ADVERTISEMENT

ಕೊಡಗು ಜಿಲ್ಲೆಗೆ ಹೆಚ್ಚಿನ ವೈದ್ಯಕೀಯ ಸೇವೆ: ಡಾ.ಶರಣಪ್ರಕಾಶ್‌ ಪಾಟೀಲ

ಕೊಡಗು ಜಿಲ್ಲೆಯ ವೈದ್ಯಕೀಯ ಕ್ಷೇತ್ರವನ್ನು ನಿರ್ಲಕ್ಷಿಸುವ ಪ್ರಶ್ನೆಯೇ ಇಲ್ಲ ಎಂದ ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2024, 5:11 IST
Last Updated 30 ಸೆಪ್ಟೆಂಬರ್ 2024, 5:11 IST
ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ ಅವರು ಭಾನುವಾರ ಮಡಿಕೇರಿಯ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆಯಲ್ಲಿ (ಜಿಲ್ಲಾಸ್ಪತ್ರೆ) ಎಂಆರ್‌ಐ ಸ್ಕ್ಯಾನಿಂಗ್ ಯಂತ್ರವನ್ನು ಬಳಕೆಗೆ ಮುಕ್ತಗೊಳಿಸಿ ಇಲಾಖೆಯ ಮುಖ್ಯ ಕಾರ್ಯದರ್ಶಿ ಅಹಮ್ಮದ್ ಮೊಸಿನ್ ಅವರೊಂದಿಗೆ ಚರ್ಚೆ ನಡೆಸಿದರು
ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ ಅವರು ಭಾನುವಾರ ಮಡಿಕೇರಿಯ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆಯಲ್ಲಿ (ಜಿಲ್ಲಾಸ್ಪತ್ರೆ) ಎಂಆರ್‌ಐ ಸ್ಕ್ಯಾನಿಂಗ್ ಯಂತ್ರವನ್ನು ಬಳಕೆಗೆ ಮುಕ್ತಗೊಳಿಸಿ ಇಲಾಖೆಯ ಮುಖ್ಯ ಕಾರ್ಯದರ್ಶಿ ಅಹಮ್ಮದ್ ಮೊಸಿನ್ ಅವರೊಂದಿಗೆ ಚರ್ಚೆ ನಡೆಸಿದರು   

ಮಡಿಕೇರಿ: ಕೊಡಗಿನಲ್ಲಿ ಹೃದ್ರೋಗ ಚಿಕಿತ್ಸಾ ಕೇಂದ್ರ, ತುರ್ತು ಚಿಕಿತ್ಸಾ ಕೇಂದ್ರ (ಟ್ರಾಮಾ)ವನ್ನು ಅತಿ ಶೀಘ್ರದಲ್ಲಿ ಆರಂಭಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಶರಣ ಪ್ರಕಾಶ ಪಾಟೀಲ ತಿಳಿಸಿದರು.

ವೈದ್ಯಕೀಯ ಶಿಕ್ಷಣ ಇಲಾಖೆ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ವತಿಯಿಂದ ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಎಂಆರ್‌ಐ ಸ್ಕ್ಯಾನಿಂಗ್ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಖಾಸಗಿ ಮತ್ತು ಸಾರ್ವಜನಿಕ ಸಹಭಾಗಿತ್ವದಲ್ಲಿ ಹೃದ್ರೋಗ ಚಿಕಿತ್ಸಾ ಕೇಂದ್ರ ಆದಷ್ಟು ಶೀಘ್ರ ಕಾರ್ಯಾರಂಭ ಮಾಡಲಿದೆ. ಆಸ್ಪತ್ರೆಯ ನೂತನ ಕಟ್ಟಡದ ಕಾಮಗಾರಿಗೆ ಇನ್ನೂ ₹ 50ರಿಂದ 60 ಕೋಟಿ ಬೇಕಿದೆ. ಇದಕ್ಕಾಗಿ ಹಣಕಾಸು ಇಲಾಖೆಗೆ ಮನವಿ ಮಾಡಲಾಗಿದೆ ಎಂದರು.

ADVERTISEMENT

ಕೊಡಗು ಜಿಲ್ಲೆಯ ಹಲವು ವರ್ಷಗಳ ಬೇಡಿಕೆಯಾದ ಎಂಆರ್‌ಐ ಸ್ಕ್ಯಾನಿಂಗ್ ಯಂತ್ರವನ್ನು ಈಗ ಅಳವಡಿಸಲಾಗಿದೆ. ಇಬ್ಬರು ವೈದ್ಯಕೀಯ ತಾಂತ್ರಿಕರನ್ನು ನೇಮಿಸಲು ತುರ್ತು ಕ್ರಮ ವಹಿಸಲಾಗುವುದು ಎಂದೂ ಅವರು ಹೇಳಿದರು.

