ರಾಷ್ಟ್ರೀಯ ಗ್ರಾಹಕರ ದಿನಾಚರಣೆಯಲ್ಲಿ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯೆ ಗೌರಮ್ಮಣಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ಆಯೋಗದ ಜಿಲ್ಲಾಧ್ಯಕ್ಷೆ ಡಾ ರೇಣುಕಾಂಭ, ಇಲಾಖೆಯ ಜಂಟಿ ನಿರ್ದೇಶಕಿ ಕುಮುದಾ ಶರತ್ , ಕೆ.ಪ್ರಕಾಶ್ ಭಾಗವಹಿಸಿದ್ದರು.
ಕುಶಾಲನಗರ: ಗ್ರಾಹಕರ ಹಕ್ಕುಗಳ ರಕ್ಷಣೆ ಎಲ್ಲರ ಹೊಣೆಯಾಗಿದೆ. ಗ್ರಾಹಕರು ತಮ್ಮ ಹಕ್ಕುಗಳು ಹಾಗೂ ಜವಾಬ್ದಾರಿಗಳ ಬಗ್ಗೆ ಹೆಚ್ಚಿನ ಜ್ಞಾನ ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾ ಗ್ರಾಹಕ ವ್ಯಾಜ್ಯ ಪರಿಹಾರ ಆಯೋಗದ ಸದಸ್ಯೆ ಗೌರಮ್ಮಣಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ಆಯೋಗ ಹಾಗೂ ಕುಶಾಲನಗರದ ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರದ ಆಶ್ರಯದಲ್ಲಿ ಕೂಡಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಗುರುವಾರ ಏರ್ಪಡಿಸಿದ್ದ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಹಕರು ಅಂದರೆ ನಾವೆಲ್ಲರೂ, ನಾವು ಇಂದು ನಮ್ಮ ಗ್ರಾಹಕ ಹಕ್ಕುಗಳ ಬಗ್ಗೆ ತಿಳಿಯುವುದು ಬಹಳ ಮುಖ್ಯವಾಗುತ್ತದೆ. ಖರೀದಿದಾರನ ಯೋಗಕ್ಷೇಮದ ದೃಷ್ಟಿಯಲ್ಲಿ ಗ್ರಾಹಕ ಹಕ್ಕುಗಳ ಅವಶ್ಯಕತೆ ಇದೆ. ಗ್ರಾಹಕ ಹಕ್ಕುಗಳ ತಿಳಿದಿರದೇ ಇರುವುದು ಕೂಡ ನಮಗೆ ಒಳಿತಲ್ಲ. ಜನ ದುರುಪಯೋಗ ಪಡಿಸಿಕೊಳ್ಳಬಹುದು. ಗ್ರಾಹಕರ ರಕ್ಷಣೆ ಸಮಾಜದ ಧ್ವನಿಯಾದಾಗ ಮಾತ್ರ ಗ್ರಾಹಕರ ಸಂರಕ್ಷಣೆ ಸಾಧ್ಯ ಎಂದು ಗೌರಮ್ಮಣಿ ಹೇಳಿದರು.
ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷೆ ಡಾ ರೇಣುಕಾಂಬಾ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರತಿವರ್ಷ ಡಿಸೆಂಬರ್ 24ರಂದು ರಾಷ್ಟ್ರೀಯ ಗ್ರಾಹಕ ಹಕ್ಕುಗಳ ದಿನ ಎಂದು ಆಚರಿಸಲಾಗುತ್ತದೆ. ಗ್ರಾಹಕ ಹಕ್ಕುಗಳ ಅರಿವು, ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವುದು ಮುಖ್ಯವಾಗುತ್ತದೆ ಎಂದರು. ಗ್ರಾಹಕರು ಯಾವುದೇ ವಸ್ತು, ಸರಕುಗಳನ್ನು ಖರೀದಿಸುವ ಸಂದರ್ಭದಲ್ಲಿ ಆ ವಸ್ತುವಿನ ಗುಣಮಟ್ಟ, ಅವಧಿ ಮುಂತಾಗಿ ಪರಿಶೀಲಿಸಿ ಕಡ್ಡಾಯವಾಗಿ ರಸೀತು ಪಡೆದುಕೊಳ್ಳಬೇಕು.
ಖರೀದಿಸಿದ ವಸ್ತುವಿನ ಗುಣಮಟ್ಟ ಕಳಪೆ ಮತ್ತು ದೋಷಪೂರಿತವಾಗಿದ್ದಲ್ಲಿ ಗ್ರಾಹಕರು ರಶೀದಿಯೊಂದಿಗೆ ಗ್ರಾಹಕರ ಆಯೋಗಕ್ಕೆ ದೂರು ಸಲ್ಲಿಸಿದರೆ ಗ್ರಾಹಕರಿಗೆ ಕಾನೂನಿನಡಿ ಸೂಕ್ತ ಪರಿಹಾರ ಒದಗಿಸಲು ಸಾಧ್ಯವಾಗುತ್ತದೆ ಎಂದು ರೇಣುಕಾಂಬಾ ತಿಳಿಸಿದರು.
ಜಿಲ್ಲಾ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕಿ ಕುಮುದಾ ಶರತ್, ಗ್ರಾಹಕರ ಹಕ್ಕುಗಳು ಹಾಗೂ ಜವಾಬ್ದಾರಿ ಕುರಿತು ಮಾಹಿತಿ ನೀಡಿದರು. ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಕುರಿತು ಉಪನ್ಯಾಸ ನೀಡಿದರು.
ಮೊರಾರ್ಜಿ ಶಾಲೆಯ ಪ್ರಾಂಶುಪಾಲ ಕೆ. ಪ್ರಕಾಶ್, ಕುಶಾಲನಗರದ ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರದ ಕೋಶಾಧಿಕಾರಿ ಕೆ.ಎಂ.ಗಿರೀಶ್, ಕೂಡಿಗೆ ಸರ್ಕಾರಿ ಪಿಯು ಕಾಲೇಜು ಅಭಿವೃದ್ಧಿ ಸಮಿತಿಯ ಮಾಜಿ ಅಧ್ಯಕ್ಷ ಕೆ.ಕೆ.ನಾಗರಾಜಶೆಟ್ಟಿ , ನ್ಯಾಯಬೆಲೆ ಅಂಗಡಿಗಳ ಪ್ರಮುಖರು ಇಲಾಖೆಯ ಅಧಿಕಾರಿಗಳು, ನಾಗರಿಕರು ಸಿಬ್ಬಂದಿ, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.