ADVERTISEMENT

ಕುಡಿಯುವ ನೀರು ಪೂರೈಕೆಗೆ ಸೂಚನೆ

ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜ್‌ ನೇತೃತ್ವದಲ್ಲಿ ಸಭೆ

​ಪ್ರಜಾವಾಣಿ ವಾರ್ತೆ
Published 25 ಏಪ್ರಿಲ್ 2019, 20:00 IST
Last Updated 25 ಏಪ್ರಿಲ್ 2019, 20:00 IST
ಸಭೆಯಲ್ಲಿ ಪಾಲ್ಗೊಂಡಿದ್ದ ವಿವಿಧ ಇಲಾಖೆಯ ಅಧಿಕಾರಿಗಳು
ಸಭೆಯಲ್ಲಿ ಪಾಲ್ಗೊಂಡಿದ್ದ ವಿವಿಧ ಇಲಾಖೆಯ ಅಧಿಕಾರಿಗಳು   

ಮಡಿಕೇರಿ: ಜಿಲ್ಲೆಯ ವಿವಿಧೆಡೆ ಕುಡಿಯುವ ನೀರಿನ ಸಮಸ್ಯೆಯಿದ್ದು, ನೀರು ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪಿ. ಶಿವರಾಜು ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕುಡಿಯುವ ನೀರು ಹಾಗೂ ಬರ ನಿರ್ವಹಣೆ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕುಡಿಯುವ ನೀರು ವ್ಯತ್ಯಯ ಉಂಟಾಗದಂತೆ ನೋಡಿಕೊಳ್ಳಬೇಕು; ಕುಡಿಯುವ ನೀರಿನ ಸಂಬಂಧ ಸಮಸ್ಯೆಗಳು ಕೇಳಿ ಬಂದಲ್ಲಿ ತಕ್ಷಣವೇ ತಹಶೀಲ್ದಾರ್‌, ಎಂಜಿನಿಯರ್‌ ಸ್ಥಳಕ್ಕೆ ಭೇಟಿ ನೀಡಿ ಪರಿಹರಿಸಬೇಕು ಎಂದು ಸೂಚಿಸಿದರು.

ADVERTISEMENT

ಜಿಲ್ಲಾ ವ್ಯಾಪ್ತಿಯಲ್ಲಿನ ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳ ಪಟ್ಟಿ ಮಾಡಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಜಾನುವಾರುಗಳಿಗೆ ಮೇವು, ಗೋಶಾಲೆ ತೆರೆಯುವುದು, ಮೇವು ಬ್ಯಾಂಕ್ ನಿರ್ಮಾಣ ಮತ್ತಿತರ ಬಗ್ಗೆ ಗಮನಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಮಳೆಗಾಲ ಆರಂಭಕ್ಕೂ ಮುನ್ನವೇ ತಯಾರಿ ಮಾಡಿಕೊಳ್ಳಬೇಕಿದೆ. ಮಳೆಯಿಂದ ಹೆಚ್ಚಿನ ಹಾನಿಯಾಗುವ ಸಾಧ್ಯತೆ ಇರುವುದರಿಂದ ಅಧಿಕಾರಿಗಳು ಈಗಾಗಲೇ ಪ್ರಕೃತಿ ವಿಕೋಪ ಸಂಭವಿಸಿದ ಗ್ರಾಮಗಳಿಗೆ ಭೇಟಿ ನೀಡುವ ಮೂಲಕ ಸದ್ಯದ ಸ್ಥಿತಿಗತಿಯ ಮಾಹಿತಿಯನ್ನು ಪಡೆದುಕೊಳ್ಳಬೇಕು ಸಲಹೆ ನೀಡಿದರು.

ಪ್ರಕೃತಿ ವಿಕೋಪದಡಿ ನಿರ್ಮಾಣವಾಗುತ್ತಿರುವ ಮನೆಗಳ ನಿರ್ಮಾಣ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಎಂಜಿನಿಯರ್‌ಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಎಂಜಿನಿಯರ್ ರೇವಣ್ಣವರ್ ಮಾತನಾಡಿ, ಕುಡಿಯುವ ನೀರು ಸಂಬಂಧಿಸಿದಂತೆ ಜಿಲ್ಲೆಯ ಮೂರು ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಣೆಯಾಗಿದ್ದು, ಕುಡಿಯುವ ನೀರು ಸಂಬಂಧ ಹೆಚ್ಚಿನ ಗಮನಹರಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಜಾನುವಾರುಗಳಿಗೆ ಕುಡಿಯುವ ನೀರಿನ ವ್ಯವಸ್ಥೆಯಿದೆ. ಜಾನುವಾರುಗಳಿಗೆ ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮವಹಿಸಲು ಗ್ರಾಮ ಪಂಚಾಯಿತಿ ಮೂಲಕ ನೀರಿನ ತೊಟ್ಟಿ ಅಳವಡಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಪಶುಪಾಲನಾ ಇಲಾಖೆ ಉಪ ನಿರ್ದೇಶಕ ತಮ್ಮಯ್ಯ ಹೇಳಿದರು. ‌

ಡಿಎಚ್‌ಒ ಡಾ.ಕೆ. ಮೋಹನ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಗೋಪಾಲಕೃಷ್ಣ, ನಗರಸಭೆ ಆಯುಕ್ತ ಎಂ.ಎಲ್. ರಮೇಶ್, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಗುಪ್ತಾಜಿ, ಕಾರ್ಮಿಕ ಅಧಿಕಾರಿ ರಾಮಕೃಷ್ಣ, ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್ ಸೋಮಶೇಖರ್, ಅಗ್ನಿಶಾಮಕ ದಳದ ಅಧಿಕಾರಿ ಚಂದನ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಚಂದ್ರಶೇಖರ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.