ADVERTISEMENT

ಕುಶಾಲನಗರ | ವಿಶ್ವಮಾನವ ಸಂದೇಶ ಸಾರ್ವಕಾಲಿಕ: ಪ್ರೊ.ಅಶೋಕ ಸಂಗಪ್ಪ ಆಲೂರ

​ಪ್ರಜಾವಾಣಿ ವಾರ್ತೆ
Published 6 ಜನವರಿ 2026, 5:28 IST
Last Updated 6 ಜನವರಿ 2026, 5:28 IST
ಕುಶಾಲನಗರ ಸಮೀಪದ ಚಿಕ್ಕ ಅಳುವಾರ ಕೊಡಗು ವಿಶ್ವವಿದ್ಯಾಲಯದ ಜ್ಞಾನಕಾವೇರಿ ಆವರಣದಲ್ಲಿ ನಡೆದ ವಿಶ್ವಮಾನವ ಕುವೆಂಪು ಅವರ ಜನ್ಮೋತ್ಸವ ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಅಶೋಕ ಸಂಗಪ್ಪ ಆಲೂರ ಮಾತನಾಡಿದರು
ಕುಶಾಲನಗರ ಸಮೀಪದ ಚಿಕ್ಕ ಅಳುವಾರ ಕೊಡಗು ವಿಶ್ವವಿದ್ಯಾಲಯದ ಜ್ಞಾನಕಾವೇರಿ ಆವರಣದಲ್ಲಿ ನಡೆದ ವಿಶ್ವಮಾನವ ಕುವೆಂಪು ಅವರ ಜನ್ಮೋತ್ಸವ ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಅಶೋಕ ಸಂಗಪ್ಪ ಆಲೂರ ಮಾತನಾಡಿದರು   

ಕುಶಾಲನಗರ: ‘ಜಗದ ಕವಿ, ಯುಗದ ಕವಿ ಕುವೆಂಪು ಅವರು ಸಾಹಿತ್ಯ ಕ್ಷೇತ್ರದಲ್ಲಿ ವೈಚಾರಿಕತೆ ಬಿತ್ತಿದ ಮಹಾನ್‌ ಚೇತನ’ ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಅಶೋಕ ಸಂಗಪ್ಪ ಆಲೂರ ಹೇಳಿದರು.

ಸಮೀಪದ ಚಿಕ್ಕ ಅಳುವಾರದಲ್ಲಿನ ಕೊಡಗು ವಿಶ್ವವಿದ್ಯಾಲಯದ ಜ್ಞಾನಕಾವೇರಿ ಆವರಣದಲ್ಲಿ ಸೋಮವಾರ ಕನ್ನಡಸಿರಿ ಸ್ನೇಹ ಬಳಗ, ನಾಡಪ್ರಭು ಪತ್ತಿನ ಸಹಕಾರ ಸಂಘದ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ವಿಶ್ವಮಾನವ ಕುವೆಂಪು ಅವರ ಜನ್ಮೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕುವೆಂಪು ಅವರ ವಿಶ್ವ ಮಾನವ ಸಂದೇಶ ಸಾರ್ವಕಾಲಿಕವಾಗಿದೆ. ಮಾನವ ವಿಕಾಸದ ಹಾದಿಯಲ್ಲಿ ಆಯಾ ಕಾಲದ ಅಗತ್ಯ ಪೂರೈಸಲು ಮಹಾಪುರುಷರು ಜನಿಸಿ ಹೋಗಿದ್ದಾರೆ. ಮನಷ್ಯರನ್ನು ಕೂಡಿ ಬಾಳಿಸಬೇಕು ಎಂಬ ಉದ್ದೇಶದಿಂದ ಹುಟ್ಟಿಕೊಂಡ ವಿಶ್ವಮಾನವ ಸಂದೇಶದ ಪರಿಕಲ್ಪನೆ ಜಾತಿ, ಮತ, ಧರ್ಮಗಳನ್ನು ಮೀರಿದ್ದಾಗಿದೆ. ಅವರ ವಿಚಾರಧಾರೆಗಳನ್ನು ವಿದ್ಯಾರ್ಥಿಗಳು ಅರ್ಥೈಸಿಕೊಳ್ಳಬೇಕು. ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ADVERTISEMENT

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಶಾಲನಗರದ ನಾಡಪ್ರಭು ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಂ.ಕೆ.ದಿನೇಶ್ ಮಾತನಾಡಿ, ‘ಮನುಜಮತ, ವಿಶ್ವಪಥ, ಸರ್ವೋದಯ, ಸಮನ್ವಯ, ಪೂರ್ಣದೃಷ್ಟಿ ಈ ಪಂಚಮಂತ್ರ ಮುಂದಿನ ಪೀಳಿಗೆಯ ದಾರಿದೀಪವಾಗಬೇಕು’ ಎಂದರು.

ಲೇಖಕ ಕಣಿವೆ ಭಾರದ್ವಾಜ ಕೆ.ಆನಂದತೀರ್ಥ, ರಾಷ್ಟ್ರಕವಿ ಕುವೆಂಪುರವರ ಸಮಗ್ರ ಸಾಹಿತ್ಯ ಕುರಿತು ಉಪನ್ಯಾಸ ನೀಡಿದರು. ಕನ್ನಡಸಿರಿ ಸ್ನೇಹ ಬಳಗದ ಅಧ್ಯಕ್ಷ ಲೋಕೇಶ್ ಸಾಗರ್ ಮಾತನಾಡಿದರು.

ಕುಶಾಲನಗರದ ರೋಟರಿ ಸದಸ್ಯ ಎಂ.ಡಿ.ರಂಗಸ್ವಾಮಿ, ಪುರಸಭೆ ಮಾಜಿ ನಮನಿರ್ದೇಶಿತ ಸದಸ್ಯ ಎಂ.ಎಂ.ಪ್ರಕಾಶ್, ಕನ್ನಡ ಸಿರಿ ಸ್ನೇಹ ಬಳಗದ ಕೆ.ಕೆ.ನಾಗರಾಜಶೆಟ್ಟಿ, ನಿವೃತ್ತ ಶಿಕ್ಷಕರಾದ ಉ.ರಾ.ನಾಗೇಶ್, ಖಾನ್ ಮಾಸ್ಟರ್, ಎಚ್.ಎಸ್.ಲೋಕೇಶ್, ವಿಶ್ವವಿದ್ಯಾಲಯದ ಕನ್ನಡ ಪ್ರಾಧ್ಯಾಪಕ ಜಮೀರ್ ಅಹಮ್ಮದ್, ವಿವಿಧ ವಿಭಾಗಗಳ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು, ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Cut-off box - ರಸಪ್ರಶ್ನೆ ಸ್ಪರ್ಧೆ ವಿಶ್ವಮಾನವ ಕುವೆಂಪು ಅವರ ಜನ್ಮೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನಿವೃತ್ತ ಶಿಕ್ಷಕ ಉ.ರಾ.ನಾಗೇಶ್ ರಸಪ್ರಶ್ನೆ ಕಾರ್ಯಕ್ರಮ ನಡೆಸಿಕೊಟ್ಟರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.