ADVERTISEMENT

ಮಳೆ: ಮತ್ತಷ್ಟು ಕಟ್ಟೆಚ್ಚರ ವಹಿಸಲು ಸೂಚನೆ

ಮಳೆ ಕಡಿಮೆಯಾಯಿತೆಂದು ಮೈಮರೆಯದಿರಿ; ಅಧಿಕಾರಿಗಳಿಗೆ ಕಿವಿಮಾತು ಹೇಳಿದ ಜಿಲ್ಲಾಧಿಕಾರಿ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2024, 7:30 IST
Last Updated 6 ಆಗಸ್ಟ್ 2024, 7:30 IST
ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ
ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ   

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ ಕಡಿಮೆಯಾಯಿತೆಂದು ಮೈಮರೆಯಬಾರದು. ಎಲ್ಲೆಡೆ ಕಟ್ಟೆಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಲ್ಲಿ ಅವರು ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೊ ಸಂವಾದ ನಡೆಸಿ ಪರಿಸ್ಥಿತಿಯನ್ನು ಪರಾಮರ್ಶಿಸಿದರು. ಕಳೆದ 2–3 ದಿನಗಳಲ್ಲಿ ಮಳೆ ಕಡಿಮೆಯಾಗಿದೆ. ಆದರೆ, ಹವಾಮಾನ ಇಲಾಖೆ ಇನ್ನು 3ರಿಂದ 4 ದಿನಗಳ ನಂತರ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ಹಾಗಾಗಿ, ಸಂಭಾವ್ಯ ಭೂಕುಸಿತ ಮತ್ತು ಪ್ರವಾಹಪೀಡಿತ ಸೂಕ್ಷ್ಮ ಪ್ರದೇಶಗಳಲ್ಲಿ ಗರಿಷ್ಠ ಮುನ್ನಚ್ಚರಿಕೆ ವಹಿಸಬೇಕು ಎಂದು ಅವರು ನಿರ್ದೇಶನ ನೀಡಿದರು.

ಕನಿಷ್ಠ ಎಂದರೂ ಮುಂದಿನ 10 ರಿಂದ 15 ದಿನಗಳ ಕಾಲ ಸಾಕಷ್ಟು ಎಚ್ಚರ ವಹಿಸಲೇಬೇಕಿದೆ. ಈ ನಿಟ್ಟಿನಲ್ಲಿ ಭೂಕುಸಿತ ಹಾಗೂ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಅಲ್ಲಿನ ಜನರಿಗೆ ಮಾಹಿತಿ ನೀಡಬೇಕು ಎಂದು ಅವರು ಸಲಹೆ ನೀಡಿದರು.

ADVERTISEMENT

ಪಕ್ಕದ ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದ ದುರಂತ ಎಲ್ಲಿಯೂ ಮರುಕಳಿಸಬಾರದು. ಜನ ಜಾನುವಾರುಗಳ ರಕ್ಷಣೆ ಅತೀ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಯಾವುದೇ ರೀತಿಯ ಪ್ರಾಣ ಹಾನಿ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸುವುದು ಅತ್ಯಗತ್ಯ ಎಂದು ಅವರು ತಿಳಿಸಿದರು.

ಜುಲೈ ತಿಂಗಳಲ್ಲಿ ಸುರಿದ ಧಾರಾಕಾರ ಮಳೆಯಿಂದ ನದಿ, ಜಲಾಶಯ, ತೊರೆ, ಹಳ್ಳ-ಕೊಳ್ಳಗಳು ತುಂಬಿ ಹರಿದವು. ಇದರಿಂದ ಅಂತರ್ಜಲ ಮಟ್ಟವು ಹೆಚ್ಚಾಗಿದೆ. ಆದ್ದರಿಂದ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಎಚ್ಚರವಹಿಸಬೇಕಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಕಾಳಜಿ ಕೇಂದ್ರಗಳಲ್ಲಿ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಬೇಕು. ಯಾವುದೇ ದೂರು ಬರದಂತೆ ಗಮನಹರಿಸುವುದು ಅತ್ಯಂತ ಹೆಚ್ಚಿನ ಅಗತ್ಯ ಎಂದು ತಹಶೀಲ್ದಾರರಿಗೆ ನಿರ್ದೇಶನ ನೀಡಿದರು.

ಮಳೆ ಹಾನಿ ತಕ್ಷಣದ ಕಾರ್ಯಗಳಿಗೆ ಗ್ರಾಮ ಪಂಚಾಯಿತಿಯಿಂದ ಹಣ ಬಿಡುಗಡೆ ಮಾಡಲಾಗುವುದು. ಸರ್ಕಾರದ ಮಾರ್ಗಸೂಚಿಯಂತೆ ಕಾರ್ಯನಿರ್ವಹಿಸುವಂತೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.

ಲೋಕೋಪಯೋಗಿ, ಪಂಚಾಯತ್ ರಾಜ್, ಸೆಸ್ಕ್, ಶಾಲೆಗಳು, ಅಂಗನವಾಡಿ ಕಟ್ಟಡಗಳು, ಸರ್ಕಾರಿ ಕಟ್ಟಡಗಳು ಹೀಗೆ ಮಳೆ ಹಾನಿ ಸಂಬಂಧ ನಿಖರ ಮಾಹಿತಿ ಒದಗಿಸುವಂತೆ ಸಂಬಂಧಪಟ್ಟ ಎಂಜಿನಿಯರ್‌ಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು. ತಹಶೀಲ್ದಾರ್‌ಗಳು, ಎಂಜಿನಿಯರ್‌ಗಳು, ವಿವಿಧ ಇಲಾಖೆ ಅಧಿಕಾರಿಗಳು ವಿಡಿಯೊ ಸಂವಾದಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.