ADVERTISEMENT

ಮಡಿಕೇರಿ: ಕೇಂದ್ರದ ವಿರುದ್ಧ ಜಿಲ್ಲೆಯಲ್ಲಿ ವ್ಯಾಪಕ ಆಕ್ರೋಶ

ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಕೈಬಿಡಲು ವಿವಿಧ ಸಂಘಟನೆಗಳ ಒತ್ತಾಯ, ಹಲವೆಡೆ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 10 ಜುಲೈ 2025, 2:45 IST
Last Updated 10 ಜುಲೈ 2025, 2:45 IST
ಕುಶಾಲನಗರದಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸಿಐಟಿಯು ಸಂಘಟನೆ ನೇತೃತ್ವದಲ್ಲಿ ವಿವಿಧ ಕಾರ್ಮಿಕ ಸಂಘಟನೆಗಳ ನೌಕರರು ಬುಧವಾರ ಪ್ರತಿಭಟನೆ ನಡೆಸಿದರು.
ಕುಶಾಲನಗರದಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸಿಐಟಿಯು ಸಂಘಟನೆ ನೇತೃತ್ವದಲ್ಲಿ ವಿವಿಧ ಕಾರ್ಮಿಕ ಸಂಘಟನೆಗಳ ನೌಕರರು ಬುಧವಾರ ಪ್ರತಿಭಟನೆ ನಡೆಸಿದರು.   

ಮಡಿಕೇರಿ: ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಕರೆ ನೀಡಲಾಗಿದ್ದ ಅಖಿಲ ಭಾರತ ಮುಷ್ಕರಕ್ಕೆ ಕೊಡಗು ಜಿಲ್ಲೆಯಲ್ಲೂ ವ್ಯಾಪಕ ಬೆಂಬಲ ವ್ಯಕ್ತವಾಯಿತು.

ಸಿಐಟಿಯು ಹಾಗೂ ಯುನೈಟೆಡ್ ಪ್ಲಾಂಟೇಷನ್ ವರ್ಕರ್ಸ್ ಯೂನಿಯನ್ (ಎಐಯುಟಿಸಿ) ಸಂಘಟನೆಗಳು ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದವು.

ಸಿಐಟಿಯು ಸಂಘಟನೆ ಸದಸ್ಯರು ಕುಶಾಲನಗರ ಹಾಗೂ ವಿರಾಜಪೇಟೆಯಲ್ಲಿ, ಯುನೈಟೆಡ್ ಪ್ಲಾಂಟೇಷನ್ ವರ್ಕರ್ಸ್ ಯೂನಿಯನ್ (ಎಐಯುಟಿಸಿ) ಸಮಿತಿ ಸದಸ್ಯರು ಸೋಮವಾರಪೇಟೆಯಲ್ಲಿ ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗೆ ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ಸಿಐಟಿಯು ಆಕ್ರೋಶ

ಕುಶಾಲನಗರ: ದೇಶದ ಸಂಪತ್ತಾದ ಸಾರ್ವಜನಿಕ ವಲಯದ ಉದ್ದಿಮೆಗಳ ಖಾಸಗೀಕರಣ ಹಾಗೂ ನಗದೀಕರಣ ನಿಲ್ಲಿಸಬೇಕು ಎಂಬಿತ್ಯಾದಿ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಬುಧವಾರ ಪಟ್ಟಣದಲ್ಲಿ ಸಿಐಟಿಯು ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಸಿಐಟಿಯು ಕಾರ್ಮಿಕ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ‌ ಪಿ.ಆರ್.ಭರತ್ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ನೂರಾರು ಕಾರ್ಮಿಕರು ಇಲ್ಲಿನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಜಮಾಯಿಸಿ ಮಳೆಯ ನಡುವೆಯೇ ಪ್ರತಿಭಟನೆ ನಡೆಸಿದರು.

ಕಾರ್ಮಿಕರನ್ನು ಗುಲಾಮಗಿರಿಗೆ ತಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ‌ ಸರ್ಕಾರಕ್ಕೆ ದಿಕ್ಕಾರ, ದಿಕ್ಕಾರ, ನಾಲ್ಕು ಕಾರ್ಮಿಕ ಸಹಿಂತೆಗಳನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿದರು.

