ADVERTISEMENT

ಕೊಡಗು: ವಿಧಾನ ಪರಿಷತ್‌ ಚುನಾವಣಾ ಕಣದಿಂದ ಹಿಂದೆ ಸರಿದ ಜೆಡಿಎಸ್‌ ಅಭ್ಯರ್ಥಿ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2021, 13:37 IST
Last Updated 26 ನವೆಂಬರ್ 2021, 13:37 IST
ಇಸಾಕ್‌ ಖಾನ್‌
ಇಸಾಕ್‌ ಖಾನ್‌    

ಮಡಿಕೇರಿ: ವಿಧಾನ ಪರಿಷತ್‌ ಚುನಾವಣೆಗೆ ಕೊಡಗು ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದ ಜೆಡಿಎಸ್‌ ಅಭ್ಯರ್ಥಿ ಇಸಾಕ್‌ ಖಾನ್‌ ಅವರು ಕೊನೆಯ ಕ್ಷಣದಲ್ಲಿ ಕಣದಿಂದ ಹಿಂದೆ ಸರಿದಿದ್ದಾರೆ.

ಶುಕ್ರವಾರ ನಡೆದ ಮಹತ್ವದ ಬೆಳವಣಿಗೆಯಲ್ಲಿ ನಾಮಪತ್ರ ಹಿಂಪಡೆದುಕೊಂಡಿದ್ದಾರೆ. ನಾಮಪತ್ರ ವಾಪಸ್‌ ಪಡೆಯುವಂತೆ ಮಾಡಲು ಕಾಂಗ್ರೆಸ್‌ನ ಸ್ಥಳೀಯ ನಾಯಕರು ಯಶಸ್ವಿಯಾಗಿದ್ದಾರೆ ಎಂಬ ಚರ್ಚೆ ನಡೆಯುತ್ತಿದೆ.

‌ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ, ಕಾಂಗ್ರೆಸ್‌ ಅಭ್ಯರ್ಥಿ ಡಾ.ಮಂಥರ್‌ಗೌಡ ಉಳಿದಿದ್ದು ಇಬ್ಬರ ನಡುವೆ ಪೈಪೋಟಿ ಏರ್ಪಟ್ಟಿದೆ.

ADVERTISEMENT

ನಾಮಪತ್ರ ವಾಪಸ್‌ ಪಡೆಯುವ ಸಂಬಂಧ ವಿಧಾನ ಪರಿಷತ್‌ ಸದಸ್ಯೆ ವೀಣಾ ಅಚ್ಚಯ್ಯ, ವಿಧಾನ ಪರಿಷತ್‌ ಮಾಜಿ ಸದಸ್ಯ ಅರುಣ್‌ ಮಾಚಯ್ಯ ಹಾಗೂ ಮುಖಂಡ ಎಚ್‌.ಎಸ್‌.ಚಂದ್ರಮೌಳಿ ಅವರು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಗಣೇಶ್‌ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದರು. ಕಾಂಗ್ರೆಸ್‌ ಮುಖಂಡರು ನಮ್ಮ ಮೇಲೆ ಒತ್ತಡ ಹಾಕಿದ್ದರು ಎಂದು ಗಣೇಶ್‌ ಅವರು ಸ್ಪಷ್ಟಪಡಿಸಿದ್ದಾರೆ.

ಕಣದಲ್ಲಿ ಉಳಿದರೆ ಬಿಜೆಪಿ ಅಭ್ಯರ್ಥಿಗೆ ಅನುಕೂಲ ಆಗುತ್ತಿತ್ತು. ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆಂದು ನಮ್ಮ ಕಾರ್ಯಕರ್ತರೂ ಟೀಕಿಸುತ್ತಿದ್ದರು. ಹೀಗಾಗಿ, ನಾಮಪತ್ರ ವಾಪಸ್‌ ಪಡೆದುಕೊಂಡೆ ಎಂದು ಇಸಾಕ್‌ ಖಾನ್‌ ಹೇಳಿದರು.

ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಕರೆ ಮಾಡಿ ನಾಮಪತ್ರ ವಾಪಸ್‌ ಪಡೆಯುವಂತೆ ಸೂಚಿಸಿದರು ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.