ಕುಶಾಲನಗರ: ವಕ್ಫ್ ಕಾಯ್ದೆಗೆ ತಿದ್ದುಪಡಿ ಮಾಡಲು ಹೊರಟಿರುವ ಕೇಂದ್ರ ಸರ್ಕಾರದ ನಡೆಯನ್ನು ವಿರೋಧಿಸಿ ತಾಲ್ಲೂಕು ಮುಸ್ಲಿಂ ಒಕ್ಕೂಟದಿಂದ ಪಟ್ಟಣದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ಇಲ್ಲಿನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಜಮಾಯಿಸಿದ ತಾಲ್ಲೂಕು ಮುಸ್ಲಿಂ ಒಕ್ಕೂಟದ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ತಾಲ್ಲೂಕು ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಈ.ಕೆ.ಅಬ್ದಲ್ ಕರೀಂ ಮಾತನಾಡಿ, ಕೇಂದ್ರದ ನರೇಂದ್ರ ಮೋದಿ ಸರ್ಕಾರ ಮುಸಲ್ಮಾನರ ವಕ್ಫ್ ಆಸ್ತಿಯನ್ನು ಕಬಳಿಸುವ ಅಪಾಯಕಾರಿ ಕಾನೂನನ್ನು ಜಾರಿಗೆ ತರುತ್ತಿದ್ದು, ಇದು ಮುಸ್ಲಿಂ ವಿರೋದಿಯಾಗಿದೆ. ಈ ತಿದ್ದುಪಡಿ ಕಾಯ್ದೆಯನ್ನು ಸಂಪೂರ್ಣ ವಿರೋಧಿಸುವುದಾಗಿ ಹೇಳಿದರು.
ಅದೇ ರೀತಿ ಕೊಡಗು ವಿಶ್ವ ವಿದ್ಯಾನಿಲಯವನ್ನು ಮುಚ್ಚುವ ರಾಜ್ಯ ಸರ್ಕಾರದ ನಡೆ ಖಂಡನೀಯ. ಕೂಡಲೇ ಈ ನಿರ್ಧಾರದಿಂದ ಹಿಂದೆ ಸರಿದು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೊಡಗು ವಿವಿ ಮುಂದುವರಿಸಬೇಕು ಎಂದು ಒತ್ತಾಯಿಸಿದರು.
ಅಲ್ಪಸಂಖ್ಯಾತರ ಘಟಕದ ತಾಲ್ಲೂಕು ಅಧ್ಯಕ್ಷ ಅಬ್ದುಲ್ ರಜಾಕ್ ಮಾತನಾಡಿ, ವಕ್ಪ್ ತಿದ್ದುಪಡಿ ಮಸೂದೆ ಮುಸ್ಲಿಂ ವಿರೋಧಿಯಾಗಿದ್ದು, ಮುಸ್ಲಿಂ ಸಮುದಾಯದ ಸಂಘಟನೆಗಳ, ಜನ ಪ್ರತಿನಿಧಿಗಳ ಅಭಿಪ್ರಾಯವನ್ನು ಪರಿಗಣಿಸದೇ, ಜನರ ಹಿತಾಸಕ್ತಿಗೆ ಕೇಂದ್ರ ಸರ್ಕಾರ ಧಕ್ಕೆ ತರುತ್ತಿದೆ ಎಂದು ದೂರಿದರು.
ಒಕ್ಕೂಟದ ಮುಖಂಡರಾದ ಇಬ್ರಾಹಿಂ, ಆದಂ, ಉಸ್ಮಾನ್, ರಿಜ್ವಾನ್, ಸಮಿ, ಸಾಮಾಜಿಕ ಕಾರ್ಯಕರ್ತ ಹನೀಫ್ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.