ಇದೆಲ್ಲವೂ ಕೊಡಗು ಜಿಲ್ಲೆಯ ಮತದಾರರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಇಬ್ಬರು ಯುವ ಹಾಗೂ ಸುಶಿಕ್ಷಿತ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಿದ್ದರ ಫಲ ಎಂದ ಅವರು, ಇನ್ನು ಮುಂದೆಯೂ ಕೊಡಗು ಜಿಲ್ಲೆಯ ವೈದ್ಯಕೀಯ ಕ್ಷೇತ್ರಕ್ಕೆ ಸಾಕಷ್ಟು ನೆರವು ನೀಡಲಾಗುವುದು ಎಂದು ತಿಳಿಸಿದರು.

ಸರ್ಕಾರ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದೆ. ಆ ನಿಟ್ಟಿನಲ್ಲಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ವ್ಯಾಪ್ತಿಯಲ್ಲಿ ವಿದ್ಯಾರ್ಥಿ ನಿಲಯ, ವಸತಿ ಗೃಹ ಸೇರಿದಂತೆ ಹಲವು ಮೂಲ ಸೌಲಭ್ಯ ಕಲ್ಪಿಸಲು ಪ್ರಯತ್ನಿಸಲಾಗುವುದು ಎಂದು  ಭರವಸೆ ನೀಡಿದರು.

ರಾಜ್ಯದಲ್ಲಿ 22 ಸರ್ಕಾರಿ ವೈದ್ಯಕೀಯ ಕಾಲೇಜುಗಳು, 2 ಇಎಸ್‌ಐ ಆಸ್ಪತ್ರೆಗಳು ಸೇರಿ ಒಟ್ಟು 24 ಸರ್ಕಾರಿ ವೈದ್ಯಕೀಯ ಆಸ್ಪತ್ರೆಗಳು ಹಾಗೂ 71 ವೈದ್ಯಕೀಯ ಕಾಲೇಜುಗಳು ಇವೆ ಎಂದರು.

ಬಡವರ ಮಕ್ಕಳು ವೈದ್ಯರಾಗಬೇಕು ಎಂಬ ಉದ್ದೇಶದಿಂದ ಪ್ರತಿ ಜಿಲ್ಲೆಯಲ್ಲಿಯೂ ವೈದ್ಯಕೀಯ ಕಾಲೇಜು ಆರಂಭಿಸಲು ಸರ್ಕಾರ ಪ್ರಯತ್ನಿಸಿದೆ ಎಂದರು.

ಬಡವರು ಹೃದಯ, ನರ ವಿಜ್ಞಾನ, ವಿಕಿರಣ ವಿಭಾಗದಲ್ಲಿ ದುಬಾರಿ ವೆಚ್ಚದಲ್ಲಿ ಚಿಕಿತ್ಸೆ ಪಡೆಯುವುದು ಕಷ್ಟ ಸಾಧ್ಯ, ಆದ್ದರಿಂದ ಉಚಿತವಾಗಿ ಆರೋಗ್ಯ ಸೌಲಭ್ಯಗಳು ತಲುಪಬೇಕು ಎಂಬ ಉದ್ದೇಶದಿಂದ ಸರ್ಕಾರ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಗಳು ಒಟ್ಟುಗೂಡಿ ಆರೋಗ್ಯ ಸೌಲಭ್ಯ ಕಲ್ಪಿಸಲು ಮುಂದಾಗಿದೆ ಎಂದರು.

ವೈದ್ಯಕೀಯ ಶಿಕ್ಷಣ ಇಲಾಖೆಯ ಮುಖ್ಯ ಕಾರ್ಯದರ್ಶಿ ಮೊಹಮ್ಮದ್ ಮೊಸಿನ್ ಅವರು ಜಿಲ್ಲೆಯಲ್ಲಿ ಕ್ರಿಟಿಕಲ್ ಕೇರ್ ಸೆಂಟರ್ ಶೀಘ್ರ ಆರಂಭವಾಗಲಿದೆ ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಧರ್ಮಜ ಉತ್ತಪ್ಪ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮುಖ್ಯ ಆಡಳಿತ ಅಧಿಕಾರಿ ಕೆ.ಎಂ.ರೋಹಿಣಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ನಂಜುಂಡಯ್ಯ, ವೈದ್ಯಕೀಯ ಅಧೀಕ್ಷಕ ಡಾ.ಎಚ್.ಕೆ.ಸೋಮಶೇಖರ ಭಾಗವಹಿಸಿದ್ದರು.

