ADVERTISEMENT

ಮಡಿಕೇರಿ: ಅಶ್ವಿನಿ ಆಸ್ಪತ್ರೆಯಲ್ಲಿ ಹಲವು ಚಿಕಿತ್ಸೆ

ಚಿಕಿತ್ಸಾ ಸೌಲಭ್ಯ ಪರಿಶೀಲಿಸಿದ ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2020, 19:45 IST
Last Updated 8 ಏಪ್ರಿಲ್ 2020, 19:45 IST
ಮಡಿಕೇರಿಯ ಅಶ್ವಿನಿ ಆಸ್ಪತ್ರೆಗೆ ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್ ಅವರು ಬುಧವಾರ ಭೇಟಿ ನೀಡಿ ಪರಿಶೀಲಿಸಿದರು
ಮಡಿಕೇರಿಯ ಅಶ್ವಿನಿ ಆಸ್ಪತ್ರೆಗೆ ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್ ಅವರು ಬುಧವಾರ ಭೇಟಿ ನೀಡಿ ಪರಿಶೀಲಿಸಿದರು   

ಮಡಿಕೇರಿ: ನಗರದ ಕೋವಿಡ್ ಆಸ್ಪತ್ರೆ (ಜಿಲ್ಲಾ ಆಸ್ಪತ್ರೆ) ಮತ್ತು ಅಶ್ವಿನಿ ಆಸ್ಪತ್ರೆಗೆ ಬುಧವಾರ ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರು ಭೇಟಿ ನೀಡಿ, ಅಲ್ಲಿನ ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಿದರು.

ಅಶ್ವಿನಿ ಆಸ್ಪತ್ರೆಯನ್ನು ಸಂಪೂರ್ಣವಾಗಿ ಜಿಲ್ಲಾಡಳಿತದ ವಶಕ್ಕೆ ಪಡೆಯಲಾಗಿದೆ. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಅಧೀನದ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯನ್ನು ಸಂಪೂರ್ಣವಾಗಿ ‘ಪ್ರತ್ಯೇಕ ಕೋವಿಡ್’ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗಿದೆ.

ಸ್ತ್ರೀರೋಗ ಸಂಬಂಧಿತ ಸೇವೆಗಳು, ಶಿಶು ವೈದ್ಯಕೀಯ ಸೇವೆಗಳು, ಸಿ.ಟಿ ಸ್ಕ್ಯಾನ್, ಡಯಾಲಿಸಿಸ್, ಮಹಿಳೆಯರು ಮತ್ತು ಮಕ್ಕಳ ಔಷಧಿಗಳು, ಮಹಿಳೆಯರ ಮತ್ತು ಮಕ್ಕಳಿಗೆ ಸಂಬಂಧಿಸಿದ ಲ್ಯಾಬ್ ಪರೀಕ್ಷೆ ಸೇವೆಗಳನ್ನು ಹೊರತುಪಡಿಸಿ ಉಳಿದ ಎಲ್ಲ ಸೇವೆಗಳನ್ನು ಅಶ್ವಿನಿ ಆಸ್ಪತ್ರೆಯಲ್ಲಿ ಒದಗಿಸಲಾಗುತ್ತಿದೆ. ಮಹಿಳೆಯರ ಮತ್ತು ಮಕ್ಕಳ ಆಸ್ಪತ್ರೆಯ ಕಟ್ಟಡ ಈ ಹಿಂದೆ ಕಾರ್ಯ ನಿರ್ವಹಿಸುತ್ತಿದ್ದ ಕಟ್ಟಡದಲ್ಲೇ ಕಾರ್ಯ ಕಾರ್ಯ ನಿರ್ವಹಿಸುತ್ತಿದೆ. ಸಾರ್ವಜನಿಕರು ಈ ಬದಲಾವಣೆಯನ್ನು ಗಮನಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದರು.

ADVERTISEMENT

ಸರ್ಕಾರದ ನಿರ್ದೇಶನದ ಪ್ರಕಾರ ಮಡಿಕೇರಿಯ ಕೋವಿಡ್ ಆಸ್ಪತ್ರೆಯಲ್ಲಿ ಒಟ್ಟು 250 ಹಾಸಿಗೆಗಳನ್ನು ವ್ಯವಸ್ಥೆ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಕೊಡಗು ವೈದ್ಯಕೀಯ ಕಾಲೇಜಿನ ಡೀನ್ ಡಾ.ಕಾರ್ಯಪ್ಪ, ಅಧೀಕ್ಷಕ ಡಾ.ಲೋಕೇಶ್, ಡಾ.ಮಂಜುನಾಥ್ ಹಾಜರಿದ್ದರು.

ತಹಶೀಲ್ದಾರ್ ಭೇಟಿ: ತಹಶೀಲ್ದಾರ್‌ ಮಹೇಶ್ ಅವರು ಬುಧವಾರ ನಗರದ ಚೈನ್‍ಗೇಟ್ ಬಳಿಯ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಆಶ್ರಯ ಪಡೆದಿರುವ ಕಾರ್ಮಿಕರ ಕುಂದುಕೊರತೆ ಆಲಿಸಿದರು.

55 ಕಾರ್ಮಿಕರು ಮತ್ತು 13 ಮಕ್ಕಳು ಸೇರಿದಂತೆ 68 ಜನರಿಗೆ ಕಾರ್ಮಿಕ ಇಲಾಖೆ ವತಿಯಿಂದ ಮಾಸ್ಕ್ ಮತ್ತು ಕೊಬ್ಬರಿ ಎಣ್ಣೆಯನ್ನು ವಿತರಿಸಲಾಯಿತು. ಕಾರ್ಮಿಕ ನಿರೀಕ್ಷಕ ಎಂ.ಎಂ. ಯತ್ನಟ್ಟಿ ಹಾಜರಿದ್ದರು.

ಕುಶಾಲನಗರದ ಸಮೀಪದ ಬಸವನಹಳ್ಳಿಯ ಹೊಸಕಾಡಿನಲ್ಲಿ ಶೇಡ್‍ನಲ್ಲಿ ವಾಸವಾಗಿರುವ ಕಾರ್ಮಿಕರ ಕುಂದುಕೊರತೆಯನ್ನು ಹಿರಿಯ ಕಾರ್ಮಿಕ ನಿರೀಕ್ಷಕ ಎಂ.ಎಂ.ಯತ್ನಟ್ಟಿ ವಿಚಾರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.