
ಮಡಿಕೇರಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ ಕಾರ್ಯಕ್ರಮಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಕಾರ್ಯಕ್ರಮ ಅನುಷ್ಠಾನದಲ್ಲಿ ವಿಳಂಬ ಮಾಡಿದ್ದಲ್ಲಿ ಗಂಭೀರವಾಗಿ ಪರಿಗಣಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಫೆಬ್ರುವರಿ ಅಂತ್ಯದೊಳಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ ಕಾರ್ಯಕ್ರಮಗಳ ಪ್ರಗತಿ ಸಾಧಿಸಬೇಕು ಎಂದು ಎಲ್ಲ ಅಧಿಕಾರಿಗಳಿಗೆ ಸೂಚಿಸಿದರು.
ಇಲ್ಲಿನ ತಮ್ಮ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.
ವಿವಿಧ ಇಲಾಖೆಗಳ ಕಾಮಗಾರಿ ಸಂಬಂಧಿಸಿದಂತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಗುವುದು ಎಂದೂ ಅವರು ಹೇಳಿದರು.
ಪೌರಕಾರ್ಮಿಕರಿಗೆ ಖಾಸಗಿ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ಸಂಬಂಧಿಸಿದಂತೆ ಮಾಹಿತಿ ಪಡೆದ ಅವರು, ‘ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಜೊತೆಗೆ ಖಾಸಗಿ ಆಸ್ಪತ್ರೆಗೆ ಮನವಿ ಮಾಡಿದ್ದಲ್ಲಿ ಉಚಿತವಾಗಿ ಆರೋಗ್ಯ ತಪಾಸಣೆ ನಡೆಸಲಿದ್ದಾರೆ. ಆ ನಿಟ್ಟಿನಲ್ಲಿ ಮನವಿ ಮಾಡಬೇಕು’ ಎಂದು ಅವರು ಸಲಹೆ ನೀಡಿದರು.
ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಿ.ಬಸಪ್ಪ ಅವರು ಪೌರಕಾರ್ಮಿಕರಿಗೆ ಉಪಾಹಾರ ಯೋಜನೆ, ಪೌರಕಾರ್ಮಿಕರಿಗೆ ಆರೋಗ್ಯ ತಪಾಸಣೆ ಮತ್ತಿತರ ಬಗ್ಗೆ ಮಾಹಿತಿ ನೀಡಿದರು.
ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್, ಐಟಿಡಿಪಿ ಇಲಾಖಾ ಅಧಿಕಾರಿ ಎಸ್.ಹೊನ್ನೇಗೌಡ, ಪೌರಾಯುಕ್ತ ಎಚ್.ಆರ್.ರಮೇಶ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಚಂದ್ರಶೇಖರ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.