ADVERTISEMENT

ಮಹಿಷಿ ಆಯೋಗದ ವರದಿ ಕಾಯ್ದೆಯಾಗಿ ಜಾರಿಗೆ ಬರಲಿ: ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2025, 7:38 IST
Last Updated 7 ನವೆಂಬರ್ 2025, 7:38 IST
ಕುಶಾಲನಗರದಲ್ಲಿ ಬುಧವಾರ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣ್ ಗೌಡ ಮಾತನಾಡಿದರು
ಕುಶಾಲನಗರದಲ್ಲಿ ಬುಧವಾರ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣ್ ಗೌಡ ಮಾತನಾಡಿದರು   

ಕುಶಾಲನಗರ: ಕನ್ನಡ ನಾಡು, ನುಡಿ, ನೆಲ, ಜಲ ರಕ್ಷಣೆಯೊಂದಿಗೆ ಕನ್ನಡಿಗರ ಭವಿಷ್ಯದ ಹಿತದೃಷ್ಟಿಯಿಂದ ಡಾ.ಸರೋಜಿನಿ ಮಹಿಷಿ ಆಯೋಗದ ವರದಿಯನ್ನು ಅನುಷ್ಠಾನ ಮಾಡಬೇಕು. ಜೊತೆಗೆ ವರದಿಯನ್ನು ಕಾಯ್ದೆಯಾಗಿ ಜಾರಿಗೊಳಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

ಇಲ್ಲಿನ ಫಾರ್ಪಲ್ ಫಾಮ್ ಸಭಾಂಗಣದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಹಿಷಿ ವರದಿಯನ್ನು ಕಾಯ್ದೆ ರೂಪದಲ್ಲಿ ಜಾರಿಗೊಳಿಸಿದಾಗ ಮಾತ್ರ ಎಲ್ಲ ಕಾಲಕ್ಕೂ ಕನ್ನಡದ ಮಕ್ಕಳಿಗೆ ಉದ್ಯೋಗ ದೊರೆಯುತ್ತದೆ ಎಂದರು.

ನಮ್ಮ ಮನವಿ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸಂಪುಟದಲ್ಲಿ ಚರ್ಚೆ ಮಾಡಿ ವರದಿಯನ್ನು ಅನುಷ್ಠಾನ ಮಾಡಲು ಮುಂದಾದರು. ಆದರೆ, ಉದ್ಯಮಿಗಳು ಹಾಗೂ ಐಟಿಬಿಟಿ ಕಂಪನಿಗಳು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ವರದಿ ಅನುಷ್ಠಾನ ಕೈಬಿಟ್ಟಿದ್ದಾರೆ ಎಂದು ಉದ್ಯಮಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ಕೇಂದ್ರಕ್ಕೆ ತೆರಿಗೆ ಪಾವತಿಯಲ್ಲಿ ಕರ್ನಾಟಕ ರಾಜ್ಯ 2ನೇ ಸ್ಥಾನದಲ್ಲಿದೆ. ಆದರೆ, ಕೇಂದ್ರ ಸರ್ಕಾರ ಮಾತ್ರ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡುತ್ತಿದೆ. ಇದರಿಂದ ರಾಜ್ಯಕ್ಕೆ ಅನ್ಯಾಯ ಆಗುಗುತ್ತಿದೆ. ದಕ್ಷಿಣ ಭಾರತದ ರಾಜ್ಯಗಳ ಬುದ್ಧಿಜೀವಿಗಳು, ಸಾಹಿತಿಗಳು, ಸಂಘಟನೆಗಳ ಮುಖಂಡರು ಹಾಗೂ ಹೋರಾಟಗಾರರ ಸಭೆಯನ್ನು ನ.29 ರಂದು ಬೆಂಗಳೂರಿನಲ್ಲಿ ಕರೆಯಲಾಗಿದೆ. ಈ ಸಭೆಯಲ್ಲಿ ಚರ್ಚಿಸಿ ಕೇಂದ್ರದ ಮೇಲೆ ಒತ್ತಡ ಹಾಕಲಾಗುತ್ತದೆ ಎಂದರು.

