ADVERTISEMENT

ಭೂ ಕಬಳಿಕೆ ತಡೆಯಲು ನ್ಯಾಯಮೂರ್ತಿ ಬಿ.ಎ.ಪಾಟೀಲ್ ಸೂಚನೆ

ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮ ಮತ್ತು ಸಂಬಂಧಿಸಿದ ಕಾಯ್ದೆ ಕುರಿತ ಕಾರ್ಯಾಗಾರದಲ್ಲಿ ಹಿರಿಯ ಅಧಿಕಾರಿಗಳು ಭಾಗಿ

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2025, 7:49 IST
Last Updated 6 ಏಪ್ರಿಲ್ 2025, 7:49 IST
ಕಾರ್ಯಾಗಾರದಲ್ಲಿ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ಅಧ್ಯಕ್ಷ ನ್ಯಾಯಮೂರ್ತಿ ಬಿ.ಎ.ಪಾಟೀಲ್ ಮಾತನಾಡಿದರು
ಕಾರ್ಯಾಗಾರದಲ್ಲಿ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ಅಧ್ಯಕ್ಷ ನ್ಯಾಯಮೂರ್ತಿ ಬಿ.ಎ.ಪಾಟೀಲ್ ಮಾತನಾಡಿದರು   

ಮಡಿಕೇರಿ: ಭೂ ಕಬಳಿಕೆ ನಿರಂತರವಾಗಿ ನಡೆದಿದ್ದು, ಅದನ್ನು ತಡೆಯುವುದು ಅತೀ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಸರ್ಕಾರಿ ಭೂಮಿ ಒತ್ತುವರಿ ಮಾಡುವುದು ಅಥವಾ ಭೂಕಬಳಿಕೆ ಆಗದಂತೆ ಗಮನಹರಿಸುವುದು ವಿವಿಧ ಇಲಾಖೆಗಳ ಜವಾಬ್ದಾರಿಯಾಗಿದೆ ಎಂದು ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ಅಧ್ಯಕ್ಷ ನ್ಯಾಯಮೂರ್ತಿ ಬಿ.ಎ.ಪಾಟೀಲ್ ತಿಳಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯಗಳು, ಕಂದಾಯ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕೊಡಗು ಜಿಲ್ಲಾಡಳಿತದ ಸಹಯೋಗದೊಂದಿಗೆ ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮ ಮತ್ತು ಸಂಬಂಧಿಸಿದ ಕಾಯ್ದೆಗಳ ಬಗ್ಗೆ ಶನಿವಾರ ನಡೆದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮ ಮತ್ತು ಸಂಬಂಧಿಸಿದ ಕಾಯ್ದೆಗಳ ಬಗ್ಗೆ ಮಾಹಿತಿ ಪಡೆದು ಸರ್ಕಾರಿ ಭೂಮಿ ಸಂರಕ್ಷಿಸುವತ್ತ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಗಮನಹರಿಸಬೇಕು ಎಂದು ಸೂಚಿಸಿದರು.

ADVERTISEMENT

ಭೂ ಕಬಳಿಕೆ ಅಥವಾ ಒತ್ತುವರಿ ಎಲ್ಲಿ ಮಾಡಿದ್ದಾರೆ. ಅಲ್ಲಿ ಜಗಳ ಇರುತ್ತದೆ. ಸಾಕಷ್ಟು ಕಾನೂನುಗಳಿದ್ದರೂ ಸಹ ಭೂ ಕಬಳಿಕೆ ನಿಂತಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಇತ್ತೀಚಿನ ದಿನಗಳಲ್ಲಿ ಭೂಮಿಯ ಬೆಲೆ ಗಗನಕ್ಕೇರುವುದರಿಂದ ಭೂಮಾಫಿಯ ಹೆಚ್ಚಾಗಿದೆ. ಗೋಮಾಳ, ಕೆರೆಕಟ್ಟೆ, ಹಳ್ಳಕೊಳ್ಳ, ರಾಜ ಕಾಲುವೆ ಸೇರಿದಂತೆ ಎಲ್ಲವನ್ನು ಒತ್ತುವರಿ ಮಾಡುತ್ತಿದ್ದಾರೆ. ಇದನ್ನು ತಡೆಯುವುದು ವಿವಿಧ ಇಲಾಖೆ ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದರು.

ಕರ್ನಾಟಕ ಲ್ಯಾಂಡ್ ರೆವೆನ್ಯೂ ಆಕ್ಟ್ ಸೇರಿದಂತೆ ವಿವಿಧ ಕಾಯ್ದೆಗಳಿದ್ದರೂ ಸಹ ಭೂ ಕಬಳಿಕೆ ನಡೆಯುತ್ತಿದೆ. ಮೂರು ವರ್ಷ ಜೈಲು ಹಾಗೂ ₹ 25 ಸಾವಿರ ದಂಡ ಇದ್ದರೂ ಸಹ ಭೂ ಕಬಳಿಕೆಗೆ ಮುಂದಾಗುತ್ತಿದ್ದಾರೆ. ಒತ್ತುವರಿ ಮಾಡಿರುವ ಅಥವಾ ಭೂ ಕಬಳಿಕೆ ಮಾಡಿರುವ ಆಸ್ತಿಯನ್ನು ಮಾರುತ್ತಾರೆ. ಆ ನಿಟ್ಟಿನಲ್ಲಿ ಕೊಳ್ಳುವವರು ಯೋಚಿಸಬೇಕು. ಜೊತೆಗೆ ಪರಾಮರ್ಶಿಸಬೇಕು. ಸುಮ್ಮನೆ ಏಕಾಏಕಿ ಭೂಮಿ ಕೊಳ್ಳುವುದು ಸರಿಯಲ್ಲ ಎಂದು ಅವರು ಸಲಹೆ ಮಾಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಮಾತನಾಡಿ, ‘ಕುರುಕ್ಷೇತ್ರ ನಡೆದಿರುವುದೇ ಭೂಮಿಗಾಗಿ ಎನ್ನುವುದನ್ನು ಯಾರೂ ಮರೆಯುವಂತಿಲ್ಲ. ಅನಾದಿಕಾಲದಿಂದಲೂ ನೀರು, ಭೂಮಿಗಾಗಿ ಯುದ್ದಗಳೇ ನಡೆದಿವೆ. ಆದ್ದರಿಂದ ಸರ್ಕಾರಿ ಭೂಮಿ ಸಂರಕ್ಷಿಸುವುದು ಅಧಿಕಾರಿಗಳ ಕರ್ತವ್ಯವಾಗಿದೆ’ ಎಂದರು.

