ADVERTISEMENT

ತೈಲ ಬೆಲೆ ಶತಕ: ಕ್ರಿಕೆಟ್ ಆಡಿ ಅಣಕು ಪ್ರದರ್ಶನ

​ಪ್ರಜಾವಾಣಿ ವಾರ್ತೆ
Published 15 ಜೂನ್ 2021, 3:23 IST
Last Updated 15 ಜೂನ್ 2021, 3:23 IST
ಇಂಧನ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಸರ್ಕಾರಗಳ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ವಿರಾಜಪೇಟೆಯಲ್ಲಿ ಕ್ರಿಕೆಟ್‌ ಆಡಿ ಅಣಕು ಪ್ರದರ್ಶನ ಮಾಡಿದರು
ಇಂಧನ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಸರ್ಕಾರಗಳ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ವಿರಾಜಪೇಟೆಯಲ್ಲಿ ಕ್ರಿಕೆಟ್‌ ಆಡಿ ಅಣಕು ಪ್ರದರ್ಶನ ಮಾಡಿದರು   

ವಿರಾಜಪೇಟೆ: ಇಂಧನ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಕಾಂಗ್ರೆಸ್ ವತಿಯಿಂದ ಸೋಮವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪಟ್ಟಣದ ಮಲಬಾರ್ ರಸ್ತೆಯಲ್ಲಿ ನಡೆದ ಪ್ರತಿಭಟನೆಯಲ್ಲಿ

ಕ್ರಿಕೆಟ್ ಆಡಿ ಬ್ಯಾಟಿಂಗ್ ನಡೆಸಿ ಶತಕ ಬಾರಿಸಿದಂತೆ ಅಣಕು ಪ್ರದರ್ಶನ ನಡೆಸಿ ತೈಲ ದರ ಏರಿಕೆಯನ್ನು ಖಂಡಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿರುದ್ಧ ಘೋಷಣೆಗಳನ್ನು ಕೂಗಿದರು.

ADVERTISEMENT

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಮಾತನಾಡಿ, ‘ದೇಶದಲ್ಲಿ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಹಾಗೂ ದಿನಬಳಕೆಯ ವಸ್ತುಗಳ ದರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ.
ಇದರಿಂದ ಕೊರೊನಾ ನಡುವೆ ಜನಸಾಮಾನ್ಯರ ಬದುಕಿನಲ್ಲಿ ಗಾಯದ ಮೇಲೆ ಬರೆ ಎಳೆದಂತಾಗಿದೆ. ಇತಿಹಾಸದಲ್ಲಿ ಮೊದಲ ಬಾರಿಗೆ ಪೆಟ್ರೋಲ್ ದರ ಶತಕ ದಾಟಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬೆಲೆ ಏರಿಕೆಗೆ ಕೂಡಲೇ ಕಡಿವಾಣ ಹಾಕಬೇಕು’ ಎಂದು ಒತ್ತಾಯಿಸಿದರು.

ಈ ಸಂದರ್ಭ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ರಂಜಿ ಪೂಣಚ್ಚ, ಕೆಪಿಸಿಸಿ ಸದಸ್ಯ ಆರ್.ಕೆ. ಸಲಾಂ, ನಗರ ಘಟಕದ ಅಧ್ಯಕ್ಷ ಜಿ.ಜಿ. ಮೋಹನ್ ಅವರು ಮಾತನಾಡಿದರು.

ಜಿಲ್ಲಾ ಕಾಂಗ್ರೆಸ್‌ ಪರಿಶಿಷ್ಟ ಘಟಕದ ಅಧ್ಯಕ್ಷ ವಿ.ಕೆ.ಸತೀಶ್‌ಕುಮಾರ್, ಹಿರಿಯ ಮುಖಂಡ ಎಂ.ಎಸ್.ಪೂವಯ್ಯ, ನರೇಂದ್ರ ಕಾಮತ್, ಪ.ಪಂ.ಸದಸ್ಯರಾದ ಸಿ.ಕೆ. ಪೃಥ್ವಿನಾಥ್, ಮೊಹಮ್ಮದ್ ರಾಫಿ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.