ADVERTISEMENT

ಸೋಮವಾರಪೇಟೆ: 9ನೇ ಕನ್ನಡ ಸಾಹಿತ್ಯ ಸಮ್ಮೆಳನ ಅಧ್ಯಕ್ಷರಾಗಿ ಜಲಜಾ ಶೇಖರ್ ಆಯ್ಕೆ

​ಪ್ರಜಾವಾಣಿ ವಾರ್ತೆ
Published 12 ಜನವರಿ 2026, 6:24 IST
Last Updated 12 ಜನವರಿ 2026, 6:24 IST
ಸಾಹಿತಿ ಜಲಜಾ ಶೇಖರ್  
ಸಾಹಿತಿ ಜಲಜಾ ಶೇಖರ್     

ಸೋಮವಾರಪೇಟೆ: ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಫೆ. 9ರಂದು ಐಗೂರಿನಲ್ಲಿ ನಡೆಸಲು ಉದ್ದೇಶಿಸಿರುವ 9ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸೋಮವಾರಪೇಟೆಯ ಸಾಹಿತಿ ಜಲಜಾ ಶೇಖರ್ ಆಯ್ಕೆಯಾಗಿದ್ದಾರೆ.

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿಯ ಜಿಲ್ಲಾ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಅವರ ಅಧ್ಯಕ್ಷತೆಯಲ್ಲಿ ಪರಿಷತ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಶೈಕ್ಷಣಿಕ, ಸಾಹಿತ್ಯ ಅಲ್ಲದೆ ಸಾಮಾಜಿಕ ಮತ್ತು ಸಹಕಾರ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಇವರು, ಶಿಕ್ಷಕರಾಗಿ ಶೈಕ್ಷಣಿಕ ಕ್ಷೇತ್ರದಲ್ಲಿ ಸುಮಾರು 30 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿಯೂ ಇವರು ಕೆಲಸ ಮಾಡುತ್ತಿದ್ದು, ಇಲ್ಲಿಯವರೆಗೆ ಏಳು ಪುಸ್ತಕಗಳನ್ನು ಹೊರತಂದಿದ್ದು ಇವರ ಎಂಟನೆಯ ಪುಸ್ತಕವು ಸಾಹಿತ್ಯ ಸಮ್ಮೇಳನದಲ್ಲಿ ಬಿಡುಗಡೆಗೊಳ್ಳಲಿದೆ. ವಿಚಾರದೆಡೆಗೆ, ನೆಲಮುಗಿಲು, ಅಗ್ನಿಕುಂಡ, ಪ್ರತೀಕ್ಷ, ವಿಲೋಕನ ವೈಚಾರಿಕ ಲೇಖನಗಳು, ದೂರ ತೀರ ಯಾನ ಪ್ರವಾಸ ಕಥನ, ಕನ್ನಡಿಯ ಬಿಂಬ ಕೃತಿಗಳನ್ನು ರಚಿಸಿದ್ದಾರೆ.

ADVERTISEMENT

ಸೋಮವಾರಪೇಟೆಯ ಅಕ್ಕನ ಬಳಗದ ಅಧ್ಯಕ್ಷರಾಗಿ ಹಲವು ವರ್ಷ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಕೊಡಗು ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಹಲವು ಸಾಹಿತ್ಯ ಸಮ್ಮೇಳನಗಳಲ್ಲಿ ವಿಚಾರ ಮಂಡನೆ, ಕವಿಗೋಷ್ಠಿಗಳಲ್ಲಿ ಭಾಗವಹಿಸಿದ್ದಾರೆ.

ಸಭೆಯಲ್ಲಿ ಕೊಡಗು ಜಿಲ್ಲೆ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಸ್.ಐ ಮುನೀರ್ ಅಹ್ಮದ್, ಗೌರವ ಕೋಶಾಧಿಕಾರಿ ಎಸ್.ಎಸ್. ಸಂಪತ್ ಕುಮಾರ್, ಜಿಲ್ಲಾ ಮಾಜಿ ಅಧ್ಯಕ್ಷ ಟಿ.ಪಿ ರಮೇಶ್, ನಿರ್ದೇಶಕರಾದ ಸಂಜೀವ ಜೋಶಿ, ಮಡಿಕೇರಿ ತಾಲ್ಲೂಕು ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್, ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷ ಎಸ್.ಡಿ ವಿಜೇತ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.