ADVERTISEMENT

ಕೆಲಸ ಸ್ಥಗಿತ: 400ಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರ ಹೋರಾಟ ಆರಂಭ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2025, 4:04 IST
Last Updated 13 ಆಗಸ್ಟ್ 2025, 4:04 IST
ಆಶಾ ಕಾರ್ಯಕರ್ತೆಯು ಮಡಿಕೇರಿಯಲ್ಲಿ ಮಂಗಳವಾರ ಪ್ರತಿಭಟನಾ ಜಾಥಾ ನಡೆಸಿದರು
ಆಶಾ ಕಾರ್ಯಕರ್ತೆಯು ಮಡಿಕೇರಿಯಲ್ಲಿ ಮಂಗಳವಾರ ಪ್ರತಿಭಟನಾ ಜಾಥಾ ನಡೆಸಿದರು   

ಮಡಿಕೇರಿ: ಮಾಸಿಕ ಕನಿಷ್ಠ ₹ 10 ಸಾವಿರ ಗೌರವಧನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಮಂಗಳವಾರದಿಂದ ಕೆಲಸ ಸ್ಥಗಿತಗೊಳಿಸಿ ಹೋರಾಟಕ್ಕೆ ಧುಮುಕಿದ್ದಾರೆ.

ಆಲ್‌ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ)ಜೊತೆ ಸಂಯೋಜಿತವಾಗಿರುವ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಸುಮಾರು 400ಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ನಗರದಲ್ಲಿ ಪ್ರತಿಭಟನಾ ಜಾಥಾ ನಡೆಸಿ, ಸರ್ಕಾರದ ವಿರುದ್ಧ ಕಿಡಿಕಾರಿದರು.

ಗಾಂಧಿ ಮೈದಾನದಿಂದ ಆರಂಭವಾದ ಮೆರವಣಿಗೆಯು ಬಾಲಭವನದವರೆಗೂ ನಡೆಯಿತು. ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆ ಈ ವೇಳೆ ಅವರು ಆಗ್ರಹಿಸಿದರು.

ADVERTISEMENT

ಪ್ರತಿಭಟನೆಯಲ್ಲಿ ಭಾಗಿಯಾದ ಆಲ್‌ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ) ರಾಜ್ಯ ಸಮಿತಿ ಸದಸ್ಯ ಟಿ.ಆರ್.ಸುನಿಲ್, ‘ಸರ್ಕಾರ ಮಾತು ಕೊಟ್ಟಂತೆ ನಡೆದುಕೊಳ್ಳಬೇಕು’ ಎಂದು ಒತ್ತಾಯಿಸಿದರು.

‘ಜನವರಿಯಲ್ಲಿ ನಡೆದ ಹೋರಾಟದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ₹ 10 ಸಾವಿರ ಗೌರವಧನ ನಿಶ್ಚಿತವಾಗಿ ಸಿಗುವಂತೆ ಮಾಡಲಾಗುವುದು ಎಂದು ಭರವಸೆ ನೀಡಿದ್ದರು. ಆದರೆ, ಈ ಭರವಸೆ ಇನ್ನೂ ಈಡೇರಿಲ್ಲ. ಹಾಗಾಗಿ, ಹೋರಾಟ ಮಾಡುವುದು ಅನಿವಾರ್ಯವಾಗಿದೆ’ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ ಗೌರವಧನ ಮತ್ತು ಕೇಂದ್ರದ ಭಾಗಶಃ ಪ‍್ರೋತ್ಸಾಹಧನ ಸೇರಿಸಿ ಮಾಸಿಕ ಕನಿಷ್ಠ ₹ 10 ಸಾವಿರ ಗ್ಯಾರಂಟಿಯನ್ನು ಈ ಏಪ್ರಿಲ್‌ನಿಂದ ಪೂರ್ವಾನ್ವಯವಾಗುವಂತೆ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಪೂರ್ಣಿಮಾ ಮಾತನಾಡಿ, ‘ರಾಜ್ಯ ಬಜೆಟ್‌ನಲ್ಲಿ ಎಲ್ಲ ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರಿಗೆ ₹ 1 ಸಾವಿರ ಪ್ರೋತ್ಸಾಹ ಧನ ಹೆಚ್ಚಳ ಮಾಡಿದಂತೆಯೇ ಎಲ್ಲ ಆಶಾ ಕಾರ್ಯಕರ್ತೆಯರಿಗೂ ಸಹ ಹೆಚ್ಚಳ ಮಾಡಬೇಕು’ ಎಂದು ಒತ್ತಾಯಿಸಿದರು.

