ADVERTISEMENT

ಕೂಡಿಗೆ: ರಾಷ್ಟ್ರೀಯ ರೈತ ದಿನಾಚರಣೆಯಲ್ಲಿ ತಾಕೇರಿ ಪೊನ್ನಪ್ಪ ಅಭಿಪ್ರಾಯ

​ಪ್ರಜಾವಾಣಿ ವಾರ್ತೆ
Published 25 ಡಿಸೆಂಬರ್ 2025, 6:21 IST
Last Updated 25 ಡಿಸೆಂಬರ್ 2025, 6:21 IST
ಕುಶಾಲನಗರ ಸಮೀಪದ ಕೂಡಿಗೆ ಕೃಷಿ ತರಬೇತಿ ಕೇಂದ್ರದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ರೈತ ದಿನಾಚರಣೆಯಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಧನೆ‌ ಮಾಡಿದ ಪ್ರಗತಿಪರ ಕೃಷಿಕರನ್ನು ಸನ್ಮಾನಿಸಲಾಯಿತು
ಕುಶಾಲನಗರ ಸಮೀಪದ ಕೂಡಿಗೆ ಕೃಷಿ ತರಬೇತಿ ಕೇಂದ್ರದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ರೈತ ದಿನಾಚರಣೆಯಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಧನೆ‌ ಮಾಡಿದ ಪ್ರಗತಿಪರ ಕೃಷಿಕರನ್ನು ಸನ್ಮಾನಿಸಲಾಯಿತು   

ಕುಶಾಲನಗರ: ‘ರೈತರು ದೇಶದ ಬೆನ್ನೆಲುಬು. ರಾಷ್ಟ್ರದ ಅಭಿವೃದ್ಧಿಗೆ ರೈತರ ಕೊಡುಗೆ ಅಪಾರ’ ಎಂದು ಕೊಡಗು ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ತಾಕೇರಿ ಪೊನ್ನಪ್ಪ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಕೊಡಗು ಜಿಲ್ಲಾ ಕೃಷಿ ಇಲಾಖೆ, ಕೃಷಿಕ ಸಮಾಜದ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಕೂಡಿಗೆ ಕೃಷಿ ತರಬೇತಿ ಕೇಂದ್ರದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ರೈತ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

‘ಭಾರತದ ಮಾಜಿ ಪ್ರಧಾಲಗ ಚೌಧರಿ ಚರಣ್ ಸಿಂಗ್ ಸ್ಮರಣಾರ್ಥ, ಅವರ ಜನ್ಮದಿನ ಡಿ.23ರಂದು ರಾಷ್ಟ್ರೀಯ ರೈತ ದಿನವನ್ನು ಆಚರಿಸಲಾಗುತ್ತದೆ. ಎಲ್ಲಾ ರೈತರಿಗೆ ಗೌರವ ಸಲ್ಲಿಸಲಾಗುತ್ತದೆ’ ಎಂದರು.

ADVERTISEMENT

ಜಿಲ್ಲಾ ಕೃಷಿ ಇಲಾಖೆ ಜಂಟಿ ನಿರ್ದೇಶಕ ಚಂದ್ರಶೇಖರ್ ಮಾತನಾಡಿ, ‘ಚರಣ್ ಸಿಂಗ್ ಅವರು ಅಲ್ಪಾವಧಿಗೆ ದೇಶದ ಪ್ರಧಾನ ಮಂತ್ರಿಯಾಗಿದ್ದರೂ ರೈತರ ಶ್ರೇಯೋಭಿವೃದ್ಧಿಗಾಗಿ ಹಲವು ಕಾರ್ಯಕ್ರಮ ಹಾಗೂ ಯೋಜನೆಗಳನ್ನು ರೂಪಿಸಿದ್ದರು’ ಎಂದರು.

‘ಇತ್ತೀಚಿನ ದಿನಗಳಲ್ಲಿ ರೈತರು ಬೆಳೆಯುವ ಯಾವುದೇ ಬೆಳೆಗಳಿಗೆ ಕೀಟ ಬಾಧೆ ಕಾಡುತ್ತಿದ್ದು, ಅದರ ಹತೋಟಿಗೆ ಕೃಷಿ ವಿಜ್ಞಾನಿಗಳು ನೀಡುವ ಸಲಹೆಗಳನ್ನು ರೈತರು ಪಾಲಿಸಬೇಕು’ ಎಂದರು.

