ADVERTISEMENT

ಕೊಡಗು ಜಿಲ್ಲೆಯ 5 ಕಡೆ ಖರೀದಿ ಕೇಂದ್ರ ಆರಂಭ: ಜಿಲ್ಲಾಧಿಕಾರಿ ವೆಂಕಟ್ ರಾಜಾ

ಸಾಮಾನ್ಯ ಭತ್ತ ಪ್ರತಿ ಕ್ವಿಂಟಾಲ್‌ಗೆ ₹ 2,369 ಹಾಗೂ ರಾಗಿ ಪ್ರತಿ ಕ್ವಿಂಟಲ್‌ಗೆ ₹ 4,886 ರೂ ನಿಗದಿ

​ಪ್ರಜಾವಾಣಿ ವಾರ್ತೆ
Published 30 ಅಕ್ಟೋಬರ್ 2025, 5:18 IST
Last Updated 30 ಅಕ್ಟೋಬರ್ 2025, 5:18 IST
ಸಭೆಯಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿದರು
ಸಭೆಯಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿದರು   

ಮಡಿಕೇರಿ: ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ರಾಗಿ ಖರೀದಿ ಕೇಂದ್ರವನ್ನು ಕೊಡಗು ಜಿಲ್ಲೆಯ 5 ಕಡೆ ತೆರೆಯಲಾಗಿದೆ. ಇಲ್ಲಿ ರೈತರು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುವ ಮೂಲಕ ಲಾಭ ಪಡೆಯಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ 2025-26 ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಬುಧವಾರ ನಡೆದ ಕಾರ್ಯಪಡೆ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಮಡಿಕೇರಿ, ಕುಶಾಲನಗರ, ಗೋಣಿಕೊಪ್ಪಲು, ಸೋಮವಾರಪೇಟೆಯ ಎಪಿಎಂಸಿ ಆವರಣದಲ್ಲಿ ಮತ್ತು ವಿರಾಜಪೇಟೆ ಪಟ್ಟಣದ ತಾಲ್ಲೂಕು ಕೃಷಿ ಇಲಾಖೆ ಕಚೇರಿಯಲ್ಲಿ ಖರೀದಿ ಕೇಂದ್ರ ತೆರೆಯಲಾಗಿದೆ ಎಂದರು.

ADVERTISEMENT

ಆಹಾರ, ನಾಗರಿಕ ಸರಬರಾಜು ನಿಗಮದವರನ್ನು ಖರೀದಿ ಏಜೆನ್ಸಿಯನ್ನಾಗಿ ಸರ್ಕಾರ ನೇಮಕ ಮಾಡಿದ್ದು, ಖರೀದಿ ಪ್ರಕ್ರಿಯೆಯು ಇವರ ಮುಖಾಂತರ ನಡೆಯುತ್ತಿದೆ ಎಂದು ಹೇಳಿದರು.

ರೈತರ ನೋಂದಣಿಗೆ ತಾಂತ್ರಿಕ ತೊಂದರೆಗಳು ಕಂಡು ಬಂದಲ್ಲಿ ಕೂಡಲೇ ಸರಿಪಡಿಸಬೇಕು. ಆ ನಿಟ್ಟಿನಲ್ಲಿ ಕೃಷಿಕರಿಗೆ ಮಾಹಿತಿ ನೀಡಬೇಕು ಎಂದು ಅವರು ಸೂಚಿಸಿದರು.

ಖರೀದಿ ಕೇಂದ್ರಗಳಲ್ಲಿ ರೈತರಿಂದ ಖರೀದಿ ಮಾಡಿದ ಭತ್ತದ ಹಾಗೂ ರಾಗಿ ಮೊತ್ತವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ. ನೋಂದಣಿ ಕೇಂದ್ರದಲ್ಲಿ ರೈತರು ‘ಫ್ರೂಟ್ ಐಡಿ’, ಆಧಾರ್ ಸಂಖ್ಯೆಗೆ ಜೋಡಣೆಯಾದ ತಮ್ಮ ಎನ್‍ಪಿಸಿಐ ಬ್ಯಾಂಕ್ ಖಾತೆಯ ವಿವರಗಳನ್ನು ನೀಡಬೇಕಿದೆ ಎಂದು ತಿಳಿಸಿದರು.

ಭತ್ತದ ಖರೀದಿ ನೋಂದಣಿ ಕುರಿತು ಗ್ರಾಮೀಣ ಭಾಗದಲ್ಲಿ ರೈತರಿಗೆ, ಮುಖಂಡರಿಗೆ ಹಾಗೂ ರೈತ ಸಂಪರ್ಕ ಕೇಂದ್ರಗಳ ಮೂಲಕ ಹೆಚ್ಚಿನ ಮಾಹಿತಿ ನೀಡಬೇಕು ಹಾಗೂ ರೈತರ ನೋಂದಣಿ ಕೇಂದ್ರಗಳು ಹಾಗೂ ಭತ್ತ ಖರೀದಿ ಕೇಂದ್ರಗಳ ಕುರಿತು ವಿವರಗಳನ್ನು ನೀಡಬೇಕು ಎಂದು ಅವರು ಖರೀದಿ ಏಜೆನ್ಸಿಯವರಿಗೆ ಸೂಚಿಸಿದರು.

