ವಿರಾಜಪೇಟೆ: ‘ಪುರಸಭೆಯ ವ್ಯಾಪ್ತಿಯಲ್ಲಿ ರಾಜಕಾಲುವೆ ಒತ್ತುವರಿ ಮಾಡಿ ಕಟ್ಟಡ ನಿರ್ಮಿಸಿದವರಿಗೆ ಕೂಡಲೆ ನೋಟಿಸ್ ನೀಡಿ, ಒತ್ತುವರಿ ತೆರವುಗೊಳಿಸಿ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು ಅಧಿಕಾರಿಗಳಿಗೆ ಸೂಚಿಸಿದರು.
ಮಳೆಯಿಂದ ಹಾನಿಯಾಗಿರುವ ಸ್ಥಳಗಳಿಗೆ ಶನಿವಾರ ಶಾಸಕ ಎ.ಎಸ್.ಪೊನ್ನಣ್ಣ ಹಾಗೂ ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗುರುವಾರ ಸುರಿದ ಭಾರಿ ಮಳೆಗೆ ಹೆದ್ದಾರಿ ಮೇಲೆ ನೀರು ನಿಂತು ವಾಹನ ಸವಾರರು ಸೇರಿ ಸಾರ್ವಜನಿಕರು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿತ್ತು. ಪಟ್ಟಣದ ಗೋಣಿಕೊಪ್ಪಲು ರಸ್ತೆ ಮಾಂಸ ಮಾರುಕಟ್ಟೆ ಸೇತುವೆ ಬಳಿ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಪಟ್ಟಣದ ಶಾಂತಿ ನಗರದಲ್ಲಿ ಮಳೆನೀರು ಸರಾಗವಾಗಿ ಹರಿಯಲು ಚರಂಡಿ ಕಾಮಗಾರಿ ಕೈಗೊಳ್ಳಬೇಕು ಹಾಗೂ ಮೊಗರ ಗಲ್ಲಿ ಸೇರಿ ಒತ್ತುವರಿ ಆಗಿರುವ ಸ್ಥಳ ತೆರವುಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದರು.
ನಂತರ ಕೊಡಗು ದಂತ ವೈದ್ಯಕೀಯ ಕಾಲೇಜಿನ ಸಮೀಪ ರಸ್ತೆ ಬದಿ ಕುಸಿದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭ ಮಾತನಾಡಿದ ಅವರು, ‘ಪಟ್ಟಣದ ಬೆಟ್ಟ ಪ್ರದೇಶದ ನಿವಾಸಿಗಳಿಗೆ ಪುನರ್ವಸತಿ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರಕ್ಕೆ ಅಧಿಕಾರಿಗಳು ಪ್ರಸ್ತಾವನೆ ಕಳಿಸಿದ್ದಾರೆ. ಶೀಘ್ರ ಪುನರ್ವಸತಿ ಕಲ್ಪಿಸಲಾಗುವುದು’ ಎಂದರು.
ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಅವರು ಮಾತನಾಡಿ,‘ಈಗಾಗಲೇ ಬೆಟ್ಟ ಪ್ರದೇಶದ ನಿವಾಸಿಗಳ ಪುನರ್ವಸತಿಗೆ ಜಾಗ ಗುರುತಿಸಲಾಗಿದೆ. ನದಿ ತೀರ ಹಾಗೂ ಬೆಟ್ಟ ಪ್ರದೇಶದ ನಿವಾಸಿಗಳಿಗೆ ಯಾವುದೇ ಸಮಸ್ಯೆಗಳಾಗದ ರೀತಿಯಲ್ಲಿ ಸ್ಥಳಾಂತರ ಮಾಡಲು ಕ್ರಮಕೈಗೊಳ್ಳಲಾಗುವುದು. ಮಳೆಯಿಂದ ಹಾನಿಗೊಳಗಾದ ರಸ್ತೆಗಳ ದುರಸ್ತಿ ಕಾಮಗಾರಿಯನ್ನು ಅಧಿಕಾರಿಗಳು ಶೀಘ್ರದಲ್ಲಿ ಅರಂಭಿಸಲಿದ್ದಾರೆ’ ಎಂದರು.
ಈ ಸಂದರ್ಭ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್, ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್, ತಹಶೀಲ್ದಾರ್ ರಾಮಚಂದ್ರ, ಪುರಸಭೆ ಮುಖ್ಯಾಧಿಕಾರಿ ಚಂದ್ರ ಕುಮಾರ್, ಕಂದಾಯ ಪರಿವೀಕ್ಷಕ ಎಂ.ಹರೀಶ್, ನಗರ ಕಾಂಗ್ರೆಸ್ ಅಧ್ಯಕ್ಷ ಮಾದಂಡ ತಿಮ್ಮಯ್ಯ, ಕಾಂಗ್ರೆಸ್ ಪಕ್ಷದ ಮುಖಂಡರಾದ ಲಕ್ಷ್ಮಣ, ಕೆ.ಬಿ.ಶಾಂತಪ್ಪ, ಜಿಲ್ಲಾ ಘಟಕದ ಅಧ್ಯಕ್ಷ ಧರ್ಮಜ ಉತ್ತಪ್ಪ, ಪುರಸಭೆಯ ಸದಸ್ಯರು, ಲೋಕೋಪಯೋಗಿ ಅಧಿಕಾರಿಗಳು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.