ಕಾರ್ಯಪ್ಪ ವೃತ್ತದಿಂದ ರಥಬೀದಿ ಮೂಲಕ ತಹಶೀಲ್ದಾರ್ ಕಚೇರಿವರೆಗೆ ಪ್ರತಿಭಟನಾ‌ ಮೆರವಣಿಗೆ ನಡೆಸಿದ ಕಾರ್ಮಿಕರು ತಹಶೀಲ್ದಾರ್ ಕಚೇರಿ ಮುಂದೆ ಕೂಡ ಕೆಲಕಾಲ ಪ್ರತಿಭಟನೆ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಅಂಗನವಾಡಿ, ಬಿಸಿಯೂಟ, ಆಶಾ ಮುಂತಾದ ನೌಕರರಿಗೆ ಕನಿಷ್ಠ ವೇತನ ಕಾಯ್ದೆ ಕಾರಿಯಾಗಬೇಕು. ಗುತ್ತಿಗೆ ಮುಂತಾದ ‌ಕಾಯಂಯೇತರ ನೌಕರರ ಕಾಯಂಗೆ ಶಾಸನ ರೂಪಿಸಬೇಕು ಎಂದು ಒತ್ತಾಯಿಸಿದರು.

ಗುತ್ತಿಗೆ ನೌಕರರ ಮೇಲೆ‌ ಆಗುತ್ತಿರುವ ಶೋಷಣೆ ತಡೆಯಬೇಕು. ಕೃಷಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿಪಡಿಸುವ ಶಾಸನ ರೂಪಿಸಬೇಕು. ಕೃಷಿ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಯಿಂದ ಹೊರಗಿಡಬೇಕು. ಫಲವತ್ತಾದ ಕೃಷಿ ಭೂಮಿಯ ಬಲವಂತದ ಭೂಸ್ವಾಧೀನ ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ತಹಶೀಲ್ದಾರ್ ಕಿರಣ್ ಗೌರಯ್ಯ ಅವರ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ‌ ಪತ್ರ ಸಲ್ಲಿಸಲಾಯಿತು.

ಈ ವೇಳೆ ಕರ್ನಾಟಕ ಪ್ರಾಂತ್ಯ ರೈತ ಸಂಘದ ಮುಖಂಡ ಟಿ.ಟಿ.ಉದಯಕುಮಾರ್, ಅಂಗನವಾಡಿ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಮುನಾ, ತಾಲ್ಲೂಕು ಅಧ್ಯಕ್ಷೆ ಸಾವಿತ್ರಿ, ಕಾರ್ಯದರ್ಶಿ ಚಂದ್ರಿಕಾ, ಮಡಿಕೇರಿ ತಾಲ್ಲೂಕು ಘಟಕದ ಅಧ್ಯಕ್ಷೆ ಯಶೋಧಾ, ಬಿಸಿ ಊಟ ನೌಕರರ ಸಂಘದ ಕುಶಾಲನಗರ ತಾಲ್ಲೂಕು ಘಟಕದ ಅಧ್ಯಕ್ಷೆ ರಾಣಿ, ಮಡಿಕೇರಿ ತಾಲ್ಲೂಕು ಘಟಕದ ಅಧ್ಯಕ್ಷೆ ಲಲಿತಾಮ್ಮ, ಆದಿವಾಸಿ ಮುಖಂಡ ರಘು, ಅಮಾಲಿ ಕಾರ್ಮಿಕ ಸಂಘಟನೆಯ ಗಿರೀಶ್, ಕಟ್ಟಡ ಕಾರ್ಮಿಕರ ಸಂಘದ ಯೋಗೇಶ್, ಪ್ಲಾಂಟೇಷನ್ ಸಂಘದ ಕೃಷ್ಣಕುಮಾರ್, ಸಿಐಟಿಯು ಜಯಣ್ಣ ಮತ್ತು ಮಂಜುನಾಥ್ ಪಾಲ್ಗೊಂಡಿದ್ದರು.

