ಮಡಿಕೇರಿ: ‘ಮುಂದಿನ 40 ದಿನಗಳ ಕಾಲ ಮುನ್ನಚ್ಚರಿಕೆ ಮಾತ್ರವಲ್ಲ ಅತೀವ ಮುತುವರ್ಜಿಯಿಂದ ಕಾರ್ಯನಿರ್ವಹಿಸಿ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು ಅಧಿಕಾರಿಗಳಿಗೆ ಸೂಚಿಸಿದರು.
ಇಲ್ಲಿನ ಕೊಡಗು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ಜಿಲ್ಲೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಈ ಸೂಚನೆ ನೀಡಿದರು. ಇದಕ್ಕೂ ಮುನ್ನ ಅವರು ಸಮಗ್ರ ಮಾಹಿತಿ ಪಡೆದುಕೊಂಡರು.
ಮಳೆಗಾಲದ ಮುಂದಿನ 40 ದಿನಗಳು ಬಹಳ ಮಹತ್ವದ್ದಾಗಿವೆ. ಈಗಾಗಲೇ ಹಿಂದಿನ ವರ್ಷಗಳ ಅನುಭವದ ಆಧಾರದ ಮೇಲೆ ಅಗತ್ಯವಿರುವ ಕಡೆಗಳಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ತಗೆದುಕೊಳ್ಳಬೇಕು. ತುರ್ತು ಕಾಮಗಾರಿಗಳಿಗೆ ಹಣಕಾಸಿನ ಕೊರತೆಯಿಲ್ಲ. ಜಿಲ್ಲಾಧಿಕಾರಿಗಳ ಅನುಮತಿಯ ಆಧಾರದ ಮೇಲೆ ಅಗತ್ಯ ಕಾಮಗಾರಿಗಳನ್ನು ಕೈಗೊಳ್ಳಬೇಕು. ಹಿರಿಯ ಅಧಿಕಾರಿಗಳು ರಜೆಯನ್ನು ತಗೆದುಕೊಳ್ಳದೇ ಮೇಲುಸ್ತುವಾರಿಯನ್ನು ವಹಿಸಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ತುರ್ತು ರಕ್ಷಣಾ ಕಾರ್ಯಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಪ್ರತಿ ಪಂಚಾಯಿತಿಗಳಿಗೆ ₹ 25 ಸಾವಿರ ನೀಡಲಾಗುವುದು. ಜಿಲ್ಲಾಡಳಿತ ಯಾವುದೇ ಪರಿಸ್ಥಿತಿಯನ್ನು ನಿಭಾಯಿಸುವ ನಿಟ್ಟಿನಲ್ಲಿ ಸಿದ್ದವಾಗಿರಬೇಕು ಎಂದು ಸೂಚನೆ ನೀಡಿದರು.
ಮುಂದಿನ 10 ದಿನಗಳಲ್ಲಿ ಅಂಗನವಾಡಿ, ಶಾಲೆಗಳು, ವಸತಿ ಶಾಲೆಗಳು, ಸರ್ಕಾರಿ ಹಾಸ್ಟೆಲ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದರು.
ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ ಸೇರಿದಂತೆ ಜಿಲ್ಲೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಹಾನಿ ಪರಿಶೀಲಿಸಿದ ಸಚಿವ, ಶಾಸಕ
ಇದಕ್ಕೂ ಮುನ್ನ ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಆಗಿರುವ ಹಾನಿಯನ್ನು ಸಚಿವ ಎನ್.ಎಸ್.ಭೋಸರಾಜು ಹಾಗೂ ಶಾಸಕ ಡಾ.ಮಂತರ್‌ಗೌಡ ಗುರುವಾರ ಪರಿಶೀಲಿಸಿದರು.
ಕುಶಾಲನಗರದ ಚಂದ್ರಶೇಖರ ಅವರ ಮನೆಹಾನಿ ಪರಿಶೀಲಿಸಿದರು. ಬಳಿಕ ಕಾವೇರಿ ನದಿ ನೀರು ಹರಿಯುವ ಕಣಿವೆ ಬಳಿಯ ತೂಗು ಸೇತುವೆ ಸ್ಥಳಕ್ಕೆ ತೆರಳಿದ ಸಚಿವರು ಭೇಟಿ ನೀಡಿ ವೀಕ್ಷಿಸಿದರು. ನಂತರ, ರಂಗಸಮುದ್ರ ಹತ್ತಿರ ಕುಸಿಯುತ್ತಿರುವ ಸೇತುವೆ ಪರಿಶೀಲಿಸಿದರು.
ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ‘ಈ ಬಾರಿ ಮೇ ಅಂತ್ಯದಲ್ಲಿಯೇ ಮುಂಗಾರು ಆರಂಭವಾಗಿದ್ದು, ಹೆಚ್ಚಿನ ಮಳೆಯಿಂದ ಜಿಲ್ಲೆಯಲ್ಲಿ ಮನೆ, ಸೇತುವೆ, ರಸ್ತೆ ಸೇರಿದಂತೆ ಹಲವು ರೀತಿಯ ಪ್ರಾಕೃತಿಕ ವಿಕೋಪ ಸಂಭವಿಸಿದೆ’ ಎಂದರು.
ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಜಿಲ್ಲಾಧಿಕಾರಿ ಅವರ ಪಿಡಿ ಖಾತೆಯಲ್ಲಿ ಹೆಚ್ಚಿನ ಹಣವಿದ್ದು, ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಜಿಲ್ಲಾಡಳಿತ ಗಮನಹರಿಸಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಮೇ ಅಂತ್ಯದಿಂದ ಸುರಿದ ಧಾರಾಕಾರ ಮಳೆಗೆ ರಸ್ತೆ, ಸೇತುವೆ, ಮನೆಗಳ ಹಾನಿಯಾಗಿದೆ. ಸೇತುವೆ ನಿರ್ಮಾಣಕ್ಕೆ ಅಗತ್ಯ ಕ್ರಮವಹಿಸಲಾಗುವುದು. ಮನೆ ಹಾನಿ ಸಂಬಂಧ ಪರಿಹಾರ ವಿತರಿಸಲಾಗಿದೆ ಎಂದು ಮಾಹಿತಿ ನೀಡಿದರು. ಮಳೆ ನಿಂತ ನಂತರ ಶಾಶ್ವತ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಉಂಟಾದ ಹಾನಿ ಬಗ್ಗೆ ಶಾಸಕರ ಜೊತೆ ಚರ್ಚಿಸಿ ಮುಖ್ಯಮಂತ್ರಿ ಅವರಿಗೆ ವರದಿ ನೀಡಲಾಗುವುದು. ಮಳೆಹಾನಿಗೆ ಹೆಚ್ಚಿನ ಹಣ ಬಿಡುಗಡೆಗೆ ಮುಖ್ಯಮಂತ್ರಿ ಅವರನ್ನು ಕೋರಲಾಗುವುದು ಎಂದು ಹೇಳಿದರು.
ಸರ್ಕಾರದ ಬಳಿ ಹಣವಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಯಾವುದೇ ರೀತಿಯ ಅಡಚಣೆ ಇಲ್ಲ. ಸರ್ಕಾರ 8 ಸಾವಿರ ಕೋಟಿ ರೂ. ವನ್ನು ಅಭಿವೃದ್ಧಿ ಕೆಲಸಕ್ಕಾಗಿ ಬಿಡುಗಡೆ ಮಾಡಿದೆ. ಹಾಗೆಯೇ ಕೊಡಗು ಜಿಲ್ಲೆಗೂ ಸಹ ₹ 100 ಕೋಟಿ ಬಿಡುಗಡೆ ಮಾಡಿದೆ. ಗ್ಯಾರಂಟಿ ಯೋಜನೆ ಜೊತೆಗೆ ಅಭಿವೃದ್ಧಿ ಕಾರ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ವಿವರಿಸಿದರು.
ಮೇ ಮತ್ತು ಜೂನ್ ತಿಂಗಳಲ್ಲಿ ಸುರಿದ ಧಾರಾಕಾರ ಮಳೆಯಿಂದ ಉಂಟಾದ ಹಾನಿ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಲಾಗಿದೆ ಎಂದರು.
ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಕುಶಾಲನಗರ ತಾಲ್ಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಭಾಗವಹಿಸಿದ್ದರು.
