
ಸುಂಟಿಕೊಪ್ಪ: ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ ಅವರ ಸಹಯೋಗದೊಂದಿಗೆ ಹೇರೂರು ಗ್ರಾಮದಲ್ಲಿ, ಬ್ಯಾಂಕಿನ ಯೋಜನೆ ಬಗ್ಗೆ ಮಾಹಿತಿ ಕಾರ್ಯಕ್ರಮ ಮಂಗಳವಾರ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಆರ್ಥಿಕ ಸಮಾಲೋಚಕರಾದ ನಬಿ ಅವರು, ‘ಜನಸಾಮಾನ್ಯರು ಕಡ್ಡಾಯವಾಗಿ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವುದರ ಮೂಲಕ ಅದರ ಪ್ರಯೋಜನವನ್ನು ಪಡೆದುಕೊಳ್ಳಬೇಕು. ಮುಖ್ಯವಾಗಿ, ಯೋಜನೆಗಳಲ್ಲಿ ಒಂದಾದ ಪ್ರಧಾನಮಂತ್ರಿ ಸುರಕ್ಷ ಭೀಮಾ ಯೋಜನೆಯು ಒಂದು ಅಪಘಾತ ವಿಮೆಯಾಗಿದ್ದು, ವಾರ್ಷಿಕ ₹ 20 ಅನ್ನು ಪಾವತಿಸಿ ಈ ಯೋಜನೆ ಮಾಡಿಸಿಕೊಂಡಲ್ಲಿ ಯಾವುದೇ ರೀತಿಯ ಅಪಘಾತ ಸಂಭವಿಸಿದಲ್ಲಿ ₹ 2 ಲಕ್ಷಗಳವರೆಗಿನ ವಿಮಾಮೊತ್ತವು ಗ್ರಾಹಕರ ನಾಮನಿರ್ದೇಶಿತರಿಗೆ (ನಾಮಿನಿ) ಸಿಗುತ್ತದೆ’ ಎಂದು ಮಾಹಿತಿ ನೀಡಿದರು.
ವಾರ್ಷಿಕವಾಗಿ ₹ 436 ಅನ್ನು ಪಾವತಿಸಿ ಪ್ರಧಾನಮಂತ್ರಿ ಜೀವನ ಜ್ಯೋತಿ ವಿಮೆಯನ್ನು ಮಾಡಿಸಿಕೊಂಡಲ್ಲಿ ಯಾವುದೇ ರೀತಿಯಲ್ಲಿ ಮರಣಹೊಂದಿದರೆ ಅಂತವರ ನಾಮನಿರ್ದೇಶಿತರಿಗೆ (ನಾಮಿನಿ) ಕೂಡ ₹ 2 ಲಕ್ಷಗಳ ವಿಮಾಮೊತ್ತ ಸಿಗಲಿದೆ. ಅಲ್ಲದೆ 60 ವಯಸ್ಸು ಆದ ನಂತರದಲ್ಲಿ ಪಿಂಚಣಿ ರೂಪದಲ್ಲಿ ₹ 1 ಸಾವಿರದಿಂದ ₹ 5 ಸಾವಿರದವರೆಗಿನ ಪಿಂಚಣಿ ಹಣ ಸಿಗಬೇಕಾದರೆ ಈಗಲೇ ಅಟಲ್ ಪಿಂಚಣಿ ಯೋಜನೆಯನ್ನು ಮಾಡಿಸಬೇಕು ಎಂದು ಮಾಹಿತಿ ನೀಡಿದರು.
ಆರ್ಥಿಕ ಸಮಾಲೋಚಕ ಸಿ.ಜಿ.ಹರೀಶ್ ಮಾತನಾಡಿ, ‘ಪ್ರತಿಯೊಬ್ಬರು ಮರು ಕೆವೈಸಿ ಕಡ್ಡಾಯವಾಗಿ ಮಾಡಿಸಬೇಕಾಗಿದೆ. ಎಲ್ಲರೂ ನಿಮ್ಮ ಖಾತೆ ಇರುವ ಬ್ಯಾಂಕ್‌ಗಳಿಗೆ ತೆರಳಿ ತಮ್ಮ ಗುರುತಿನ ಚೀಟಿ ಆಧಾರ್ ಕಾರ್ಡನ್ನು ನೀಡಿ ಮರು ಕೆವೈಸಿ ಮಾಡಿಸಬೇಕು. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ನಬಾರ್ಡ್‌ನ ಆರ್ಥಿಕ ನೆರವಿನೊಂದಿಗೆ ಕೊಡಗು ಜಿಲ್ಲೆಯಲ್ಲಿ ಅವಾರ್ಡ್ ಸಂಸ್ಥೆಯು ಆರ್ಥಿಕ ಸಾಕ್ಷರತಾ ಕಾರ್ಯಕ್ರಮವನ್ನು ಪ್ರತೀ ತಾಲ್ಲೂಕುಗಳಲ್ಲಿ ಮಾಡುತ್ತಿದ್ದು, ಇದರ ಮುಖ್ಯ ಉದ್ದೇಶವೂ ಕೂಡ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವುದು ಸೈಬರ್ ಅಪರಾಧಗಳ ಬಗ್ಗೆ ಮಾಹಿತಿ ನೀಡುವುದು ಮತ್ತು ಡಿಜಿಟಲ್ ಪೇಮೆಂಟ್‌ಗಳ ಬಗ್ಗೆ ಮಾಹಿತಿ ನೀಡುವುದೇ ಆಗಿದೆ ಎಂದು ತಿಳಿಸಿದರು.
ಕೃಷಿ ಇಲಾಖೆ ಅಧಿಕಾರಿ ಮತಿ ಸುಪರ್ಣ ಅವರು, ಈ ಒಂದು ಕಾರ್ಯಕ್ರಮವು ಅತ್ಯಂತ ಉಪಯುಕ್ತವಾದ ಕಾರ್ಯಕ್ರಮವಾಗಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಇದರ ಪ್ರಯೋಜನ ಪಡೆದುಕೊಳ್ಳುವಂತೆ ತಿಳಿಸಿದರು. ವೇದಿಕೆಯಲ್ಲಿ ಕೃಷಿ ಇಲಾಖೆಯ ಬ್ರಿಜೀತ, ಮೈಮುನ, ಅಂಗನವಾಡಿ ಶಿಕ್ಷಕಿ ಧನಲಕ್ಷಿ, ಹರೀಶ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.