ADVERTISEMENT

ಕೊಡಗು ಉಸ್ತುವಾರಿ ಸಚಿವರ ಕಾರಿಗೆ ಮುತ್ತಿಗೆ; ಎಚ್ಚರಿಕೆ

ಜಿಲ್ಲಾಡಳಿತ ಭವನದ ಮುಂಭಾಗ ಜೆಡಿಎಸ್ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2022, 10:18 IST
Last Updated 29 ನವೆಂಬರ್ 2022, 10:18 IST
ಸರ್ಕಾರದ ವಿರುದ್ಧ ಜೆಡಿಎಸ್‌ ಜಿಲ್ಲಾ ಘಟಕದ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ಸೋಮವಾರ ಮಡಿಕೇರಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು
ಸರ್ಕಾರದ ವಿರುದ್ಧ ಜೆಡಿಎಸ್‌ ಜಿಲ್ಲಾ ಘಟಕದ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ಸೋಮವಾರ ಮಡಿಕೇರಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು   

ಮಡಿಕೇರಿ: ಕೊಡಗಿನಲ್ಲಿ 2018ರ ಪ್ರಕೃತಿ ವಿಕೋಪದ ಸಂತ್ರಸ್ತರಿಗೆ ಕೂಡಲೇ ಮನೆ ನೀಡಬೇಕು ಹಾಗೂ ಹದಗೆಟ್ಟ ಎಲ್ಲ ರಸ್ತೆಗಳನ್ನೂ ದುರಸ್ತಿಪಡಿಸಬೇಕು. ಒಂದು ವೇಳೆ ಈ ಬೇಡಿಕೆಗಳು ಈಡೇರದೇ ಹೋದರೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ ಅವರ ಕಾರಿಗೆ ಮುತ್ತಿಗೆ ಹಾಕಲಾಗುವುದು ಎಂದು ಜೆಡಿಎಸ್ ಜಿಲ್ಲಾ ಎಚ್ಚರಿಕೆ ನೀಡಿದೆ. ಜತೆಗೆ, ನಿರ್ಲಕ್ಷ್ಯ ಧೋರಣೆ ಮುಂದುವರಿದರೆ ಅಹೋರಾತ್ರಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಂ.ಗಣೇಶ್ ಎಚ್ಚರಿಕೆ ನೀಡಿದ್ದಾರೆ.

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಸೋಮವಾರ ‍ಪ್ರತಿಭಟನೆ ನಡೆಸಿದ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕೆ.ನಿಡುಗಣೆಯಲ್ಲಿ ನಿರ್ಮಿಸಲಾಗಿ ರುವ 70 ಮನೆಗಳನ್ನು ಇಲ್ಲಿಯವರೆಗೆ ಹಸ್ತಾಂತರಿಸದೆ ಇರುವುದು ಹಾಗೂ ಎಲ್ಲ ರಸ್ತೆಗಳೂ ಹಾಳಾಗಿರುವುದು ಸರ್ಕಾರದ ನಿರ್ಲಕ್ಷ್ಯ ಎಂದು ಹರಿಹಾಯ್ದರು.

ADVERTISEMENT

ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ನರಸಿಂಹಮೂರ್ತಿ ಮಾತನಾಡಿ, ‘ಸರ್ಕಾರದ ನಿರ್ಲಕ್ಷ್ಯದಿಂದಾಗಿ ಜಿಲ್ಲೆಯ ಎಲ್ಲಾ ರಸ್ತೆಗಳು ಹದಗೆಟ್ಟಿವೆ. ಪ್ರವಾಸಿಗರು ಬರಲು ಹಿಂದೇಟು ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.

ಉಸ್ತುವಾರಿ ಉಮೇಶ್‌ಗೌಡ ಮಾತನಾಡಿ, ‘ಜಿಲ್ಲೆಯನ್ನು ಜ್ವಲಂತ ಸಮಸ್ಯೆಗಳು ಕಾಡುತ್ತಿದ್ದರೂ ಸರ್ಕಾರ ಪರಿಹಾರ ಸೂಚಿಸುತ್ತಿಲ್ಲ. ನೊಂದ ಕುಟುಂಬಗಳಿಗೆ ಮನೆ ನೀಡಲಾಗದ ಸರ್ಕಾರದ ವಿರುದ್ಧ ಜೆಡಿಎಸ್ ಪಕ್ಷ ನಿರಂತರವಾಗಿ ಹೋರಾಟ ನಡೆಸಲಿದೆ’ ಎಂದರು.

ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಮಾತನಾಡಿ, ‘ಬಿಜೆಪಿ ನೇತೃತ್ವದ ಸರ್ಕಾರ ರಾಜಕೀಯ ಲಾಭಕ್ಕಾಗಿ ಸಂತ್ರಸ್ತರ ಬಗ್ಗೆ ನಿರ್ಲಕ್ಷ್ಯ ತೋರುತ್ತಿದೆ. ಜಿಲ್ಲೆಯ ರಸ್ತೆಗಳು ನಿರ್ವಹಣೆ ಇಲ್ಲದೆ ಸಂಪೂರ್ಣ ಹದಗೆಟ್ಟು ಹೋಗಿವೆ. ಮಡಿಕೇರಿ ನಗರಸಭಾ ವ್ಯಾಪ್ತಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು ಆರೋಪಿಸಿದರು.

ಪಕ್ಷದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಎನ್.ಸಿ.ಸುನೀಲ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಪುಷ್ಪಾವತಿ, ಪ್ರಧಾನ ಕಾರ್ಯದರ್ಶಿ ಲೀಲಾಶೇಷಮ್ಮ, ಪ್ರಮುಖರಾದ ಗುಲಾಬಿ ಜನಾರ್ಧನ, ರುಬೀನಾ, ಪಾಣತ್ತಲೆ ವಿಶ್ವನಾಥ್, ಸಿ.ಎಲ್.ವಿಶ್ವ, ಯೂಸುಫ್ ಕೊಂಡಂಗೇರಿ, ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಇಸಾಕ್ ಖಾನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.