ಹಲವು ವರ್ಷಗಳ ಬೇಡಿಕೆ ಈಡೇರಿಸಲಾಗಿದೆ; ಡಾ.ಮಂತರ್‌ಗೌಡ

ಶಾಸಕ ಡಾ.ಮಂತರ್‌ಗೌಡ ಮಾತನಾಡಿ ‘ಹಲವು ವರ್ಷಗಳ ಬೇಡಿಕೆ ಈಡೇರಿಸಲು ಪ್ರಯತ್ನಿಸಲಾಗಿದೆ. ಎಂಆರ್‌ಐ ಸ್ಕ್ಯಾನಿಂಗ್‌ಗಾಗಿ ಮೈಸೂರು ಮಂಗಳೂರು ಹಾಗೂ ಸುಳ್ಯಕ್ಕೆ ಹೋಗುವುದು ಇದರಿಂದ ತಪ್ಪಲಿದೆ’ ಎಂದು ತಿಳಿಸಿದರು. ಎಂಆರ್‌ಐ ಸ್ಕ್ಯಾನಿಂಗ್ ಮಾಡಿಸುವುದರಿಂದ ಯಾವುದೇ ರೀತಿಯ ತೊಂದರೆ ಆಗುವುದಿಲ್ಲ ಪಾರ್ಶ್ವವಾಯು ಮೂಳೆ ಸೇರಿದಂತೆ ದೇಹದಲ್ಲಿ ಎಲ್ಲಾ ರೀತಿಯ ರೋಗವನ್ನು ಪತ್ತೆಹಚ್ಚಲು ಇದು ಸಹಕಾರಿಯಾಗಿದೆ. ಕೂಡಲೇ ಇಬ್ಬರು ತಾಂತ್ರಿಕ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ಸಚಿವರಲ್ಲಿ ಮನವಿ ಮಾಡಿದರು. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ (ಜಿಲ್ಲಾಸ್ಪತ್ರೆ) ಜಾಗವನ್ನು ದಾನವಾಗಿ ನೀಡಿದ ಮಹನೀಯರನ್ನು ಸ್ಮರಿಸುವಂತಹ ಕಾರ್ಯ ಮಾಡಬೇಕು ಎಂದೂ ಅವರು ಮನವಿ ಮಾಡಿದರು.

ಸರ್ಕಾರ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಿದೆ. ಕೋವಿಡ್ ಸಂದರ್ಭದಲ್ಲಿ ವೈದ್ಯರು ಮತ್ತು ಶ್ರುಶ್ರುಷಕರು ಹೆಚ್ಚಿನ ವೈದ್ಯಕೀಯ ಸೇವೆ ಸಲ್ಲಿಸಿರುವುದು ಶ್ಲಾಘನೀಯ
ಎ.ಎಸ್.ಪೊನ್ನಣ್ಣ, ಶಾಸಕ
ಟಿಲಿ ರೇಡಿಯೊಲಜಿ ಮೂಲಕ ಎಂಆರ್‌ಐ ಕಾರ್ಯನಿರ್ವಹಿಸಲಿದೆ. ಇದು ಅನೇಕ ಕಾಯಿಲೆಗಳನ್ನು ಪತ್ತೆ ಹಚ್ಚುವುದಕ್ಕೆ ಅನುಕೂಲಕರ.
ಡಾ.ವಿಶಾಲ್‌ಕುಮಾರ್, ಡೀನ್ ಮತ್ತು ನಿರ್ದೇಶಕ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ.
ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ ಅವರು ಭಾನುವಾರ ಮಡಿಕೇರಿಯ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆಯಲ್ಲಿ (ಜಿಲ್ಲಾಸ್ಪತ್ರೆ) ಎಂಆರ್‌ಐ ಸ್ಕ್ಯಾನಿಂಗ್ ಯಂತ್ರವನ್ನು ಬಳಕೆಗೆ ಮುಕ್ತಗೊಳಿಸಿದರು
ಮಡಿಕೇರಿಯ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆಯಲ್ಲಿ (ಜಿಲ್ಲಾಸ್ಪತ್ರೆ) ಎಂಆರ್‌ಐ ಸ್ಕ್ಯಾನಿಂಗ್ ಯಂತ್ರದ ಉದ್ಘಾಟನಾ ಸಮಾರಂಭದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಮತ್ತು ನಿರ್ದೇಶಕ ಡಾ.ವಿಶಾಲ್‌ಕುಮಾರ್ ಶಾಸಕ ಡಾ.ಮಂತರ್‌ಗೌಡ ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ ಶಾಸಕ ಎ.ಎಸ್.ಪೊನ್ನಣ್ಣ ವೈದ್ಯಕೀಯ ಶಿಕ್ಷಣ ಇಲಾಖೆಯ ಮುಖ್ಯ ಕಾರ್ಯದರ್ಶಿ ಮೊಹಮ್ಮದ್ ಮೊಸಿನ್ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಭಾಗವಹಿಸಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.