ಸೋಮವಾರಪೇಟೆ ಪಟ್ಟಣದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಯುನೈಟೆಡ್ ಪ್ಲಾಂಟೇಷನ್ ವರ್ಕರ್ಸ್ ಯೂನಿಯನ್ (ಎಐಯುಟಿಸಿ) ಸಮಿತಿಯ ಸದಸ್ಯರು ಪ್ರತಿಭಟನಾ ಮೆರವಣಿಗೆ ನಡೆಸಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ವಿರಾಜಪೇಟೆ ಪಟ್ಟಣದಲ್ಲಿ ಬುಧವಾರ ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಯನ್ನು ವಿರೋಧಿಸಿ ಸಿಐಟಿಯು ಸೇರಿದಂತೆ ವಿವಿಧ ಕಾರ್ಮಿಕ ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಸಲಾಯಿತು
ಹಾರಾಡಿದ ಕೆಂಬಾವುಟಗಳು, ಕೇಳಿ ಬಂದವು ಘೋಷಣೆಗಳು | ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಧ್ವನಿ | ಕಾರ್ಮಿಕ ವಿರೋಧಿ ಕಾಯ್ದೆ ವಾಪಸ್‌ಗೆ ಒಕ್ಕೊರಲ ಒತ್ತಾಯ

ಕಾರ್ಮಿಕರನ್ನು ಗುಲಾಮರನ್ನಾಗಿಸುತ್ತಿರುವ ಸರ್ಕಾರ: ದುರ್ಗಾಪ್ರಸಾದ್ ಆಕ್ರೋಶ

ವಿರಾಜಪೇಟೆ: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಯನ್ನು ವಿರೋಧಿಸಿ ಬುಧವಾರ ಸಿಐಟಿಯು ಸೇರಿದಂತೆ ವಿವಿಧ ಕಾರ್ಮಿಕ ಸಂಘಟನೆಗಳ ವತಿಯಿಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಯಿತು.

ಪ್ರತಿಭಟನಕಾರರು ಆರಂಭದಲ್ಲಿ ಪಟ್ಟಣದ ಮಾರಿಯಮ್ಮ ದೇವಾಲಯ ಬಳಿಯಿಂದ ಮೆರವಣಿಗೆಯಲ್ಲಿ ಸಾಗಿ ಗಡಿಯಾರ ಕಂಬದ ಬಳಿ ಪ್ರತಿಭಟನೆ ನಡೆಸಿ, ಬಳಿಕ ಕಾರು ನಿಲ್ದಾಣದಲ್ಲಿ ಜಮಾವಣೆಗೊಂಡರು.

ಹಿರಿಯ ಹೋರಾಟಗಾರ ಡಾ.ದುರ್ಗಾಪ್ರಸಾದ್ ಮಾತನಾಡಿ, ‘ಕೇಂದ್ರ ಸರ್ಕಾರವು ಕೆಲಸದ ಅವಧಿ, ಕಾಯಂ ಕೆಲಸ, ಕೆಲಸಕ್ಕೆ ತಕ್ಕ ವೇತನ, ಸುರಕ್ಷತೆ, ಮುಷ್ಕರದ ಹಕ್ಕು ಇನ್ನಿತರ ಹಕ್ಕುಗಳನ್ನು ಸರ್ಕಾರ ಇಲ್ಲವಾಗಿಸಿ ಕಾರ್ಮಿಕರನ್ನು ಗುಲಾಮರನ್ನಾಗಿಸುತ್ತಿದೆ’ ಎಂದು ಕಿಡಿಕಾರಿದರು.

‘ಕಾರ್ಮಿಕರಿಗೆ ಕನಿಷ್ಠ ವೇತನ ನಿಗದಿಪಡಿಸಬೇಕು. ಸಮಾನ ಕೆಲಸಕ್ಕೆ ಸಮಾನ ವೇತನ ಜಾರಿ ಮಾಡಬೇಕು. ಕಾರ್ಮಿಕರಿಗೆ ಕನಿಷ್ಠ ಮಾಸಿಕ ₹ 9 ಸಾವಿರ ಪಿಂಚಣಿ ಹಾಗೂ ಸಾಮಾಜಿಕ ಭದ್ರತೆಯನ್ನು ಖಾತರಿಪಡಿಸಬೇಕು. ಹಳೆಯ ಪಿಂಚಣಿ ಯೋಜನೆಯನ್ನು ಮರು ಸ್ಥಾಪಿಸಬೇಕು. ರೈತರ ಒಪ್ಪಿಗೆಯಿಲ್ಲದೆ ಬಲವಂತದ ಭೂಸ್ವಾಧೀನ ಹಾಗೂ ಮೂರು ಕರಾಳ ಕೃಷಿ ಕಾಯ್ದೆ ತಿದ್ದುಪಡಿಗಳನ್ನು ಸರ್ಕಾರ ಹಿಂಪಡೆಯಬೇಕು’ ಎಂದು ಒತ್ತಾಯಿಸಿದರು.