ಕಾವೇರಿ, ಕೃಷ್ಣೆ, ಮಹದಾಯಿ ನದಿಗಳ ಸಮಸ್ಯೆ ಇದುವರೆಗೂ ಪರಿಹಾರ ಕಾಣಲು ಸಾಧ್ಯವಾಗಿಲ್ಲ. ಬೆಳಗಾವಿ ಸಮಸ್ಯೆ ಬಗೆಹರಿದಿಲ್ಲ. ಇದಕ್ಕೆಲ್ಲ ರಾಜಕಾರಣಿಗಳ ಇಚ್ಛಾಶಕ್ತಿ ಕೊರತೆ ಕಾರಣವಾಗಿದೆ. ರಾಜ್ಯದ ಹಾಗೂ ಕನ್ನಡಿಗರ ಬಗ್ಗೆ ಕಾಳಜಿ ಇಲ್ಲದ ಬೇಜವಾಬ್ದಾರಿ ರಾಜಕಾರಣಿಗಳು ವಿಧಾನಸಭೆಯಲ್ಲಿ ಕುಳಿತಿರುವ ಹಿನ್ನೆಲೆಯಲ್ಲಿ ಯಾವುದೇ ಸಮಸ್ಯೆ ಬಗೆಹರಿದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ತ್ರಿಭಾಷಾ ನೀತಿ ಇದೆ. ಕೇಂದ್ರ ಸರ್ಕಾರ ಬಲವಂತವಾಗಿ ಹಿಂದಿ ಹೇರಿಕೆ ಮಾಡುತ್ತಿದೆ. ಇದರಿಂದ ಕನ್ನಡದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಭಾಷೆ ವಿಷಯದಲ್ಲಿ ಪ್ರತಿ ವರ್ಷ ಲಕ್ಷಾಂತರ ವಿದ್ಯಾರ್ಥಿಗಳು ಅನುತ್ತೀರ್ಣರಾಗುತ್ತಿದ್ದಾರೆ ಇದರಿಂದ ಅವರ ಭವಿಷ್ಯಕ್ಕೆ ಹಿನ್ನಡೆ ಆಗುತ್ತಿದೆ. ತಮಿಳುನಾಡು, ಮಹಾರಾಷ್ಟ್ರದಲ್ಲಿ ದ್ವಿಭಾಷಾ ವ್ಯವಸ್ಥೆ ಇದೆ. ಅದೇ ರೀತಿ ರಾಜ್ಯದಲ್ಲೂ ದ್ವಿಭಾಷಾ ಸೂತ್ರ ಜಾರಿಗೆ ತರಬೇಕು ಎಂದು ನಾರಾಯಣ ಗೌಡ ಒತ್ತಾಯಿಸಿದರು.

ರಾಜ್ಯದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಹುಟ್ಟಿ 27 ವರ್ಷ ಪೂರೈಸಿದ್ದು, ಕನ್ನಡ ನಾಡು, ನುಡಿ, ನೆಲ, ಜಲ ಸಂರಕ್ಷಣೆಗೆ ಟೊಂಕ ಕಟ್ಟಿ ಹೋರಾಟ ನಡೆಸಿಕೊಂಡುಬಂದಿದೆ. ಆದರೆ, ಕೆಲವು ವ್ಯಕ್ತಿಗಳು ನಮ್ಮ ಸಂಘಟನೆಯ ಹೆಸರನ್ನು ಬಳಸಿಕೊಂಡು ನಕಲಿ ಬ್ರಾಂಡ್ ಸಂಘಟನೆಗಳನ್ನು ಕಟ್ಟಿಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯ ಬಗ್ಗೆ ನೈಜ ಪ್ರೀತಿ, ಬದ್ಧತೆ ಇದ್ದರೆ ಬೇರೆ ಹೆಸರಿನಲ್ಲಿ ಸಂಘಟನೆ ಕಟ್ಟಿ ಹೋರಾಟ ಮಾಡಲಿ ಎಂದು ಸವಾಲು ಹಾಕಿದರು. ನಮ್ಮ ಸಂಘಟನೆಯೆ ಅಧಿಕೃತ ಎಂಬ ತೀರ್ಪು ಬಂದಿದ್ದರೂ ಕೂಡ ಕರವೇ ಹೆಸರು ಬಳಕೆ ಮಾಡುವ ಮೂಲಕ ಕಾನೂನಿನ ಅಪಚಾರ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕರ್ನಾಟಕ ರಕ್ಷಣಾ ವೇದಿಕೆ ಮಹಿಳಾ ಘಟಕದ ಸಂಚಾಲಕಿ ದೀಪಾ ಪೂಜಾರಿ, ಕೊಡಗು ಜಿಲ್ಲಾಧ್ಯಕ್ಷ ರಾಜು ಕೂಡಿಗೆ, ಮಹಿಳಾ ಘಟಕದ ಅಧ್ಯಕ್ಷೆ ಜ್ಯೋತಿ ಹೆಗ್ಗಡಹಳ್ಳಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.