ಇಡೀ ದಿನ ಮಡಿಕೇರಿ ಕ್ಷೇತ್ರದಲ್ಲಿ ಪರಿಶೀಲನೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವ ಮಳೆ ಹಾನಿ ವೀಕ್ಷಿಸಿದ ಸಚಿವ ಎನ್.ಎಸ್.ಭೋಸರಾಜು
ಮಳೆಯಿಂದಾಗಿರುವ ಹಾನಿಗೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದ್ದು ಈ ವರದಿ ಆಧಾರ ಮೇಲೆ ಜುಲೈ 2ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಗತ್ಯ ಅನುದಾನ ಒದಗಿಸಲಾಗುವುದುಎನ್.ಎಸ್. ಭೋಸರಾಜು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ
‘ಕಟ್ಟಡ ಹೊಸತಾದರೆ ಸಾಲದು ಮನಸ್ಸೂ ಹೊಸದಾಗಬೇಕು’
ಕುಶಾಲನಗರದಲ್ಲಿ ನೂತನವಾಗಿ ನಿರ್ಮಿಸಿ ಇತ್ತೀಚೆಗೆ ಉದ್ಘಾಟನೆಯಾದ ಪುರಸಭೆ ಕಟ್ಟಡದಲ್ಲಿ ಸಿಬ್ಬಂದಿಯನ್ನುದ್ದೇಶಿಸಿ ಮಾತನಾಡಿದ ಶಾಸಕ ಡಾ.ಮಂತರ್‌ಗೌಡ ‘ಮರಣ ಪ್ರಮಾಣ ಪತ್ರ ನೀಡಲು ಒಂದು ತಿಂಗಳಿಗೂ ಹೆಚ್ಚು ಕಾಲ ತೆಗೆದುಕೊಳ್ಳುವುದು ಸರಿಯಲ್ಲ. ಇಂದಿನ ಸಾಮಾಜಿಕ ಜಾಲತಾಣದ ಯುಗದಲ್ಲಿ ಸಾರ್ವಜನಿಕರಿಗೆ ಸ್ಪಂದಿಸುವುದು ಅತೀ ಮುಖ್ಯವಾಗಿದೆ. ಕೇವಲ ಕಟ್ಟಡ ಮಾತ್ರ ಹೊಸತಾದರೆ ಸಾಲದು. ಕೆಲಸ ಮಾಡುವ ಸಿಬ್ಬಂದಿ ಅಧಿಕಾರಿಯ ಮನಸ್ಸೂ ಬದಲಾಗಬೇಕು. ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು’ ಎಂದರು. ಸಚಿವ ಭೋಸರಾಜು ಮಾತನಾಡಿ ‘ಸಾರ್ವಜನಿಕರಿಗೆ ಅನುಕೂಲವಾಗುವಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಮಾದರಿಯಾಗಿ ಕರ್ತವ್ಯ ನಿರ್ವಹಿಸಬೇಕು’ ಎಂದು ಹೇಳಿದರು.
ಚಿಗುರೊಡೆದ ಹಳೆ ಸೇತುವೆ ಅಭಿವೃದ್ಧಿ ಕನಸು!
ಸಚಿವ ಎನ್.ಎಸ್.ಭೋಸರಾಜು ಅವರು ಜಿಲ್ಲೆಗೆ ಆಗಮಿಸುತ್ತಿದ್ದಂತೆ ಕುಶಾಲನಗರದ ಹಳೆಯ ಸೇತುವೆ ಮೇಲೆ ಕಾಲ್ನಡಿಗೆಯಲ್ಲಿಯೇ ಸಾಗಿ ಸಂಪೂರ್ಣ ಪರಿಶೀಲಿಸಿದರು. ಹಳೆಯ ಸೇತುವೆಯ ಹಳೆಯ ಶಿಲಾಫಲಕ ವೀಕ್ಷಿಸಿದರು. ಈ ವೇಳೆ ಪರಿಸರವಾದಿ ಚಂದ್ರಮೋಹನ್ ಅವರು ಈ ಸೇತುವೆ ಉಳಿಸಬೇಕು ಎಂದು ಮನವಿ ಮಾಡಿದರು. ಪ್ರತಿಕ್ರಿಯಿಸಿದ ಡಾ.ಮಂತರ್‌ಗೌಡ ಶಾಸಕರ ನಿಧಿಯಿಂದ ‘ಇಂಟರ್‌ಲಾಕ್’ ಹಾಕಿ ಪಾದಚಾರಿ ಮಾರ್ಗ ಮಾಡಬಹುದು ಎಂದರು. ‘ಶಾಸಕರ ನಿಧಿಯಿಂದ ಬೇಡ ಲೋಕೋಪಯೋಗಿ ಇಲಾಖೆಯಿಂದ ಮಾಡಿಸಬಹುದು’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.