ಸಿಐಟಿಯು ಪ್ರಧಾನ ಕಾರ್ಯದರ್ಶಿ ಎ.ಸಿ.ಸಾಬು ಮಾತನಾಡಿ, ‘ಕೇಂದ್ರ ಸರಕಾರವು ಕಾರ್ಮಿಕ ನೀತಿಗಳಿಗೆ ವಿರುದ್ದವಾಗಿ ಕಾನೂನುಗಳನ್ನು ಜಾರಿಗೆ ತಂದಿದೆ. ಬೆಲೆ ಏರಿಕೆಯಿಂದಾಗಿ ಕಾರ್ಮಿಕರ ಬದುಕು ಶೋಚನೀಯ ಸ್ಥಿತಿಗೆ ತಲುಪಿದ್ದಾರೆ. ಸುಮಾರು 70 ವರ್ಷಗಳಿಂದ ಕಾರ್ಮಿಕರಿಗೆ ನಿಗದಿಗೊಳಿಸಿರುವ ದುಡಿಮೆಯ ಸಮಯ 8 ಗಂಟೆ, ಆದರೆ ಇದೀಗ ಕೇಂದ್ರ ಸರ್ಕಾರವು 8ರ ಬದಲು 12 ಗಂಟೆ ದುಡಿಯುವಂತೆ ಕಾನೂನು ಜಾರಿಗೆ ತಂದಿದೆ. ಸರ್ಕಾರವು ಕಾರ್ಮಿಕರ ಶ್ರೇಯಸ್ಸು ಕಾಯುವ ಬದಲು ಕಾರ್ಪೋರೇಟ್ ಸಂಸ್ಥೆಗಳಿಗೆ ಲಾಭ ತರಲು ಹೊರಟಿದೆ ಎಂದು ಹರಿಹಾಯ್ದರು.

ಸಿಐಟಿಯು ಪದಾಧಿಕಾರಿಗಳಾದ ಎನ್.ಡಿ ಕುಟ್ಟಪ್ಪ, ಎ.ಮಹಾದೇವ, ಶಾಜಿ ರಮೇಶ್, ರಾಚಪ್ಪಜಿ, ಪುಷ್ಪಾ, ಹರಿದಾಸ್, ಸುನೀಲ್, ಮಣಿ, ಅಂಗನವಾಡಿ ನೌಕರರ ಸಂಘಟನೆಯ ಜಿಲ್ಲಾಧ್ಯಕ್ಷೆ ಸುಮಿತ್ರಾ, ತಾಲ್ಲೂಕು ಅಧ್ಯಕ್ಷೆ ಶೀಲಾ, ಬಿಸಿಯೂಟ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಕುಸುಮಾ, ಪೊನ್ನಂಪೇಟೆ ಅಧ್ಯಕ್ಷೆ ಜಯಂತಿ, ತೋಟ ಕಾರ್ಮಿಕರ ಸಂಘಟನೆಯ ಜಿಲ್ಲಾಧ್ಯಕ್ಷೆ ಪುಷ್ಪಾ, ಜನರಲ್ ವರ್ಕರ್ಸ್ ಯೂನಿಯನ್ ಜಿಲ್ಲಾ ಅಧ್ಯಕ್ಷ ಎಚ್.ಬಿ.ರಮೇಶ್, ಜನವಾದಿ ಮಹಿಳಾ ಸಂಘಟನೆ ಜಿಲ್ಲಾ ಸಂಚಾಲಕಿ ಪದ್ಮಿನಿ ಶ್ರೀಧರ್ ಭಾಗವಹಿಸಿದ್ದರು.

ಸರ್ಕಾರದಿಂದ ಕಾರ್ಮಿಕ ವಿರೋಧಿ ನೀತಿ: ನಿರ್ವಾಣಪ್ಪ 

ಸೋಮವಾರಪೇಟೆ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಯುನೈಟೆಡ್ ಪ್ಲಾಂಟೇಷನ್ ವರ್ಕರ್ಸ್ ಯೂನಿಯನ್ (ಎಐಯುಟಿಸಿ) ಸಮಿತಿ ನೇತೃತ್ವದಲ್ಲಿ ಬುಧವಾರ ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು.

