
ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಸೇರಿದ ಬೋಧಕ ಆಸ್ಪತ್ರೆ (ಜಿಲ್ಲಾಸ್ಪತ್ರೆ)ಯಲ್ಲಿನ ಸಾಲು ಸಾಲು ಸಮಸ್ಯೆಗಳನ್ನು ಆಲಿಸಿದ ಸಂಸ್ಥೆಯ ಡೀನ್ ಮತ್ತು ನಿರ್ದೇಶಕ ಡಾ.ಎ.ಜೆ.ಲೋಕೇಶ್ ಅವರು ಎಲ್ಲದಕ್ಕೂ ಪರಿಹಾರದ ಭರವಸೆಗಳನ್ನು ನೀಡಿದರು.
ಇಲ್ಲಿನ ಪತ್ರಿಕಾ ಭವನದಲ್ಲಿ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಭಾನುವಾರ ನಡೆದ ಸಂವಾದದಲ್ಲಿ ಅವರು ಮಾತನಾಡಿದರು.
ಮುಖ್ಯವಾಗಿ, ವೈದ್ಯರು ಮತ್ತು ಸಿಬ್ಬಂದಿಗಳು ರೋಗಿಗಳು ಹಾಗೂ ಅವರ ಸಂಬಂಧಿಕರ ಜೊತೆ ಸರಿಯಾಗಿ ವರ್ತಿಸುವುದಿಲ್ಲ ಎಂಬ ದೂರಿಗೆ ಪ್ರತಿಕ್ರಿಯಿಸಿದ ಅವರು, ಜನಸ್ನೇಹಿಯಾಗಿ ವರ್ತಿಸುವಂತೆ ಮಾಡಲು ವೈದ್ಯರು ಹಾಗೂ ಸಿಬ್ಬಂದಿಗೆ ಸೂಕ್ತ ತರಬೇತಿ ನೀಡಲಾಗುವುದು ಎಂದು ಹೇಳಿದರು.
ರೋಗಿಗಳಿಗೆ ಮತ್ತು ಅವರ ಸಂಬಂಧಿಕರಿಗೆ ವೈದ್ಯರು ಸರಿಯಾಗಿ ಚಿಕಿತ್ಸೆ ನೀಡುವುದಿಲ್ಲ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಇದರ ಪರಿಹಾರಕ್ಕೆ ಸಹಾಯ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಹೇಳಿದರು.
ಜಿಲ್ಲಾಸ್ಪತ್ರೆ ಆವರಣದಲ್ಲಿ ಪಾರ್ಕಿಂಗ್ ಸಮಸ್ಯೆಯನ್ನು ಪರಿಹರಿಸಲು ಕ್ರಮ ವಹಿಸಲಾಗುವುದು. ಹೊರ ಆವರಣವನ್ನು ಬಳಸಿಕೊಂಡು ವ್ಯವಸ್ಥಿತವಾಗಿ ವಾಹನ ನಿಲುಗಡೆಗೆ ಯೋಜನೆ ರೂಪಿಸಲಾಗುವುದು. ಐಬಿ ಬಳಿ ಜಿಲ್ಲಾಸ್ಪತ್ರೆಗೆ ಸೇರಿದ ಜಾಗವಿದ್ದು, ಅಲ್ಲಿಯೂ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ ಶಾಸಕರೊಂದಿಗೆ ಚರ್ಚಿಸಲಾಗುವುದು ಎಂದರು.
ಸ್ಥಾನೀಯ ವೈದ್ಯಾಧಿಕಾರಿ ಡಾ.ಧನಂಜಯ ಕುಮಾರ್ ಮಾತನಾಡಿ, ‘ದೂರುಗಳಿದ್ದರೆ ತಕ್ಷಣ ಗಮನಕ್ಕೆ ತಂದರೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.
ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಚರಣಿಯಂಡ ಅನು ಕಾರ್ಯಪ್ಪ ಮಾತನಾಡಿ, ಆರೋಗ್ಯಕರ ಚರ್ಚೆಯಿಂದ ಸಾರ್ವಜನಿಕರಿಗೆ ಉತ್ತಮ ಸೇವೆ ದೊರೆಯಬೇಕೆಂಬುದು ಸಂವಾದದ ಆಶಯವಾಗಿದೆ ಎಂದು ತಿಳಿಸಿದರು.
ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ಜೆ.ರಾಕೇಶ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.