ಬಹುಮುಖ್ಯವಾಗುತ್ತದೆ’ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್‌ಗೌಡ ಅಭಿಪ್ರಾಯಪಟ್ಟರು.

ಇಲ್ಲಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಅವರು ಸೋಮವಾರ ಜಿಲ್ಲಾ ಪಂಚಾಯಿತಿಯಿಂದ ₹ 27.50 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ವಿವೇಕ ಶಾಲಾ ಕೊಠಡಿಗಳು, ಉದ್ಯೋಗ ಖಾತರಿ ಯೋಜನೆಯಡಿ ನಿರ್ಮಾಣವಾಗಿರುವ ಶೌಚಾಲಯಗಳು ಮತ್ತು ಅಕ್ಷರ ದಾಸೋಹದಡಿ ದಾಸೋಹ ಕೊಠಡಿಗಳನ್ನು ಉದ್ಘಾಟಿಸಿದ ಬಳಿಕ ಅವರು ಮಾತನಾಡಿದರು.

ಸರ್ಕಾರಿ ಶಾಲೆಗಳ ಬೆಳವಣಿಗೆಗಾಗಿ ರಾಜ್ಯ ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿದೆ. ಈ ನಿಟ್ಟಿನಲ್ಲಿ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಿದರೆ ಹಾಗೂ ಶಿಕ್ಷಣ ಇಲಾಖೆಯ ಯೋಜನೆಯನ್ನು ಸದ್ಬಳಕೆ ಮಾಡಿದರೆ ಖಾಸಗಿ ಶಾಲೆಗಳಿಗಿಂತ ಕಡಿಮೆ ಇಲ್ಲದಂತೆ ಬೆಳವಣಿಗೆಯಾಗುತ್ತದೆ. ಈ ದಿಸೆಯಲ್ಲಿ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸುವ ಮೂಲಕ ಸರ್ಕಾರಿ ಶಾಲೆಗಳ ಉನ್ನತ್ತಿಗೆ ಪ್ರೋತ್ಸಾಹಿಸಬೇಕು ಎಂದು ಮನವಿ ಮಾಡಿದರು.

ADVERTISEMENT

ಶಾಲೆಯ ಅಭಿವೃದ್ದಿಯ ಜವಾಬ್ದಾರಿ ಪೋಷಕರು ಮತ್ತು ಶಿಕ್ಷಕರ ಮೇಲಿದ್ದು ಶಾಲೆಯ ಕುಂದು ಕೊರತೆ ಇತರೆ ಚಿಕ್ಕ ಪುಟ್ಟ ಸಮಸ್ಯೆಗಳಿಗೆ ಸಂಬಂಧಪಟ್ಟ ಗ್ರಾಮ ಪಂಚಾಯಿತಿಯವರು ಸಮಸ್ಯೆಗಳನ್ನು ಬಗೆಹರಿಸಬೇಕು

ಶನಿವಾರಸಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಹರೀಶ್ ಅಧ್ಯಕ್ಷತೆ ವಹಿಸಿದ್ದರು. ಸೋಮವಾರಪೇಟೆ ಕ್ಷೇತ್ರದ ಶಿಕ್ಷಣಾಧಿಕಾರಿ ಭಾಗ್ಯಮ್ಮ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸರ್ದಾರ್ ಆಹಮ್ಮದ್, ಸದಸ್ಯರಾದ ಎಸ್.ಸಿ.ಶರತ್ ಶೇಖರ್, ಎಸ್.ಎನ್.ರಘು, ಎನ್.ಎ.ಆದಿತ್ಯಗೌಡ, ಸರೋಜ ಶೇಖರ್, ಸರಸ್ವತಿ, ಪಿಡಿಒ ಹರೀಶ್, ಶಾಲಾ ಮುಖ್ಯ ಶಿಕ್ಷಕ ವಿಶ್ವನಾಥ್, ಶನಿವಾರಸಂತೆ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಸಿ.ಕೆ.ದಿನೇಶ್, ಎಸ್‍ಡಿಎಂಸಿ ಅಧ್ಯಕ್ಷ ಚರಣ್, ಸುಜಿತ್, ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ್ ಇನ್ನು ಮುಂತಾದವರು ಭಾಗವಹಿಸಿದರು.

ಶನಿವಾರಸಂತೆಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶಾಸಕ ಡಾ.ಮಂತರ್‌ಗೌಡ ಅವರು ಸೋಮವಾರ ‘ವಿವೇಕ’ ಶಾಲಾ ಕೊಠಡಿಗಳನ್ನು ಉದ್ಘಾಟಿಸಿದ ಬಳಿಕ ಮಾತನಾಡಿದರು

ದುರ್ವಾಸನೆಯಲ್ಲೇ ಕಟ್ಟಡ ಉದ್ಘಾಟಿಸಿದ ಶಾಸಕ!

ಶನಿವಾರಸಂತೆ ಕಸ ವಿಲೇವಾರಿ ಘಟಕದ ಸಮೀಪದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿರುವ ಕೊಠಡಿಗಳನ್ನು ಶಾಸಕ ಡಾ.ಮಂತರ್‌ಗೌಡ ದುರ್ವಾಸನೆಯ ಮಧ್ಯೆಯಲ್ಲೇ ಉದ್ಘಾಟಿಸಿದರು. ದುರ್ವಾಸನೆಯನ್ನು ಮನಗೊಂಡು ತಕ್ಷಣವೇ ಕಸ ವಿಲೇವಾರಿ ಘಟಕವನ್ನು ಸ್ಥಳಾಂತರಿಸುವ ಬಗ್ಗೆ ಸ್ಥಳೀಯ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿಯ ಜೊತೆಗೆ ಚರ್ಚಿಸಿದರು. ಶಾಲಾ ವಾತಾವರಣ ಸಂಪೂರ್ಣ ದುರ್ವಾಸನೆಯಿಂದ ಕೂಡಿದ್ದು ವಿದ್ಯಾರ್ಥಿಗಳಿಗೆ ಆರೋಗ್ಯದ ಬಗ್ಗೆ ದುಷ್ಪರಿಣಾಮ ಬೀರಲಿದೆ ಎಂದೂ ಆತಂಕ ವ್ಯಕ್ತಪಡಿಸಿದರು. ದುಂಡಳ್ಳಿಯಲ್ಲಿ ನಿರ್ಮಾಣವಾಗಿರುವ ಕಸ ವಿಲೇವಾರಿ ಘಟಕದಕ್ಕೆ ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಇದನ್ನು ಪೂರ್ಣಗೊಳಿಸಲು ₹ 5 ಲಕ್ಷ ಅನುದನದ ಕೊರತೆ ಇದ್ದು ಶಾಸಕರ ಅನುದಾನದಲ್ಲಿ ನೀಡುವಂತೆ ಶನಿವಾರಸಂತೆ ಆಡಳಿತ ಮಂಡಳಿ ಸದಸ್ಯರು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಮಂತರ್‌ಗೌಡ ತಮ್ಮ ಅನುದಾನಡಿ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.