ADVERTISEMENT

ಕುಡಿಯುವ ನೀರು ಮೂಲಗಳ ಪರೀಕ್ಷೆ ಕಡ್ಡಾಯ

ಸಾಂಕ್ರಾಮಿಕ ರೋಗ ಹರಡದಂತೆ ಎಚ್ಚರಿಕೆ ವಹಿಸಿ: ಹೆಚ್ಚುವರಿ ಜಿಲ್ಲಾಧಿಕಾರಿ

​ಪ್ರಜಾವಾಣಿ ವಾರ್ತೆ
Published 20 ಮೇ 2019, 13:11 IST
Last Updated 20 ಮೇ 2019, 13:11 IST

ಮಡಿಕೇರಿ: ಸಾರ್ವಜನಿಕ ಕುಡಿಯುವ ನೀರಿನ ಘಟಕಗಳಲ್ಲಿ ನೀರಿನ ಪರೀಕ್ಷೆ ನಡೆಸಿ, ಕುಡಿಯಲು ಯೋಗ್ಯವಾಗಿದೆಯೇ ಎಂಬುದನ್ನು ಖಾತರಿ ಪಡಿಸಿಕೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪಿ. ಶಿವರಾಜುಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಈಚೆಗೆ ನಡೆದ ಸಮನ್ವಯ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಮೊದಲ ಹಂತವಾಗಿ ಎಲ್ಲ ಶಾಲೆ, ವಿದ್ಯಾರ್ಥಿ ನಿಲಯಗಳು ಮತ್ತು ಕಲ್ಯಾಣ ಮಂದಿರಗಳಲ್ಲಿ ಕುಡಿಯುವ ನೀರಿನ ಪರೀಕ್ಷೆ ನಡೆಸಬೇಕು ಎಂದು ಹೇಳಿದರು.

ADVERTISEMENT

ಕಲುಷಿತ ನೀರಿನ ಬಳಕೆಗೆ ಕಡಿವಾಣ ಹಾಕಿ ಸಾಂಕ್ರಾಮಿಕ ರೋಗಗಳು ಹರಡದಂತೆ ಎಚ್ಚರ ವಹಿಸಿ ಎಂದು ಸೂಚಿಸಿದರು.

ಜಿಲ್ಲೆಯಲ್ಲಿ 356 ಕಡೆಗಳಲ್ಲಿ ಬಳಕೆಗೆ ಯೋಗ್ಯವಾದ ಕುಡಿಯುವ ನೀರಿನ ಮೂಲಗಳಿದ್ದು, ಇವುಗಳ ನೀರನ್ನು ಪರೀಕ್ಷಿಸಿ ವರದಿ ಪಡೆದುಕೊಳ್ಳಲಾಗಿದೆ. ಜಿಲ್ಲೆಯಲ್ಲಿ 17 ಕೊಳವೆ ಬಾವಿಗಳ ನೀರು ಕುಡಿಯಲು ಯೋಗ್ಯವಿಲ್ಲ ಎಂದು ಗುರುತಿಸಿ ಈ ಮೂಲಗಳ ನೀರಿನ ಬಳಕೆ ನಿಷೇಧಿಸಲಾಗಿದೆ ಎಂದು ಮೋಹನ್‌ ಸಭೆಯ ಗಮನಕ್ಕೆ ತಂದರು.

ಮೇ 16ರಂದು ಜಿಲ್ಲೆಯಲ್ಲಿ ಡೆಂಗಿ ನಿಯಂತ್ರಣ ಅರಿವು ಕಾರ್ಯಕ್ರಮ ನಡೆಸಲಾಗಿದ್ದು, ಜಿಲ್ಲೆಯ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಡೆಂಗಿ ನಿಯಂತ್ರಣದ ಕುರಿತು ಸಾರ್ವಜನಿಕರಿಗೆ ಹೆಚ್ಚಿನ ಜಾಗೃತಿ ಮೂಡಿಸುತ್ತಿದ್ದೇವೆ ಎಂದು ತಿಳಿಸಿದರು.

ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಹಾವು ಕಡಿತಕ್ಕೆ ಹಾಗೂ ನಾಯಿ ಕಡಿತಕ್ಕೆ ಔಷಧದ ಕೊರತೆ ಇರುವುದಿಲ್ಲ ಎಂದು ತಿಳಿಸಿದರು.

ವಿದ್ಯಾರ್ಥಿ ನಿಲಯಗಳಲ್ಲಿ, ಕೈಗಾರಿಕಾ ಪ್ರದೇಶಗಳ ವ್ಯಾಪ್ತಿಯಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವುದು, ಹಾಡಿಗಳಲ್ಲಿ ಹಾಗೂ ಕುಗ್ರಾಮಗಳಲ್ಲಿ ವಾಸಿಸುವ ಜನರಿಗೆ ಡೆಂಗಿ ನಿಯಂತ್ರಣ ಕುರಿತು ಹೆಚ್ಚಿನ ಅರಿವು ಮೂಡಿಸಬೇಕು ಎಂದು ಪಿ.ಶಿವರಾಜು ಹೇಳಿದರು.

ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ.ಶಿವಕುಮಾರ್, ನಗರಸಭೆ ಆಯುಕ್ತ ರಮೇಶ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆಂಚಪ್ಪ, ಪರಿಸರ ಅಧಿಕಾರಿ ಗಣೇಶನ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.