‘ಪ್ರಧಾನ ಮಂತ್ರಿ ಸಣ್ಣ ಆಹಾರ ಸಂಸ್ಕರಣೆ ಹಾಗೂ ಉದ್ಯಮಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯಡಿ ಸಿಗುವ ಸವಲತ್ತುಗಳನ್ನು ರೈತರಿಗೆ ಒದಗಿಸಲಾಗುತ್ತಿದೆ. ಈಗಾಗಲೇ ₹7.5 ಕೋಟಿ ಸಹಾಯಧನದಲ್ಲಿ ಜಿಲ್ಲೆಯ 107 ಕೃಷಿಕರು ಪ್ರಯೋಜನ ಪಡೆದುಕೊಂಡಿದ್ದಾರೆ. ಅಲ್ಲದೇ ಬ್ಯಾಂಕುಗಳಲ್ಲಿ ಸಾಲ ಸೌಲಭ್ಯಪಡೆದು ಕಾಫಿ, ಜೇನು, ಮೀನು, ಚಪಾತಿ ಸಂಸ್ಕರಣೆ, ಎಣ್ಣೆಯ ಗಾಣಗಳು ಸೇರಿದಂತೆ ವಿವಿಧ ಆಹಾರಗಳ ಸಂಸ್ಕರಣೆಯಲ್ಲಿ ರೈತರು ತೊಡಗಿಸಿಕೊಂಡಿದ್ದಾರೆ’ ಎಂದರು.

ಕೃಷಿ ಇಲಾಖೆಯ ಉಪ ನಿರ್ದೇಶಕ ಸೋಮಶೇಖರ್, ಚೆಟ್ಟಳ್ಳಿ ಕೃಷಿ ಸಂಶೋಧನಾ ಕೇಂದ್ರದ ಕೃಷಿ ವಿಜ್ಞಾನಿಗಳಾದ ರಾಣಿ, ರಾಜೇಂದ್ರನ್ ಅವರು ರೈತರಿಗೆ ಉಪಯುಕ್ತ ಮಾಹಿತಿ ನೀಡಿದರು.

ಕೂಡುಮಂಗಳೂರು ಗ್ರಾಮ ಪಂಚಾಯತಿ ಅಧ್ಯಕ್ಷ ಭಾಸ್ಕರ್ ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಜಿಲ್ಲಾ ಕೃಷಿಕ ಸಮಾಜದ ಖಜಾಂಚಿ ರಮೇಶ್, ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಆರ್.ಗೋವಿಂದರಾಜು, ಉಪಾಧ್ಯಕ್ಷ ಉಮೇಶ್ ರಾಜೇಅರಸ್, ನಿರ್ದೇಶಕ ಬಿ.ಬಿ.ಭಾರತೀಶ್, ಹಾಸನ ಹಾಲು ಒಕ್ಕೂಟದ ನಿರ್ದೇಶಕ ಕೆ.ಕೆ.ಹೇಮಂತಕುಮಾರ್, ಕೃಷಿ ಇಲಾಖೆಯ ಯೋಜನಾ ನಿರ್ದೇಶಕಿ ಮೈತ್ರಿ, ಸಹಾಯಕ ಕೃಷಿ ನಿರ್ದೇಶಕ ಪರಮೇಶ್, ನಾಗೇಂದ್ರ, ಶಿವಮೂರ್ತಿ, ವೀರಣ್ಣ ಪಾಲ್ಗೊಂಡಿದ್ದರು.

ಸನ್ಮಾನ: ಕೃಷಿ ಪಂಡಿತ ಪ್ರಶಸ್ತಿ ವಿಜೇತ ರೈತರಾದ ಮರಗೋಡಿನ ಕೆ.ಜಿ.ಪ್ರೇಮ, ಉದಯೋನ್ಮುಖ ಕೃಷಿ ಪ್ರಶಸ್ತಿ ಪಡೆದ ಹಾಲಗುಂದ ಪಿ.ಬಿ.ಬೋಪಣ್ಣ, ಕಿರಗೂರು ರೇವತಿ, ರಾಜ್ಯಮಟ್ಟದ ಕೃಷಿ ಪ್ರಶಸ್ತಿ ವಿಜೇತ ರೈತ ಕಾಂತೂರಿನ ವಿ.ಎಂ.ಧನಂಜಯ, ಕಿಗ್ಗಾಲು ಪಿ.ಎಂ. ವೇಣುಕುಮಾರ್, ಕೆ.ಬಾಡಗದ ಬೋಪಣ್ಣ, ನಾಲ್ಲೇರಿಯ ಅಲ್ಲೂಮಾಡ ಲೀಲಾ ಅವರನ್ನು ಸನ್ಮಾನಿಸಲಾಯಿತು.

ರೈತ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದ ಸಭಿಕರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.