ಮಡಿಕೇರಿ: ರಾಷ್ಟ್ರೀಯ ಜನಗಣತಿಯ ವೇಳೆ ಆದಿಮಸಂಜಾತ ಬುಡಕಟ್ಟು ಜನಾಂಗ ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಂ ಅನ್ನು ಸೇರಿಸಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ (ಸಿಎನ್‌ಸಿ) ಸಂಘಟನೆ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಶುಕ್ರವಾರ ಸತ್ಯಾಗ್ರಹ ನಡೆಸಿತು.
ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಮಾತನಾಡಿ, ರಾಷ್ಟ್ರೀಯ ಜನಗಣತಿ ಜೊತೆಗೆ ಜಾತಿವಾರು ಜನಗಣತಿ ನಡೆಸುವ ಬಗ್ಗೆ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ನಿರ್ಧಾರ ಸ್ವಾಗತಾರ್ಹ. ಕೊಡವ ಸಮುದಾಯದ ನಿಖರವಾದ ಪ್ರಾತಿನಿಧ್ಯಕ್ಕಾಗಿ ಜನಗಣತಿಯಲ್ಲಿ ಪ್ರತ್ಯೇಕ ಕೋಡ್ ಮತ್ತು ಕಾಲಂ ಬೇಕು. ಸರ್ಕಾರವು ಸಮುದಾಯದ ನಿರ್ದಿಷ್ಟ ಅಗತ್ಯಗಳನ್ನು ಅರ್ಥಮಾಡಿಕೊಳ್ಳಲು ಹಾಗೂ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಗಾಗಿ ಉದ್ದೇಶಿತ ನೀತಿಗಳನ್ನು ಅಭಿವೃದ್ಧಿಪಡಿಸಲು ಇದು ಅನುವು ಮಾಡಿಕೊಡುತ್ತದೆ ಎಂದು ಪ್ರತಿಪಾದಿಸಿದರು.
ಏಕ-ಜನಾಂಗೀಯ ಸಮುದಾಯವಾಗಿ ಕೊಡವರು ವಿಶಿಷ್ಟ ಸಾಂಸ್ಕೃತಿಕ ಮತ್ತು ಐತಿಹಾಸಿಕ ಕುರುಹುವನ್ನು ಹೊಂದಿದ್ದಾರೆ. ಪ್ರತ್ಯೇಕ ಕೋಡ್ ಮತ್ತು ಕಾಲಂ ಕೊಡವ ಸಮುದಾಯದ ವಿಶಿಷ್ಟ ಗುರುತು ಹಾಗೂ ಅಸ್ತಿತ್ವವನ್ನು ರಕ್ಷಿಸಲು ಸಹಾಯ ಮಾಡುತ್ತದೆ ಎಂದರು.
ನಂತರ, ಅವರು ಕೊಡವ ಸಮುದಾಯದ ವಿಶಿಷ್ಟ ನಂಬುಗೆಗಳು, ಆಚರಣೆಗಳನ್ನು ಕುರಿತು ಸವಿಸ್ತಾರವಾಗಿ ಮಾತನಾಡಿದರು.
1871–72 ರಿಂದ 1931ರವರೆಗಿನ ಜನಗಣತಿಯಲ್ಲಿ ಕೊಡವ ಕುಲವನ್ನು ಕೊಡವ ಲ್ಯಾಂಡ್‌ನ ಏಕ-ಜನಾಂಗೀಯ, ಸ್ವತಂತ್ರ, ಆದಿಮಸಂಜಾತ ಯೋಧ ಕುಲವೆಂದು ದಾಖಲಿಸಲಾಗಿತ್ತು. ಆದರೆ, 1941ರಿಂದ 2011ರವರೆಗೆ ಕೊಡವರನ್ನು ಆಡಳಿತಾತ್ಮಕ ಉದ್ದೇಶಗಳಿಗಾಗಿ ಸರ್ಕಾರ ಉದ್ದೇಶಪೂರ್ವಕವಾಗಿ ಇತರ ಸಮುದಾಯಗಳೊಂದಿಗೆ ವಿಲೀನಗೊಳಿಸಿತು. ಇದು ಕೊಡವ ಸಮುದಾಯದ ಗುರುತು ಮತ್ತು ಅಸ್ತಿತ್ವಕ್ಕೆ ಧಕ್ಕೆಯನ್ನುಂಟು ಮಾಡಿತು ಎಂದು ಅವರು ಬೇಸರ ವ್ಯಕ್ತಪಡಿಸಿದರು.
ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಬರುವ ಭಾರತದ ರಿಜಿಸ್ಟ್ರಾರ್ ಜನರಲ್ ಮತ್ತು ಜನಗಣತಿ ಆಯುಕ್ತರು ಹಾಗೂ ಅಂಕಿಅಂಶಗಳ ಸಚಿವಾಲಯವು ನ್ಯಾಯ ಮತ್ತು ಸಮಾನತೆಯ ಹಿತದೃಷ್ಟಿಯಿಂದ ಈ ವಿಷಯದಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಮನವಿ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರಿಗೆ ಸಲ್ಲಿಸಿದರು.
ಅರೆಯಡ ಸವಿತಾ, ಚೋಳಪಂಡ ಜ್ಯೋತಿ, ಮುದ್ದಿಯಡ ಲೀಲಾವತಿ, ಕಲಿಯಂಡ ಪ್ರಕಾಶ್, ಆಳಮಂಡ ಜೈ ಗಣಪತಿ, ಪಟ್ಟಮಾಡ ಕುಶ, ಅಜ್ಜಿಕುಟ್ಟಿರ ಲೋಕೇಶ್, ಅರೆಯಡ ಗಿರೀಶ್, ನಂದೇಟಿರ ರವಿ ಸುಬ್ಬಯ್ಯ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.