ADVERTISEMENT

ಕೊಡವ ಲ್ಯಾಂಡ್: ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 27 ಜನವರಿ 2026, 7:52 IST
Last Updated 27 ಜನವರಿ 2026, 7:52 IST
ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಸದಸ್ಯರು ಸೋಮವಾರ ಕೊಡಗು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು
ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಸದಸ್ಯರು ಸೋಮವಾರ ಕೊಡಗು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು   

ಮಡಿಕೇರಿ: ‘ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಮತ್ತು ಆಂತರಿಕ ರಾಜಕೀಯ ಸ್ವ-ನಿರ್ಣಯ ಹಕ್ಕು’ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ (ಸಿಎನ್‌ಸಿ) ಸದಸ್ಯರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಸೋಮವಾರ ಹಕ್ಕೋತ್ತಾಯಗಳನ್ನು ಮಂಡಿಸಿದರು.

ಈ ವೇಳೆ ಮಾತನಾಡಿದ ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ, ‘ಅಂತರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಆದಿಮಸಂಜಾತ ಕೊಡವ ಬುಡಕಟ್ಟಿಗೆ ವಿಶ್ವಸಂಸ್ಥೆಯ ಮಾನ್ಯತೆ ದೊರಕಬೇಕು. ಕೊಡವ ಜನಾಂಗವನ್ನು ನಮ್ಮ ಸಂವಿಧಾನದ ಶೆಡ್ಯೂಲ್ ಪಟ್ಟಿಯಲ್ಲಿ ಸೇರಿಸಬೇಕು’ ಎಂದು ಒತ್ತಾಯಿಸಿದರು.

ಕೊಡವ ಸಂಪ್ರದಾಯಿಕ ಜನಾಂಗೀಯ ‘ಸಂಸ್ಕಾರ ಗನ್’ ಹಕ್ಕುಗಳನ್ನು ಸಿಖ್ಖರ ‘ಕಿರ್ಪಾನ್’ಗೆ ಸಮಾನವಾಗಿ ಸಂವಿಧಾನದ 25 ಮತ್ತು 26ನೇ ವಿಧಿಗಳ ಅಡಿಯಲ್ಲಿ ಧಾರ್ಮಿಕ ಮತ್ತು ಆಧ್ಯಾತ್ಮಿಕ ದಿನ ಬಳಕೆಯ ಅಂಶವಾಗಿ ರಕ್ಷಿಸಬೇಕು ಎಂದು ಆಗ್ರಹಿಸಿದರು.

ADVERTISEMENT

ಕೊಡವ ಭಾಷೆಯನ್ನು ಸಂವಿಧಾನದ 8ನೇ ಶೆಡ್ಯೂಲ್‌ಗೆ ಸೇರಿಸಿ, ಪಠ್ಯಕ್ರಮ ಮತ್ತು ಆಡಳಿತದಲ್ಲಿ ಪರಿಚಯಿಸಬೇಕು ಎಂದು ಮನವಿ ಮಾಡಿದರು.

ಕೊಡವ ಜಾನಪದ ಪರಂಪರೆಯನ್ನು ಯುನೆಸ್ಕೋದ ಅಮೂರ್ತ ಸಾಂಸ್ಕೃತಿಕ ಪರಂಪರೆಯ ಪಟ್ಟಿಯಲ್ಲಿ ಸೇರಿಸಬೇಕು. ಕೊಡವ ಜಾನಪದ ಪರಂಪರೆಯನ್ನು ಜೀವಂತಗೊಳಿಸಲು, ವಿಶ್ವ ಕೊಡವಾಲಜಿ ಸಂಶೋಧನಾ ಕೇಂದ್ರ ಮತ್ತು ಕೊಡವ ಸುಧಾರಿತ ಅಧ್ಯಯನ ಕೇಂದ್ರವನ್ನು ಸ್ಥಾಪಿಸಲು ಸರ್ಕಾರವು ಭೂಮಿ ನೀಡಬೇಕು ಎಂದು ಒತ್ತಾಯಿಸಿದರು.

ಬಳಿಕ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಿದರು.

ಕಲಿಯಂಡ ಮೀನಾ ಪ್ರಕಾಶ್, ಬೊಪ್ಪಂಡ ಬೊಳ್ಳಮ್ಮ ನಾಣಯ್ಯ, ಪುಲ್ಲೇರ ಸ್ವಾತಿ ಕಾಳಪ್ಪ, ಚೋಳಪಂಡ ಜ್ಯೋತಿ ನಾಣಯ್ಯ, ಪಟ್ಟಮಾಡ ಲಲಿತಾ ಗಣಪತಿ, ಮುದ್ದಿಯಡ ಲೀಲಾವತಿ, ಪಚ್ಚಾರಂಡ ಶಾಂತಿ ಪೊನ್ನಪ, ಸರ್ವಶ್ರೀ ಕಲಿಯಂಡ ಪ್ರಕಾಶ್, ಪುಲ್ಲೇರ ಕಾಳಪ್ಪ, ಅಜ್ಜಿಕುಟ್ಟೀರ ಲೋಕೇಶ್, ಕಿರಿಯಮಾಡ ಶೆರಿನ್, ಬೊಟ್ಟಂಗಡ ಗಿರೀಶ್ ಪೆಮ್ಮಯ್ಯ, ಮಂದಪಂಡ ಮನೋಜ್ ಮಂದಣ್ಣ, ಮಣವಟ್ಟಿರ ಚಿಣ್ಣಪ್ಪ, ಕೂಪದಿರ ಸಾಬು, ನಂದೇಟ್ಟಿರ ರವಿ ಸುಬ್ಬಯ್ಯ, ಚಂಙಂಡ ಚಾಮಿ ಪಳಂಗಪ್ಪ, ನಂದಿನೆರವಂಡ ವಿಜು, ಚೋಳಪಂಡ ನಾಣಯ್ಯ, ಮೇದುರ ಕಂಠಿನಾಣಿಯಪ್ಪ, ತೋಲಂಡ ಸೋಮಯ್ಯ, ಅವರೇಮಾದಂಡ ಚೆಂಗಪ್ಪ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.