ಆಹಾರ ಇಲಾಖೆಯ ಜಂಟಿ ನಿರ್ದೇಶಕ ಮಂಟೇಸ್ವಾಮಿ ಮಾತನಾಡಿ, ‘ಕೆಲವೇ ದಿನಗಳಲ್ಲಿ ಭತ್ತ, ರಾಗಿ ಖರೀದಿ ಪ್ರಕ್ರಿಯೆ ನಡೆಯಲಿದೆ. ಸಾಮಾನ್ಯ ಭತ್ತ ಪ್ರತಿ ಕ್ವಿಂಟಾಲ್‌ಗೆ ₹ 2,369 ಹಾಗೂ ರಾಗಿ ಪ್ರತಿ ಕ್ವಿಂಟಲ್‌ಗೆ ₹ 4,886 ರೂ ನಿಗದಿಪಡಿಸಲಾಗಿದೆ ಎಂದರು.

ಭತ್ತವನ್ನು ಮಾರಾಟ ಮಾಡಬೇಕಾದ ರೈತರು ಈಗಾಗಲೇ ಪ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿಯಾಗಿರಬೇಕು. ಒಂದು ವೇಳೆ ರೈತರು ನೋಂದಣಿ ಮಾಡದಿದ್ದಲ್ಲಿ ಪ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಂಡು, ತಾವು ಬೆಳದ ಭತ್ತವನ್ನು ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಬಹುದಾಗಿದೆ ಎಂದು ಅವರು ಮಾಹಿತಿ ನೀಡಿದರು.

ಸರ್ಕಾರವು ಪೌಷ್ಟಿಕಾಂಶತೆಯಿಂದ ಕೂಡಿದ ಸಾರವರ್ದಿತ ಅಕ್ಕಿಯನ್ನು ಫಲಾನುಭವಿಗಳಿಗೆ ನೀಡಲು ಉದ್ದೇಶಿಸಿದ್ದು, ಈ ಸಂಬಂಧ ಅಕ್ಕಿ ಗಿರಣಿಗಳಲ್ಲಿ ಹಲ್ಲಿಂಗ್ ಮಾಡುವಾಗ ಸಾರವರ್ದಿತ ಅಕ್ಕಿಯನ್ನು ತಯಾರು ಮಾಡಲು ಕಡ್ಡಾಯವಾಗಿ ಅಕ್ಕಿ ಗಿರಣಿ ಮಾಲೀಕರುಗಳು ಬ್ಲೆಂಡಿಂಗ್ ಮಿಷನ್ ಅನ್ನು ಅಳವಡಿಸಲು ಹಾಗೂ ಅಳವಡಿಸದ ಅಕ್ಕಿಗಿರಣಿಗಳಿಗೆ ಸರ್ಕಾರದ ಆದೇಶದಂತೆ ಹಲ್ಲಿಂಗ್‌ಗೆ ಭತ್ತವನ್ನು ನೀಡಲು ನೀಡಲು ಸಾಧ್ಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಕೃಷಿ ಇಲಾಖೆಯ ಉಪ ನಿರ್ದೇಶಕ ಡಿ.ಎಸ್.ಸೋಮಶೇಖರ, ಕೃಷಿ ಉತ್ಪನ್ನ ಮಾರುಕಟ್ಟೆ ಇಲಾಖೆಯ ಸಹಾಯಕ ನಿರ್ದೇಶಕ ಹಂಪಣ್ಣ, ಆಹಾರ ನಿಗಮದ ಜಿಲ್ಲಾ ವ್ಯವಸ್ಥಾಪಕ ಕಿರಣ್, ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ವ್ಯವಸ್ಥಾಪಕ ಎಚ್.ಎಂ.ನಾಗನಾಯ್ಕ, ಎಪಿಎಂಸಿ ಕಾರ್ಯದರ್ಶಿ ಅನಿಲ್, ಆಹಾರ ನಿರೀಕ್ಷಕರಾದ ಯಶಸ್ವಿನಿ, ಸ್ವಾತಿ, ವೀಣಾ, ಪಿ.ಆರ್.ನೀನಾಕುಮಾರಿ, ಕಾನೂನು ಮಾಪನ ಶಾಸ್ತ್ರ ಇಲಾಖೆಯ ನಿರೀಕ್ಷಕರಾದ ನರೇಂದ್ರ, ಮೈಕಲ್, ಕಿರಣ್ ಭಾಗವಹಿಸಿದ್ದರು.

ಸಭೆಯಲ್ಲಿ ಭಾಗವಹಿಸಿದ್ದ ಅಧಿಕಾರಿಗಳು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.