ದಲಿತ ಪರ ಸಂಘಟನೆಗಳ ಮುಖಂಡ ಡಿ.ಎಸ್.ನಿರ್ವಾಣಪ್ಪ ಮಾತನಾಡಿ, ‘ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಾರ್ಮಿಕರು ಹಾಗೂ ಜನವಿರೋಧಿ ನೀತಿಯನ್ನು ಅನುಸರಿಸುವ ಮೂಲಕ ಕಾರ್ಮಿಕರ ಶೋಷಣೆ ಮಾಡುತ್ತಿದೆ’ ಎಂದು ದೂರಿದರು.

‘ಕಾರ್ಮಿಕರು ಈ ದೇಶದ ಪ್ರಜೆಗಳು. ಅವರೂ ತೆರಿಗೆ ಕಟ್ಟುತ್ತಾರೆ. ಅವರಿಗೂ ಭೂಮಿ ಪಡೆಯುವ ಹಕ್ಕಿದೆ. ಕೂಡಲೇ ನಿವೇಶನಗಳನ್ನು ನೀಡಬೇಕು’ ಎಂದು ಒತ್ತಾಯಿಸಿದರು.

ಎಐಟಿಯುಸಿ ಜಿಲ್ಲಾಧ್ಯಕ್ಷ ಎಚ್.ಎಂ.ಸೋಮಪ್ಪ ಮಾತನಾಡಿ, ‘ಜಿಲ್ಲೆಯಲ್ಲಿ ಲೈನ್‌ಮನೆಗಳಲ್ಲಿ ವಾಸಿಸುತ್ತಿರುವ ಕಾರ್ಮಿಕರಿಗೆ ನಿವೇಶನ ನೀಡಬೇಕು’ ಎಂದು ಆಗ್ರಹಿಸಿದರು.

ಜಿಲ್ಲೆಯಲ್ಲಿ ಪೈಸಾರಿ ಜಾಗವನ್ನು ಉಳ್ಳವರು ಒತ್ತುವರಿ ಮಾಡಿಕೊಂಡಿದ್ದಾರೆ. ಈ ಕುರಿತು ಸಮಗ್ರ ಸರ್ವೆ ಆಗಬೇಕಾ ಗಿದೆ. ಇನ್ನಾದರೂ, ಜಿಲ್ಲಾಡಳಿತ ಒತ್ತುವರಿ ಆಗಿರುವ ಸರ್ಕಾರಿ ಜಾಗ ಮುಟ್ಟುಗೋಲು ಹಾಕಿ, ನಿವೇಶನ ರಹಿತ ಕೂಲಿ ಕಾರ್ಮಿಕರಿಗೆ ನಿವೇಶನ ನೀಡಲಿ ಎಂದು ಆಗ್ರಹಿಸಿದರು.

ಕೆಲಸದ ಅವಧಿಯನ್ನು 10 ಗಂಟೆಗೆ ಏರಿಸಿರುವ ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಯನ್ನು ರಾಜ್ಯ ಸರ್ಕಾರ ತಿರಸ್ಕಾರ ಮಾಡಬೇಕು ಎಂದು ಮನವಿ ಮಾಡಿದರು.

ವಿವೇಕಾನಂದ ವೃತ್ತದ ಬಳಿಯಿಂದ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮೂಲಕ ತೆರಳಿದ ಪ್ರತಿಭಟನಕಾರರು ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.

ರೈತ ಸಂಘದ ಮುಖಂಡರಾದ ಕೆ.ಎಂ.ಲಕ್ಷ್ಮಣ್, ಎಐಟಿಯುಸಿ ಸಂಘಟನೆಯ ತಾಲ್ಲೂಕು ಕಾರ್ಯದರ್ಶಿ ಪಿ.ಟಿ.ಸುಂದರ, ಜಿಲ್ಲಾ ಸಲಹೆಗಾರ ಶೇಷಪ್ಪ, ಪರಿಶಿಷ್ಟ ಜಾತಿ ಮತ್ತು ವರ್ಗಗಳ ಸಂಘಟನೆ ಅಧ್ಯಕ್ಷ ಎಂ.ಪಿ.ಹೊನ್ನಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.