ಮಡಿಕೇರಿ: ಲೆಫ್ಟಿನೆಂಟ್ ಜನರಲ್ ಕೋದಂಡ ಎನ್. ಸೋಮಣ್ಣ (ನಿವೃತ್ತ) ಅವರು ತೀವ್ರ ಅನಾರೋಗ್ಯದಿಂದ ಶನಿವಾರ ಕೊಡಗು ಜಿಲ್ಲೆಯ ವಿರಾಜಪೇಟೆ ಪಟ್ಟಣದ ಪಂಜರುಪೇಟೆಯ ತಮ್ಮ ನಿವಾಸದಲ್ಲಿ ನಿಧನರಾದರು. ಅವರಿಗೆ 93 ವರ್ಷ ವಯಸ್ಸಾಗಿತ್ತು.
ಮೃತರಿಗೆ ಪತ್ನಿ ರೇಣು ಸೋಮಣ್ಣ, ಪುತ್ರ ಹಾಗೂ ಪುತ್ರಿ ಇದ್ದಾರೆ. ಪುತ್ರ ನಿವೇದ್ ನಂಜಪ್ಪ ಅಮೆರಿಕದಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಭಾನುವಾರ ಮಧ್ಯಾಹ್ನ ಅವರ ಸ್ವಂತ ತೋಟದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಸೇನಾ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಯಬೇಕಿತ್ತು. ಆದರೆ, ಕೊರೊನಾ ಭೀತಿಯಿಂದ ಸಾಂಕೇತಿಕವಾಗಿ ಗೌರವ ಸಲ್ಲಿಕೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಸೋಮಣ್ಣ ಅವರು ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರಾಗಿ, ಭೂಸೇನೆಯ ಸಹಾಯಕ ಉಪ ಮುಖ್ಯಸ್ಥರಾಗಿಯೂ ಸೇವೆ ಸಲ್ಲಿಸಿದ್ದರು. ಅಮೃತ್‌ಸರದಲ್ಲಿ ನಡೆದ ‘ಆಪರೇಷನ್ ಬ್ಲೂಸ್ಟಾರ್’ ಕಾರ್ಯಾಚರಣೆಯಲ್ಲಿ ಇವರ ಪಾತ್ರ ಪ್ರಮುಖವಾಗಿತ್ತು.
ನಿವೃತ್ತರಾದ ಮೇಲೆ ವಿರಾಜಪೇಟೆಯಲ್ಲಿ ನೆಲೆಸಿದ್ದರು. ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಫೋರಂನ ಮಹಾ ಪೋಷಕರಾಗಿಯೂ ಕೆಲಸ ಮಾಡುತ್ತಿದ್ದರು.
2016ರ ಜುಲೈನಲ್ಲಿ ಅಂದಿನ ಸೇನಾ ಮುಖ್ಯಸ್ಥರಾಗಿದ್ದ ಜನರಲ್ ದಲ್ಬೀರ್ ಸಿಂಗ್ ಸುಹಾಗ್ ಅವರು ಕೊಡಗಿಗೆ ಭೇಟಿ ನೀಡಿದ್ದರು. ಅಂದು ಸೋಮಣ್ಣ ಅವರ ಮನೆಗೂ ತೆರಳಿ ಯೋಗಕ್ಷೇಮ ವಿಚಾರಿಸಿದ್ದರು. ಈಗಿನ ಭಾರತೀಯ ರಕ್ಷಣಾ ಪಡೆಗಳ ಮುಖ್ಯಸ್ಥರಾದ ಜನರಲ್ ಬಿಪಿನ್ ರಾವತ್ (ಅಂದು ದಕ್ಷಿಣ ವಲಯದ ಸೇನಾ ಮುಖ್ಯಸ್ಥರಾಗಿದ್ದರು) ಅವರೂ ಸುಹಾಗ್ ಅವರೊಂದಿಗೆ ಸೋಮಣ್ಣ ಅವರನ್ನು ಭೇಟಿ ಮಾಡಿದ್ದರು.
‘ಜಿಲ್ಲೆಯಲ್ಲಿ ಸೇನೆಗೆ ಸಂಬಂಧಿಸಿದ ಯಾವುದೇ ಕಾರ್ಯಕ್ರಮಗಳು ನಡೆದರೂ ಸೋಮಣ್ಣ ಅವರು ಬರುತ್ತಿದ್ದರು. ಶಿಸ್ತಿಗೆ ಹೆಸರಾಗಿದ್ದರು. ಅವರ ಕಣ್ಮರೆ ಅತೀವ ಆಘಾತ ತಂದಿದೆ’ ಎಂದು ಕಾರ್ಯಪ್ಪ ಹಾಗೂ ತಿಮ್ಮಯ್ಯ ಫೋರಂ ಅಧ್ಯಕ್ಷ (ನಿವೃತ್ತ) ಕರ್ನಲ್ ಕೆ.ಸಿ.ಸುಬ್ಬಯ್ಯ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.