ನಿವೃತ್ತ ಆಶಾ ಕಾರ್ಯಕರ್ತೆಯರಿಗೆ ಪಶ್ಚಿಮ ಬಂಗಾಳ ಮಾದರಿಯಲ್ಲಿ ಇಡುಗಂಟು ನೀಡಬೇಕು, ನಗರ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುವ ಆಶಾ ಕಾರ್ಯಕರ್ತೆಯರಿಗೆ ₹ 2 ಸಾವಿರ ಗೌರವಧನ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.

ವಿರಾಜಪೇಟೆ ತಾಲ್ಲೂಕು ಅಧ್ಯಕ್ಷೆ ಸುಮನಾ ಮಾತನಾಡಿ, ‘ಒಬ್ಬ ಆಶಾ ಕಾರ್ಯಕರ್ತೆಗೆ ಈಗ ಇರುವ ಜನಸಂಖ್ಯೆ ಮಿತಿಯನ್ನು ಹೆಚ್ಚಿಸಬಾರದು. ಈ ನೆಪದಲ್ಲಿ ಯಾವುದೇ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆದು ಹಾಕಬಾರದು’ ಎಂದು ಮನವಿ ಮಾಡಿದರು.

ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷೆ ಶಾಂತಿ ಮಾತನಾಡಿ, ‘ಆಶಾ ಕಾರ್ಯಕರ್ತೆಯರ ಕಾರ್ಯನಿರ್ವಹಣಾ ಮೌಲ್ಯಮಾಪನವನ್ನು ಅವೈಜ್ಞಾನಿಕವಾಗಿ ಮಾಡುವುದನ್ನು ಕೈಬಿಡಬೇಕು. ಆಶಾ ಸುಗಮಕಾರರನ್ನು ಸೂಕ್ತ ವೇತನನೊಂದಿಗೆ ಮುಂದುವರಿಸಬೇಕು’ ಎಂದು ಆಗ್ರಹಿಸಿದರು.

ಇನ್ನೂ ಎರಡು ದಿನಗಳ ಕಾಲ ಬಾಲಭವನದಲ್ಲಿ ಆಶಾ ಕಾರ್ಯಕರ್ತೆಯರ ಪ್ರತಿಭಟನಾ ಸಮಾವೇಶ ಮುಂದುವರಿಲಿದ್ದು, ಆ. 13ರಂದು ಸಂಘದ ರಾಜ್ಯ ಘಟಕದ ಉಪಾಧ್ಯಕ್ಷೆ ಎಂ.ಉಮಾದೇವಿ ಹಾಗೂ 14ರಂದು ಎಐಯುಟಿಯುಸಿಯ ರಾಜ್ಯ ಸಮಿತಿ ಸದಸ್ಯ ಬಿ.ರವಿ ಭಾಗವಹಿಸಲಿದ್ದಾರೆ.

ಸಂಘದ ಜಿಲ್ಲಾ ಘಟಕದ ಕಾರ್ಯದರ್ಶಿ ನಾಗಮಣಿ, ವಿರಾಜಪೇಟೆ ತಾಲ್ಲೂಕು ಘಟಕದ ಕಾರ್ಯದರ್ಶಿ ವನಿತಾ, ಸೋಮವಾರಪೇಟೆ ತಾಲ್ಲೂಕು ಘಟಕದ ಕಾರ್ಯದರ್ಶಿ ಜ್ಯೋತಿ, ಮಡಿಕೇರಿ ತಾಲ್ಲೂಕು ಘಟಕದ ಅಧ್ಯಕ್ಷೆ ಶ್ರೀಮತಿ, ಕಾರ್ಯದರ್ಶಿ ಸ್ವಾತಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.