ಭಾರತದಲ್ಲಿ ವರ್ಷದಿಂದ ವರ್ಷಕ್ಕೆ ಜನಸಂಖ್ಯೆ ಹೆಚ್ಚಳ ಆಗುತ್ತಿದೆ. ಜೊತೆಗೆ ಜನರಲ್ಲಿ ದುರಾಸೆಯು ಸಹ ಹೆಚ್ಚಾಗಿದೆ. ಆದ್ದರಿಂದ ಭೂ ಕಬಳಿಕೆಯೂ ಸಹ ಅಧಿಕವಾಗುತ್ತಿದೆ. ಆದ್ದರಿಂದ ಸರ್ಕಾರಿ ಭೂಮಿ ಸಂರಕ್ಷಣೆ ಬಗ್ಗೆ ಅಧಿಕಾರಿಗಳು ವಿಶೇಷ ಗಮನಹರಿಸಬೇಕು ಎಂದರು. 

ಕಾವೇರಿ ನದಿ ಪಾತ್ರ ಹಾಗೂ ಮಲೆನಾಡು ಭಾಗದಲ್ಲಿ ಪ್ರಾಕೃತಿಕ ಸಂಪತ್ತು ಸಂರಕ್ಷಿಸುವುದರಿಂದ ಕೋಟ್ಯಾಂತರ ಜನರಿಗೆ ನೀರು ಮತ್ತು ಅನ್ನ ನೀಡಲು ಸಾಧ್ಯವಾಗಿದೆ. ಆದ್ದರಿಂದ ಎಲ್ಲರೂ ಈ ಬಗ್ಗೆ ಯೋಚಿಸಬೇಕು. ಪ್ರಕೃತಿಯನ್ನು ಉಳಿಸಲು ಶ್ರಮಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಕರೆ ನೀಡಿದರು.

ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದ ಜಿಲ್ಲೆಯ ಹಿರಿಯ ಅಧಿಕಾರಿಗಳು

ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ಕಂದಾಯ ಸದಸ್ಯ ಕೆ.ಎಚ್.ಅಶ್ವತ್ಥ ನಾರಾಯಣಗೌಡ ಮಾತನಾಡಿ, ‘ಸರ್ಕಾರಿ ಭೂಮಿ ಒತ್ತುವರಿ ಆಗಿದ್ದಲ್ಲಿ ಅದನ್ನು ತೆರವುಗೊಳಿಸುವುದು ಪ್ರಮುಖ ಕಾರ್ಯವಾಗಿದೆ. ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮ ಸಂಬಂಧಿಸಿದಂತೆ ಸರ್ಕಾರಿ ಭೂಮಿ ಸಂರಕ್ಷಿಸುವಲ್ಲಿ ಅಧಿಕಾರಿಗಳು ದೃಢಸಂಕಲ್ಪ ಮಾಡಬೇಕು. ಈ ಬಗ್ಗೆ ಇಚ್ಛಾಶಕ್ತಿ ಇರಬೇಕು’ ಎಂದು ಹೇಳಿದರು.

ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಹೊಸಮನಿ ಪುಂಡಲೀಕ ಮಾತನಾಡಿ, ‘ಕಾನೂನಿನಲ್ಲಿ ಎರಡು ರೀತಿ ಇದ್ದು, ಒಂದು ಮನುಷ್ಯ ಮಾಡಿದ ಕಾನೂನು, ಇನ್ನೊಂದು ಪ್ರಕೃತಿದತ್ತವಾದ ನಿಯಮಗಳಿದ್ದು, ಸಂವಿಧಾನದ ನಿಯಮಗಳು ಒಂದು ವ್ಯವಸ್ಥೆಯಲ್ಲಿ ಕಾನೂನು ಆಗಿದ್ದು, ಇದನ್ನು ಪ್ರತಿಯೊಬ್ಬರೂ ಪಾಲಿಸುವುದು ಅತ್ಯಗತ್ಯವಾಗಿದೆ’ ಎಂದರು.

ಭೂ ದಾಖಲೆಗಳ ಇಲಾಖೆಯ ಉಪ ನಿರ್ದೇಶಕ ಎಲ್.ನಾರಾಯಣಸ್ವಾಮಿ, ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ಕಂದಾಯ ಸದಸ್ಯ ಎಸ್.ಪಾಲಯ್ಯ, ಹಿರಿಯ ಸಿವಿಲ್ ನ್ಯಾಯಾಧೀಶರಾದ ಶುಭ, ನಗರಸಭೆ ಕಂದಾಯ ಅಧಿಕಾರಿ ಎಂ.ಎ.ತಾಹಿರ್, ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಬಿ.ಭಾಸ್ಕರ್, ಜಗನ್ನಾಥ್, ತಹಶೀಲ್ದಾರರಾದ ಪ್ರವೀಣ್ ಕುಮಾರ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.